ADVERTISEMENT

ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ವಿಜಯಪುರ ಜಿಲ್ಲೆಯ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ ಖಂಡನೆ, ಕಠಿಣ ಕ್ರಮಕ್ಕೆ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2019, 10:35 IST
Last Updated 5 ಅಕ್ಟೋಬರ್ 2019, 10:35 IST
ನಗರದಲ್ಲಿ ಸಮತಾ ಸೈನಿಕದ ದಳದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ನಗರದಲ್ಲಿ ಸಮತಾ ಸೈನಿಕದ ದಳದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.   

ಚಿಕ್ಕಬಳ್ಳಾಪುರ: ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲ್ಲೂಕು ಅಸಂತಾಪುರ ಗ್ರಾಮದ ಪಿಯು ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ನಡೆಸಿ, ಕೊಲೆ ಮಾಡಿದ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ಜರುಗಿಸಬೇಕು ಎಂದು ಆಗ್ರಹಿಸಿ ಸಮತಾ ಸೈನಿಕದ ದಳದ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟಿಸಿ, ಬಳಿಕ ತಾಲ್ಲೂಕು ಕಚೇರಿಗೆ ತೆರಳಿ ತಹಶೀಲ್ದಾರ್ ಕೆ.ನರಸಿಂಹಮೂರ್ತಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಸಮತಾ ಸೈನಿಕ ದಳದ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್, ‘ರಾಜ್ಯದಲ್ಲಿ ಕೋಮುವಾದದ ಜ್ವಾಲೆಯಿಂದ ಜನತೆ ನಲುಗುತ್ತಿದ್ದರೆ, ಇನ್ನೊಂದೆಡೆ ಇಡೀ ಸಮಾಜವೇ ತಲೆ ತಗ್ಗಿಸುವ ಹೇಯ ಕೃತ್ಯಗಳು ವಿದ್ಯಾರ್ಥಿನಿಯರ ಮೇಲೆ ನಿರಂತರವಾಗಿ ನಡೆಯುತ್ತಿರುವುದು ಶೋಚನೀಯ ಸಂಗತಿ’ ಎಂದು ಹೇಳಿದರು.

ADVERTISEMENT

‘ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಕೊಲೆ ಮಾಡುವುದು, ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಒಡ್ಡುವ ಪ್ರಕರಣಗಳಿಂದಾಗಿ ವಿದ್ಯಾರ್ಥಿ ಸಮುದಾಯದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕೂಡಲೇ ಸರ್ಕಾರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವ ಮೂಲಕ ಇದನ್ನು ಹೋಗಲಾಡಿಸುವ ಕೆಲಸ ಮಾಡಬೇಕು’ ಎಂದು ಆಗ್ರಹಿಸಿದರು.

‘ವಿದ್ಯಾರ್ಥಿನಿಯರ ಮೇಲೆ ನಡೆಯುತ್ತಿರುವ ಹೇಯ ಕೃತ್ಯಗಳನ್ನು ತಡೆಯಲು, ಪುಂಡಾಟಿಕೆ ಪ್ರದರ್ಶಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವ ಮೂಲಕ ವಿದ್ಯಾರ್ಥಿನಿಯರಲ್ಲಿ ನೆಲೆಸಿರುವ ಭಯದ ಕಾರ್ಮೋಡವನ್ನು ತೊಡೆದುಹಾಕಬೇಕು’ ಎಂದು ತಿಳಿಸಿದರು.

‘ಗ್ರಾಮೀಣ ಹೆಣ್ಣುಮಕ್ಕಳು ದೂರದ ಪ್ರದೇಶದ ಶಾಲಾ ಕಾಲೇಜುಗಳಲ್ಲಿ ವಿದ್ಯಾಭ್ಯಾಸಕ್ಕಾಗಿ ತೆರಳುತ್ತಾರೆ. ಅಂತವರಿಗೆ ಸೂಕ್ತ ರಕ್ಷಣೆ ಇಲ್ಲದಂತಾಗಿದೆ. ರಾಜ್ಯದಲ್ಲಿ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳು, ಅತ್ಯಾಚಾರಗಳು, ಕೋಮುಗಲಭೆಗಳು ಹೆಚ್ಚುತ್ತಿವೆ. ಜನಸಾಮಾನ್ಯರಲ್ಲಿ ಭಯದ ವಾತಾವರಣ ಸೃಷ್ಟಿ ಆಗಿದೆ. ಸರ್ಕಾರ ಇನ್ನಾದರೂ ಎಚ್ಚೆತ್ತುಕೊಂಡು ಕಾನೂನು ಸುವ್ಯವಸ್ಥೆ ಕಾಪಾಡಲು ಮುಂದಾಗಬೇಕು’ ಎಂದು ಒತ್ತಾಯಿಸಿದರು.

ಸಂಘಟನೆಯ ಮುಖಂಡರಾದ ಕೆ.ನರಸಿಂಹಮೂರ್ತಿ, ಮುನಿರಾಜು, ಗೋಪಾಲ್, ಸತ್ಯನಾರಾಯಣ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.