ADVERTISEMENT

ನೀರು ಸರಬರಾಜಿಗೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಆರ್. ಲತಾ ಸೂಚನೆ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2020, 15:45 IST
Last Updated 16 ಮಾರ್ಚ್ 2020, 15:45 IST
ಸಭೆಯಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಮಾತನಾಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಮಾತನಾಡಿದರು.   

ಚಿಕ್ಕಬಳ್ಳಾಪುರ: ‘ಬಿಸಿಲಿನ ಧಗೆ ಏರಿಕೆಯಾಗುತ್ತಿರುವ ಕಾರಣ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗುವ ಗ್ರಾಮಗಳಿಗೆ ಅಧಿಕಾರಿಗಳು ಖಾಸಗಿ ಕೊಳವೆ ಬಾವಿಗಳ ಮುಖಾಂತರ ಸಮರ್ಪಕವಾಗಿ ನೀರನ್ನು ಸರಬರಾಜು ಮಾಡಲು ಕ್ರಮಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಈಗಾಗಲೇ ಸರ್ಕಾರ ಬಾಗೇಪಲ್ಲಿ, ಗುಡಿಬಂಡೆ ಮತ್ತು ಚಿಂತಾಮಣಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳು ಎಂದು ಘೋಷಣೆ ಮಾಡಿದೆ. ಪ್ರಸ್ತುತ ದಿನಗಳಲ್ಲಿ 117 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. 35 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರಿನ ಸರಬರಾಜು ಮಾಡಲಾಗುತ್ತಿದ್ದು, 82 ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ’ ಎಂದು ತಿಳಿಸಿದರು.

ADVERTISEMENT

‘ಮುಂದಿನ ತಿಂಗಳ ಒಳಗೆ 420 ಗ್ರಾಮಗಳಲ್ಲಿ ಕುಡಿಯುವ ನೀರು ಸಮಸ್ಯೆ ಕಾಣಿಸಿಕೊಳ್ಳುವ ಸಂಭವವಿದೆ. ಆದ್ದರಿಂದ, ಸಮಸ್ಯೆ ಕಂಡು ಬಂದ ಕಡೆಗಳಲ್ಲಿ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರಿನ ಸಮಸ್ಯೆಗೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕು. ಆದಷ್ಟೂ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವುದನ್ನು ಕಡಿಮೆ ಮಾಡಬೇಕು’ ಎಂದರು.

‘ಚಿಂತಾಮಣಿಯ ನಗರಸಭೆ, ಬಾಗೇಪಲ್ಲಿಯ ಪುರಸಭೆ ಹಾಗೂ ಗುಡಿಬಂಡೆಯ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 24 ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಅಧಿಕಾರಿಗಳು ಕುಡಿಯುವ ನೀರಿನ ಸರಬರಾಜಿಗೆ ಮೇ ತಿಂಗಳವರೆಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾದಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್, ಉಪವಿಭಾಗಾಧಿಕಾರಿ ಎ.ಎನ್. ರಘುನಂದನ್, ತಾಲ್ಲೂಕು ಪಂಚಾಯಿತಿಗಳ ಕಾರ್ಯ ನಿರ್ವಹಣಾಧಿಕಾರಿಗಳು, ತಹಶೀಲ್ದಾರ್‌ರು ಸಭೆಯಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.