ADVERTISEMENT

ಆರೋಗ್ಯದ ಮಾಹಿತಿ ಕಲೆ ಹಾಕಿ

ಮೇಲೂರು ಗ್ರಾಮಕ್ಕೆ ಭೇಟಿ ನೀಡಿ ಕೋವಿಡ್-19 ನಿರ್ವಹಣೆ ಪರಿಶೀಲಿಸಿದ ಜಿಲ್ಲಾಧಿಕಾರಿ ಆರ್.ಲತಾ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2020, 14:35 IST
Last Updated 20 ಅಕ್ಟೋಬರ್ 2020, 14:35 IST
ಮೇಲೂರಿನಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಅವರು ಸಾರ್ವಜನಿಕರಿಗೆ ಕೋವಿಡ್‌ ಕುರಿತು ಅರಿವು ಮೂಡಿಸಿದರು.
ಮೇಲೂರಿನಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಅವರು ಸಾರ್ವಜನಿಕರಿಗೆ ಕೋವಿಡ್‌ ಕುರಿತು ಅರಿವು ಮೂಡಿಸಿದರು.   

ಚಿಕ್ಕಬಳ್ಳಾಪುರ: ‘ಆಶಾ ಕಾರ್ಯಕರ್ತೆಯರು ಪ್ರತಿ ದಿನ ಮನೆ ಮನೆಗೆ ಖುದ್ದು ಭೇಟಿ ನೀಡಿ ಪ್ರತಿ ಕುಟುಂಬದವರ ಆರೋಗ್ಯದ ಬಗ್ಗೆ ಮಾಹಿತಿಯನ್ನು ಪಡೆಯಬೇಕು’ ಎಂದು ಜಿಲ್ಲಾಧಿಕಾರಿ ಆರ್ ಲತಾ ತಿಳಿಸಿದರು.

ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮಕ್ಕೆ ಮಂಗಳವಾರ ಭೇಟಿ ನೀಡಿ ಕೋವಿಡ್-19 ನಿರ್ವಹಣೆ ಬಗ್ಗೆ ಪರಿಶೀಲನೆ ನಡೆಸಿದ ಲತಾ ಅವರು ಇದೇ ವೇಳೆ ಕೊರೊನಾ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿದರು.

‘ಆಶಾ ಕಾರ್ಯಕರ್ತೆಯರು 60 ವರ್ಷ ಹಿರಿಯರ ಬಗ್ಗೆ ದಿನ ನಿತ್ಯದ ಆರೋಗ್ಯದ ಮಾಹಿತಿ ಪಡೆದು ಕೊಳ್ಳಬೇಕು. ಜತೆಗೆ, ಕೋವಿಡ್‌ ತಡೆ ಕುರಿತು ಊರಿನ ಜನರಿಗೆ ಅರಿವು ಮೂಡಿಸಬೇಕು. ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮವಾಗಿ ಕಡ್ಡಾಯವಾಗಿ ಮುಖಗವಸು ಧರಿಸುವಂತೆ ನಿಗಾ ವಹಿಸಬೇಕು’ ಎಂದು ಹೇಳಿದರು.

ADVERTISEMENT

‘ಸಾರ್ವಜನಿಕರು ಸಹ ಸರ್ಕಾರ ಕಾಲಕಾಲಕ್ಕೆ ಹೊರಡಿಸುವ ಮಾರ್ಗಸೂಚಿಗಳನ್ನು ಪಾಲಿಸುವ ಜತೆಗೆ ಅನಗತ್ಯವಾಗಿ ಹೊರಗೆ ಸುತ್ತಾಡುವುದು ನಿಲ್ಲಿಸಬೇಕು. ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಅಂತರ ಕಾಯ್ದುಕೊಳ್ಳಬೇಕು. ಚಿಕ್ಕ ಮಕ್ಕಳು, ವೃದ್ಧರ ಬಗ್ಗೆ ಕಾಳಜಿ ಮಾಡಬೇಕು’ ಎಂದರು.

‘ಕೋವಿಡ್ ಲಕ್ಷಣಗಳನ್ನು ಹೊಂದಿರುವವರು ಕಡ್ಡಾಯವಾಗಿ ಗಂಟಲು ದ್ರವ ಪರೀಕ್ಷೆ ಮಾಡಿಸಿಕೊಳ್ಳಬೇಕು. ವರದಿ ಬರುವವರೆಗೂ ಕ್ವಾರಂಟೈನ್‌ಗೆ ಒಳಗಾಗಬೇಕು. ಕೋವಿಡ್‌ ಪೀಡಿತರ ಪ್ರದೇಶಗಳಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕು. ಅನಾವಶ್ಯಕವಾಗಿ ಮನೆಯಿಂದ ಹೊರಗೆ ಬಂದರೆ ದಂಡ ವಿಧಿಸುವ ಜತೆಗೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

‘ಪ್ರತಿಯೊಂದು ಗ್ರಾಮದಲ್ಲಿಯೂ ಗ್ರಾಮ ಮಟ್ಟದ ಕಾರ್ಯಪಡೆ ರಚನೆ ಮಾಡಿದ್ದು, ಅವು ರೀತಿಯಲ್ಲಿ ಕೆಲಸ ನಿರ್ವಹಿಸುತ್ತಿವೆ ಎಂಬುದನ್ನು ಗಮನಿಸುತ್ತಿದ್ದೇವೆ. ಹಳ್ಳಿಗಳಲ್ಲಿ ಸೋಂಕಿನ ಸರಪಳಿ ತುಂಡರಿಸುವುದು ನಮ್ಮ ಮೊದಲ ಆದ್ಯತೆಯಾಗಬೇಕು. ಆ ಮೂಲಕ ಕೋವಿಡ್ ನಿಯಂತ್ರಿಸಲು ಸಾಧ್ಯವಾಗುತ್ತದೆ’ ಎಂದು ಹೇಳಿದರು.

‘ಜಿಲ್ಲೆಯಲ್ಲಿ ಹೋಟೆಲ್‍ಗಳು, ರಸ್ತೆ ಬದಿಯ ಅಂಗಡಿಯವರು ಮುಖಗವಸು ಧರಿಸುತ್ತಿಲ್ಲ. ಸಾಮಾಜಿಕ ಅಂತರ ಮತ್ತು ಸ್ವಚ್ಚತೆ ಕಾಪಾಡಿಕೊಳ್ಳುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ. ಯಾರೂ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದಿಲ್ಲವೋ ಅಂತಹವರಿಗೆ ದಂಡ ವಿಧಿಸಲಾಗುತ್ತದೆ’ ಎಂದು ಹೇಳಿದರು.

‘ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಎಲ್ಲಾ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಎಲ್ಲಾ ಅಂಗಡಿಗಳ ಮಾಲಿಕರು ಸ್ವಯಂ ಪ್ರೇರಿತರಾಗಿ ಅಂಗಡಿಯ ಮುಂದೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಎಚ್ಚರಿಕೆ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಹೊರಗಿನಿಂದ ಬರುವವರ ಮೇಲೆ ನಿಗಾ ವಹಿಸಬೇಕು’ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾತನಾಡಿ, ‘ಸ್ಥಳಿಯ ಮಟ್ಟದ ಕಾರ್ಯಪಡೆ ಸಮಿತಿಗಳು ಹಾಗೂ ಸ್ವಯಂ ಸೇವಕರು ಹಳ್ಳಿಗಳಲ್ಲಿ ಖುದ್ದಾಗಿ ಭೇಟಿ ನೀಡಿ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ತಂಡಗಳಾಗಿ ವಿಂಗಡಣೆ ಮಾಡಿಕೊಂಡು ಕಾರ್ಯನಿರ್ವಹಿಸಬೇಕು’ ಎಂದು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ನೊಮೇಶ್ ಕುಮಾರ್, ಶಿಡ್ಲಘಟ್ಟ ತಹಶೀಲ್ದಾರ್ ಅರುಂಧತಿ, ತಾಲ್ಲೂಕು ಆರೋಗ್ಯಾಧಿಕಾರಿ ವೆಂಕಟೇಶಮೂರ್ತಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.