ADVERTISEMENT

ವೇತನ ಪಾವತಿಗೆ ಒತ್ತಾಯಿಸಿ ಪ್ರತಿಭಟನೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳ ಆಗ್ರಹ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2019, 13:01 IST
Last Updated 16 ಡಿಸೆಂಬರ್ 2019, 13:01 IST
ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳು ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳು ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.   

ಚಿಕ್ಕಬಳ್ಳಾಪುರ: ವಸತಿ ನಿಲಯಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ‘ಡಿ’ ಗ್ರೂಪ್ ನೌಕರರಿಗೆ ವೇತನ ಬಿಡುಗಡೆ, ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳು ಸೋಮವಾರ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಆಂಜನೇಯರೆಡ್ಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ವಸತಿ ಶಿಕ್ಷಣ ಸಂಸ್ಥೆ ಅಡಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ 'ಡಿ' ಗ್ರೂಪ್ ನೌಕರರಾಗಿ ದುಡಿಯುತ್ತಿರುವ ನೌಕರರಿಗೆ ಕಳೆದ 10 ತಿಂಗಳಿನಿಂದ ವೇತನ ನೀಡಿಲ್ಲ. ಬಾಕಿ ಇರುವ ವೇತನವನ್ನು ತ್ವರಿತಗತಿಯಲ್ಲಿ ಪಾವತಿಸಬೇಕು’ ಎಂದು ಆಗ್ರಹಿಸಿದರು.

‘ಜಿಲ್ಲೆಯಲ್ಲಿರುವ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ವಸತಿ ನಿಲಯಗಳಲ್ಲಿ 800 ಜನರು ಡಿ ಗ್ರೂಪ್‌ ನೌಕರರಾಗಿ ಕಳೆದ 25 ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಇವರನ್ನು ಇತ್ತೀಚಿಗೆ ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡಿದ್ದಾರೆ. ಆದರೆ ಆಗ ಈ ನೌಕರರಿಗೆ ಸರ್ಕಾರದಿಂದ ಸಿಗಬೇಕಾದ ಸವಲತ್ತು ಒದಗಿಸದೇ ಅತಂತ್ರ ಸ್ಥಿತಿಗೆ ದೂಡಲಾಗಿದೆ. 10 ತಿಂಗಳಿಂದ ವೇತನವಿಲ್ಲದೆ ನೌಕರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಸರ್ಕಾರ ಒಂದೇ ಕಂತಿನಲ್ಲಿ ವೇತನ ಬಾಕಿ ಪಾತಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

‘25ವರ್ಷಗಳಿಂದ ಕೆಲಸ ಮಾಡುತ್ತಿರುವ ನೌಕರರನ್ನು ಕಾಯಂಗೊಳಿಸಿ ಸೇವಾ ಭದ್ರತೆ ಕಲ್ಪಿಸಬೇಕು. ಯಾವುದೇ ಕಾರಣಕ್ಕೂ ನೌಕರರನ್ನು ಕೆಲಸದಿಂದ ಕೈಬಿಡುವ ಹುನ್ನಾರಗಳನ್ನು ನಡೆಸಿದರೆ ಸಂಘ ಉಗ್ರ ಹೋರಾಟ ನಡೆಸಲಿದೆ. ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ನೌಕರರಿಗೆ ಸೇವಾ ಭದ್ರತೆ ಕಲ್ಪಿಸಿ ಕೊಡಲು ಸೂಕ್ತ ದಾಖಲೆಗಳನ್ನು ಸರ್ಕಾರಕ್ಕೆ ಸಲ್ಲಿಸಬೇಕು. ಹಾಲಿ ಕೆಲಸ ಮಾಡುತ್ತಿರುವ ನೌಕರರು ನಿವೃತ್ತಿ ಹೊಂದುವವರೆಗೂ ಸೇವಾ ಭದ್ರತೆ ಒದಗಿಸಬೇಕು. ಅವೈಜ್ಞಾನಿಕ ವೇತನ ನಿಲ್ಲಿಸಿ ಕಾನೂನುಬದ್ಧ ವೇತನ ನೇರವಾಗಿ ನೌಕರರ ಖಾತೆಗೆ ಜಮಾ ಮಾಡಬೇಕು’ ಎಂದು ಹೇಳಿದರು.

‘ಇವತ್ತು ರಾಜ್ಯ ಸರ್ಕಾರ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರನ್ನು ಕೆಲಸದಿಂದ ತೆಗೆದು ಹಾಕುವ ಮೂಲಕ ಬೀದಿಪಾಲು ಮಾಡಲು ಹೊರಟಿದೆ. ಈಗಾಗಲೇ ನೌಕರರ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಶ್ರೀರಾಮುಲು ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ಆದರೆ ಸರ್ಕಾರ ನೌಕರರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ’ ಎಂದು ಆರೋಪಿಸಿದರು.

‘ನೌಕರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಕಾರ್ಮಿಕ ಕಾನೂನುಗಳನ್ನು ಜಾರಿಗೆ ತರಬೇಕು. ಪ್ರತಿ ತಿಂಗಳು 5ನೇ ತಾರೀಖಿನ ಒಳಗೆ ವೇತನ ನೀಡಬೇಕು. ಇಎಸ್‍ಐ ಸೌಲಭ್ಯಗಳನ್ನು ನೀಡಬೇಕು’ ಎಂದು ಆಗ್ರಹಿಸಿದರು.

ಪ್ರತಿಭಟನಕಾರರು ತಹಶೀಲ್ದಾರ್ ಕೆ.ನರಸಿಂಹಮೂರ್ತಿ ಅವರಿಗೆ ಮನವಿ ಸಲ್ಲಿಸಿದರು. ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ಮುನಿಯಪ್ಪ, ತಾಲ್ಲೂಕು ಘಟಕದ ಅಧ್ಯಕ್ಷ ಕದಿರಪ್ಪ, ಕಾರ್ಯದರ್ಶಿ ಪ್ರಮೀಳಮ್ಮ, ಮುಖಂಡ ಕೆ.ನವೀನ್‌ ಕುಮಾರ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.