ADVERTISEMENT

ಚಿಕ್ಕಬಳ್ಳಾಪುರ | ನಿವೇಶನ ರಹಿತರಿಗೆ ಸೂರು ಒದಗಿಸಿ: ಡಿಸಿ ಸೂಚನೆ

ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2020, 1:59 IST
Last Updated 29 ನವೆಂಬರ್ 2020, 1:59 IST
ಸಭೆಯಲ್ಲಿ ಜಿಲ್ಲಾಧಿಕಾರಿ ಆರ್. ಲತಾ ಮಾತನಾಡಿದರು
ಸಭೆಯಲ್ಲಿ ಜಿಲ್ಲಾಧಿಕಾರಿ ಆರ್. ಲತಾ ಮಾತನಾಡಿದರು   

ಚಿಕ್ಕಬಳ್ಳಾಪುರ: ‘ಗ್ರಾಮೀಣ ಪ್ರದೇಶದಲ್ಲಿರುವ ಎಲ್ಲಾ ನಿವೇಶನ ರಹಿತರಿಗೆ ನಿವೇಶನ ನೀಡಲು ಜಮೀನು ಮಂಜೂರು ಮಾಡುವ ಅಭಿಯಾನವನ್ನು ಜಿಲ್ಲೆಯಾದ್ಯಂತ ಕೈಗೊಳ್ಳಲಾಗಿದೆ. ಅದಕ್ಕಾಗಿ ತ್ವರಿತಗತಿಯಲ್ಲಿ ಜಮೀನು ಗುರುತಿಸಿ ನಿವೇಶನ ಹಂಚಿಕೆ ಮಾಡುವ ಪ್ರಕ್ರಿಯೆ ಪೂರ್ಣಗೊಳಿಸಬೇಕು’ ಎಂದು ಜಿಲ್ಲಾಧಿಕಾರಿ ಆರ್. ಲತಾ ಅವರು ಎಲ್ಲಾ ತಹಶೀಲ್ದಾರ್ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ತಹಶೀಲ್ದಾರ್ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಜಿಲ್ಲೆಯ ಪ್ರತಿಯೊಬ್ಬ ನಿವೇಶನ ರಹಿತ ನಾಗರಿಕರಿಗೆ ಸೂರು ಕಲ್ಪಿಸಿಕೊಡುವುದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್ ಅವರ ಮಹತ್ವಾಕಾಂಕ್ಷೆಯಾಗಿದೆ. ಅದಕ್ಕಾಗಿ ಜಿಲ್ಲಾಡಳಿತ ನಿವೇಶನ ರಹಿತರಿಗೆ ನಿವೇಶನ ಮಂಜೂರು ಮಾಡುವ ಅಭಿಯಾನವನ್ನು ಕಳೆದ ಒಂದೂವರೆ ತಿಂಗಳಿನಿಂದ ಹಮ್ಮಿಕೊಂಡಿದೆ’ ಎಂದು ಹೇಳಿದರು.

ADVERTISEMENT

‘ಜಿಲ್ಲೆಯ ಎಲ್ಲಾ ತಹಶೀಲ್ದಾರರು ಈಗಾಗಲೇ ಪ್ರತಿ ತಾಲ್ಲೂಕಿನಲ್ಲಿ ಲಭ್ಯವಿರುವ ಸರ್ಕಾರಿ ಜಮೀನನ್ನು ಗುರುತಿಸಿದ್ದು, ನಿವೇಶನ ರಹಿತರ ಪಟ್ಟಿಯನ್ನು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳಿಂದ ಪಡೆದಿದ್ದಾರೆ. ಗ್ರಾಮೀಣ ಭಾಗದಲ್ಲಿ ಸುಮಾರು 21,000 ನಿವೇಶನ ರಹಿತರು ಇರುವುದು ಕಂಡುಬಂದಿದೆ. ಅವರಿಗೆಲ್ಲ ಆದ್ಯತೆ ಮೇರೆಗೆ ನಿವೇಶನ ಹಂಚಿಕೆ ಮಂಜೂರು ಮಾಡಲು ಕ್ರಮಗೊಳ್ಳಲಾಗುತ್ತಿದೆ’ ಎಂದು ತಿಳಿಸಿದರು.

ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ. ಶಿವಶಂಕರ್, ಉಪ ವಿಭಾಗಾಧಿಕಾರಿ ಎ.ಎನ್. ರಘುನಂದನ್, ಜಿ.ಪಂ. ಉಪ ಕಾರ್ಯದರ್ಶಿ ನೋಮೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.