ADVERTISEMENT

ಸೆ.7 ರಿಂದ ಪಿಯುಸಿ ಪೂರಕ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2020, 14:57 IST
Last Updated 1 ಸೆಪ್ಟೆಂಬರ್ 2020, 14:57 IST

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಸೆ.7 ರಿಂದ 19ರ ವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಸಲು ಈಗಾಗಲೇ 8 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಪರೀಕ್ಷಾ ಮುನ್ನ ದಿನ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸ್ಯಾನಿಟೈಜರ್ ಮಾಡಿಸಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಅಮರೇಶ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಸುವ್ಯಸ್ಥೆಯ ಬಗ್ಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಮಾತನಾಡಿದರು.

‘ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಕೋವಿಡ್-19 ತುರ್ತು ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು’ ಎಂದು ಹೇಳಿದರು.

ADVERTISEMENT

‘ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತ 144 ಸೆಕ್ಷನ್ ಜಾರಿಗೊಳಿಸಲಾಗುತ್ತದೆ. ಪರೀಕ್ಷಾ ಕೇಂದ್ರಗಳ ಬಳಿ ಪ್ರತಿಯೊಬ್ಬ ವಿದ್ಯಾರ್ಥಿಯನ್ನು ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಒಂದು ವೇಳೆ ಕೆಮ್ಮು, ನೆಗಡಿಯಂತಹ ಲಕ್ಷಣಗಳಿದ್ದರೆ ಅವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುತ್ತದೆ’ ಎಂದರು.

ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ, ತಹಶೀಲ್ದಾರ್ ನಾಗಪ್ರಶಾಂತ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಜಿ.ನಾಗೇಶ್, ಜಿಲ್ಲಾ ಖಜಾನೆಯ ಉಪನಿರ್ದೇಶಕ ಬಿ.ಎಂ.ಮುನಿರೆಡ್ಡಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಎ.ಎನ್.ಗೀತಾ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.