ADVERTISEMENT

ಚಿಕ್ಕಬಳ್ಳಾಪುರ | ನಾಳೆ ರೈತ ಸಂಘಟನೆಗಳಿಂದ ಪ್ರತಿಭಟನೆ

ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಕರೆಗೆ ಬೆಂಬಲ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2020, 13:51 IST
Last Updated 8 ಆಗಸ್ಟ್ 2020, 13:51 IST

ಚಿಕ್ಕಬಳ್ಳಾಪುರ: ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ಧೋರಣೆ ಖಂಡಿಸಿ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಕರೆಯ ಮೆರೆಗೆ ಸೋಮವಾರ (ಆ.10) ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ರೈತರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಭೂಸುಧಾರಣಾ ಕಾಯ್ದೆ ತಿದ್ದುಪಡಿಗೆ ರೈತ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದರೂ ರಾಜ್ಯ ಸರ್ಕಾರ ತನ್ನ ನಿಲುವು ಬದಲಿಸಿಕೊಂಡಿಲ್ಲ. 1942ರಲ್ಲಿ ಕ್ವಿಟ್ ಇಂಡಿಯಾ ಚಳುವಳಿಗೆ ಕರೆ ನೀಡಿದ್ದ ಇದೇ ಸಂದರ್ಭದಲ್ಲಿಇದೀಗ ರೈತ ಸಂಘಟನೆಗಳು ಕಾರ್ಪೊರೇಟ್ ಕಂಪನಿಗಳೇ ಬೇಸಾಯ ಬಿಟ್ಟು ತೊಲಗಿ ಎಂಬ ವಿನೂತನ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದರು.

‘ಈಗಾಗಲೇ ಸಾಕಷ್ಟು ರೈತ ವಿರೋಧಿ ನಿರ್ಧಾರಗಳನ್ನು ಕೈಗೊಂಡಿರುವ ಕೇಂದ್ರ ಸರ್ಕಾರ ರೈತರನ್ನು ಬೀದಿಗೆ ತಂದಿದೆ. ಇದೀಗ ರಾಜ್ಯ ಸರ್ಕಾರ ಕೂಡ ಅದೇ ಹಾದಿಯಲ್ಲಿ ಸಾಗಿದೆ. 2011ರ ಭೂಗಣತಿಯಂತೆ ಕರ್ನಾಟಕ ಕೃಷಿ ಪ್ರಧಾನ ರಾಜ್ಯವಾಗಿ ಉಳಿದಿಲ್ಲ. ಸರ್ಕಾರ ತಿದ್ದುಪಡಿ ಹಿಂಪಡೆಯದಿದ್ದರೆ ರೈತರು ಮತ್ತಷ್ಟು ಸಂಕಷ್ಟ ಎದುರಿಸಬೇಕಾಗುತ್ತದೆ’ ಎಂದರು.

ADVERTISEMENT

‘ಕೋವಿಡ್ ಸೇರಿದಂತೆ ಹಲವು ಪ್ರಾಕೃತಿಕ ವಿಕೋಪಗಳಿಂದ ಬೆಳೆಯು ಕೈಸೇರದೆ ರೈತರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿರುವುದರಿಂದ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ನೀಡಬೇಕು. ರೈತ ವಿರೋಧಿ ನಿರ್ಧಾರಗಳನ್ನು ಕೈಬಿಟ್ಟು ಕೃಷಿಗೆ ಪೂರಕ ವಾತಾವಣ ನಿರ್ಮಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಈ ಪ್ರತಿಭಟನೆ ನಡೆಯಲಿದೆ’ ಎಂದು ಹೇಳಿದರು.

ರಾಜ್ಯ ಕೃಷಿ ಕೂಲಿಕಾರರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಎಂ.ಪಿ.ಮುನಿವೆಂಕಟಪ್ಪ, ಸಿಐಟಿಯು ಜಿಲ್ಲಾ ಘಟಕದ ಕಾರ್ಯದರ್ಶಿ ಜಿ.ಸಿದ್ಧಗಂಗಪ್ಪ, ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ಕೆ.ಆರ್.ಮಂಜುಳಾ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.