ಬಾಗೇಪಲ್ಲಿ: ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯಲ್ಲಿ ಭೂಸ್ವಾಧೀನ ಕೈಬಿಡಬೇಕು ಎಂದು ಆಗ್ರಹಿಸಿ ಬುಧವಾರ ಅಲ್ಲಿನ ತಾಲ್ಲೂಕು ಕಚೇರಿ ಮುಂದೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರು ಹಾಗೂ ಮುಖಂಡರನ್ನು ಬಂಧಿಸಿದ ರಾಜ್ಯ ಸರ್ಕಾರ ಹಾಗೂ ಪೊಲೀಸ್ ಕ್ರಮ ಖಂಡಿಸಿ, ಪಟ್ಟಣದ ಬಸ್ ನಿಲ್ದಾಣದಲ್ಲಿ ಗುರುವಾರ ಸಂಯುಕ್ತ ಹೋರಾಟ ಸಮಿತಿ ನೇತೃತ್ವದಲ್ಲಿ ಕೃಷಿ ಕೂಲಿ ಕಾರ್ಮಿಕರು, ದಲಿತಪರ ಸಂಘಟನೆಗಳ ಮುಖಂಡರು ಕೆಲಕಾಲ ಪ್ರತಿಭಟನೆ ನಡೆಸಿದರು.
ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘದ ರಾಜ್ಯ ಉಪಾಧ್ಯಕ್ಷ ಎಂ.ಪಿ.ಮುನಿವೆಂಕಟಪ್ಪ ಮಾತನಾಡಿ, ಸರ್ಕಾರ ರೈತರ ಜಮೀನು ಭೂಸ್ವಾಧೀನಪಡಿಸಲು ಮುಂದಾಗಿರುವುದು ಖಂಡನೀಯ. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ನೇತೃತ್ವದ ಆಗಿನ ಬಿಜೆಪಿ ಸರ್ಕಾರ ರೈತರ ಭೂಸ್ವಾಧೀನ ಪ್ರಕ್ರಿಯೆಗೆ ಮುಂದಾಗಿತ್ತು. ಅಂದಿನ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ, ಮಾತಿಗೆ ತಪ್ಪಿದ್ದಾರೆ ಎಂದರು.
ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಹ ಸಂಚಾಲಕ ಡಿ.ಟಿ.ಮುನಿಸ್ವಾಮಿ ಮಾತನಾಡಿ, ರೈತರ ಜಮೀನು ಭೂಸ್ವಾಧೀನಪಡಿಸಿಕೊಳ್ಳಬಾರದು ಎಂದು ಮೂರು ವರ್ಷಗಳಿಂದ ರೈತರು ಹೋರಾಟ ಮಾಡಿದ್ದಾರೆ. ಕೃಷಿ ಕೂಲಿಕಾರ್ಮಿಕರ ಹಕ್ಕುಗಳನ್ನು ಪಡೆಯಲು ಬೀದಿಗಿಳಿದು ಪ್ರತಿಭಟನೆ ಮಾಡಬೇಕಾಗಿದೆ ಎಂದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ(ಪುಟ್ಟಣ್ಣಯ್ಯ ಬಣದ) ಜಿಲ್ಲಾ ಅಧ್ಯಕ್ಷ ಟಿ.ಲಕ್ಷ್ಮೀನಾರಾಯಣರೆಡ್ಡಿ ಮಾತನಾಡಿ, ಸರ್ಕಾರದ್ದು ಇಬ್ಬಗೆ ನೀತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಸಮಿತಿ ಸಹಕಾರ್ಯದರ್ಶಿ ಬಿಳ್ಳೂರುನಾಗರಾಜ್, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಚನ್ನರಾಯಪ್ಪ, ಮುಖಂಡರಾದ ಅಶ್ವಥ್ಥಪ್ಪ, ಜಿ.ಕೃಷ್ಣಪ್ಪ, ಎ.ಸೋಮಶೇಖರ, ರಾಮಾಂಜಿ, ಬಿ.ಎಚ್.ರಫೀಕ್, ನರಸಿಂಹರೆಡ್ಡಿ, ಇಮ್ರಾನ್, ರವಣಪ್ಪ, ಅಬೂಬಕರ್, ನರಸಿಂಹಮೂರ್ತಿ(ಅಪ್ಪಯ್ಯ), ರೈತ ಸಂಘ ಹಾಗೂ ಹಸಿರು ಸೇನೆ ಪುಟ್ಟಣ್ಣಯ್ಯ ಬಣದ ಈಶ್ವರರೆಡ್ಡಿ, ವೆಂಕಟರಾಮಯ್ಯ, ರೈತ ಸಂಘಟನೆಗಳ ಒಕ್ಕೂಟದ ಜಿಲ್ಲಾ ಮುಖಂಡ ಎಚ್.ಎನ್.ಗೋವಿಂದರೆಡ್ಡಿ ಮತ್ತಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.