ADVERTISEMENT

ಜೂನ್ 18ರಿಂದ ಪಿಯುಸಿ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 15 ಜೂನ್ 2020, 15:29 IST
Last Updated 15 ಜೂನ್ 2020, 15:29 IST

ಚಿಕ್ಕಬಳ್ಳಾಪುರ: ‘ಜಿಲ್ಲೆಯಲ್ಲಿ ಜೂನ್ 18 ರಿಂದ 22 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಮುಂಜಾಗ್ರತಾ ಕ್ರಮಗಳನ್ನು ಒಳಗೊಂಡ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ಉಪ ವಿಭಾಗಾಧಿಕಾರಿ ಎ.ಎನ್. ರಘುನಂದನ್ ಹೇಳಿದರು.

ಜಿಲ್ಲಾಧಿಕಾರಿ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

‘ಪರೀಕ್ಷೆಗಾಗಿ ಚಿಕ್ಕಬಳ್ಳಾಪುರದಲ್ಲಿ 6, ಶಿಡ್ಲಘಟ್ಟ 2, ಚಿಂತಾಮಣಿ 6, ಗೌರಿಬಿದನೂರು 4, ಬಾಗೇಪಲ್ಲಿ 3, ಗುಡಿಬಂಡೆ 1 ಪರೀಕ್ಷಾ ಕೇಂದ್ರ ತೆರೆಯಲಾಗಿದೆ. ಬೆಳಿಗ್ಗೆ 10.15 ರಿಂದ 1.30ರ ವರೆಗೆ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತ ಸೆಕ್ಷನ್ 144 ಜಾರಿ ಮಾಡಿ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷೆ ನಡೆಯುವ ಸಮಯದಂದು ಮುಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ’ ಎಂದು ತಿಳಿಸಿದರು.

ADVERTISEMENT

‘ಚಿಕ್ಕಬಳ್ಳಾಪುರದಲ್ಲಿ 3,209, ಬಾಗೇಪಲ್ಲಿ 1,676, ಗೌರಿಬಿದನೂರು 2,230, ಶಿಡ್ಲಘಟ್ಟ 1,671, ಚಿಂತಾಮಣಿ 3,326, ಗುಡಿಬಂಡೆ 103 ಒಟ್ಟು 12,215 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ’ ಎಂದರು.

‘ಪರೀಕ್ಷಾ ದಿನಾಂಕದಂದು ಪರೀಕ್ಷಾ ಕೇಂದ್ರಕ್ಕೆ ಹೋಗಿ ಬರಲು ವಿದ್ಯಾರ್ಥಿಗಳು ಹಳೆಯ ಬಸ್‌ ಪಾಸ್‌ ಮತ್ತು ಪರೀಕ್ಷಾ ಪತ್ರ ತೋರಿಸಿ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸಬಹುದು. ಎಲ್ಲಾ ವಿದ್ಯಾರ್ಥಿಗಳು ಬೆಳಿಗ್ಗೆ 8.30ರ ಒಳಗೆ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಿ ಥರ್ಮಲ್ ಸ್ಕ್ಯಾನಿಂಗ್‍ಗೆ ಒಳಗಾಗಬೇಕು’ ಎಂದು ಹೇಳಿದರು.

‘ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಗಾಗಿ ಪ್ರತಿ ಪರೀಕ್ಷಾ ಕೇಂದ್ರಕ್ಕೆ 4 ಮಂದಿ ಆರೋಗ್ಯ ಇಲಾಖೆಯ ಸಿಬ್ಬಂದಿ ನಿಯೋಜಿಸಲಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಅಂತರ ಕಾಪಾಡಿಕೊಳ್ಳಬೇಕು. ಮನೆಯಿಂದಲೇ ಕುಡಿಯುವ ನೀರಿನ ಬಾಟಲ್‍ ತರಬೇಕು’ ಎಂದು ತಿಳಿಸಿದರು.

‘ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಮೂರು ದಿನ ಮುಂಚಿತವಾಗಿ ಸ್ಯಾನಿಟೈಸ್ ಮಾಡಿಸಲಾಗುವುದು. ಮುಖ್ಯ ಅಧೀಕ್ಷಕರಿಗೆ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಸೌಕರ್ಯ ಕಡ್ಡಾಯವಾಗಿ ಕಲ್ಪಿಸುವಂತೆ ಸೂಚಿಸಲಾಗಿದೆ. ಪ್ರತಿ ಹೋಬಳಿಯಿಂದ ಪರೀಕ್ಷಾ ಕೇಂದ್ರಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.