ADVERTISEMENT

ಅಭ್ಯರ್ಥಿ ಆಯ್ಕೆ ಚರ್ಚೆ ಪ್ರಬುದ್ಧತೆಯ ಲಕ್ಷಣವಲ್ಲ

ತಾಲ್ಲೂಕಿನ ರಂಗಸ್ಥಳದ ರಂಗನಾಥಸ್ವಾಮಿ ದರ್ಶನ ಪಡೆದ ಹಿಂದಿನ ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2019, 11:43 IST
Last Updated 2 ಆಗಸ್ಟ್ 2019, 11:43 IST
ಹಿಂದಿನ ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಅವರು ಶುಕ್ರವಾರ ತಾಲ್ಲೂಕಿನ ರಂಗಸ್ಥಳದ ರಂಗನಾಥಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದರು.
ಹಿಂದಿನ ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಅವರು ಶುಕ್ರವಾರ ತಾಲ್ಲೂಕಿನ ರಂಗಸ್ಥಳದ ರಂಗನಾಥಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದರು.   

ಚಿಕ್ಕಬಳ್ಳಾಪುರ: ‘ಚುನಾವಣೆ ಆಯೋಗ ಉಪ ಚುನಾವಣೆ ಘೋಷಿಸದ ಹೊರತು ನಾವು ಅಭ್ಯರ್ಥಿಗಳ ಬಗ್ಗೆ ಚರ್ಚೆ ಮಾಡುವುದು ಪ್ರಬುದ್ಧತೆಯ ಲಕ್ಷಣವಾಗುವುದಿಲ್ಲ. ಬಾಲಿಶವಾಗುತ್ತದೆ. ನಾವು ಆ ಹಂತಕ್ಕೆ ಹೋಗಿಲ್ಲ’ ಎಂದು ಹಿಂದಿನ ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಹೇಳಿದರು.

ತಾಲ್ಲೂಕಿನ ರಂಗಸ್ಥಳದ ರಂಗನಾಥಸ್ವಾಮಿ ದೇವಾಲಯಕ್ಕೆ ಶುಕ್ರವಾರ ಭೇಟಿ ನೀಡಿ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ಅನರ್ಹಗೊಂಡ ಶಾಸಕರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿರುವುದರಿಂದ ಕೋರ್ಟ್‌ನಲ್ಲಿ ಏನು ತೀರ್ಮಾನವಾಗುತ್ತದೆ ಎಂದು ನೋಡಿಕೊಂಡು ಆ ಮೇಲೆ ಚುನಾವಣೆ ಆಯೋಗದವರು ಉಪ ಚುನಾವಣೆ ಘೋಷಿಸಬೇಕು. ಆ ಮೇಲೆ ರಾಜಕೀಯ ವಿಚಾರ. ಇದು ರಾಜಕೀಯ ಉದ್ದೇಶದ ಭೇಟಿಯಲ್ಲ. ಬಹಳ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದೆ. ಹೀಗಾಗಿ ದೇವರ ದರ್ಶನಕ್ಕೆ ಬಂದಿರುವೆ’ ಎಂದು ತಿಳಿಸಿದರು.

ADVERTISEMENT

‘ಸಿದ್ದರಾಮಯ್ಯನವರು ರಾಜ್ಯದಲ್ಲಿ ಪ್ರಭಾವಿ ನಾಯಕರು. ದೇವರಾಜ ಅರಸು ನಂತರ ಅತ್ಯಂತ ಗೌರವಯುತವಾಗಿ ತಮ್ಮ ಅವಧಿ ಪೂರ್ಣಗೊಳಿಸಿ, ಸಾಮಾನ್ಯ ಜನರು ನೆನಪಿನಲ್ಲಿಟ್ಟುಕೊಳ್ಳುವಂತಹ ಪರಿಣಾಮಕಾರಿಯಾದ ಕೆಲಸಗಳನ್ನು ಮಾಡಿರುವವರು. ಹೀಗಾಗಿ ಅವರ ನಾಯಕತ್ವದಲ್ಲಿಯೇ ನಾವೆಲ್ಲರೂ ಪಕ್ಷ ಕಟ್ಟುವ ಕೆಲಸ ಮಾಡುತ್ತೇವೆ. ಯಾರು ಏನಾಗುತ್ತಾರೆ ಎನ್ನುವುದು ಮುಖ್ಯವಲ್ಲ. ಈ ಸಂದರ್ಭದಲ್ಲಿ ಪಕ್ಷ ಬಲಪಡಿಸುವುದು ನಮ್ಮೆಲ್ಲರ ಕರ್ತವ್ಯ’ ಎಂದು ಹೇಳಿದರು.

ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ಮಾತನಾಡಿ, ‘ಇದೊಂದು ಖಾಸಗಿ ಭೇಟಿ ಇದಕ್ಕೆ ರಾಜಕೀಯ ಬಣ್ಣ ಕಟ್ಟುವುದು ಬೇಡ. ರಾಜಕೀಯವಾಗಿ ಸಣ್ಣಪುಟ್ಟ ವ್ಯತ್ಯಾಸಗಳಿರಬಹುದು. ಅದನ್ನು ಪಕ್ಷದ ವೇದಿಕೆಯಲ್ಲಿ ಬಗೆಹರಿಸಿಕೊಳ್ಳುತ್ತೇವೆ. ಇಲ್ಲಿನ ಮುಖಂಡರು, ಕಾರ್ಯಕರ್ತರ ಅಭಿಪ್ರಾಯಗಳನ್ನು ತೆಗೆದುಕೊಂಡು ಮುಂಬರುವ ದಿನಗಳಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡುತ್ತೇವೆ’ ಎಂದರು.

‘ಅಭ್ಯರ್ಥಿಗಳ ಆಯ್ಕೆ ಕುರಿತು ಪಕ್ಷದ ಆಂತರಿಕ ವಲಯದಲ್ಲಿ ಚರ್ಚೆಗಳು ನಡೆಯುತ್ತಿವೆ. ಏನೇ ಆದರೂ ಸ್ಥಳೀಯರ ಅಭಿಪ್ರಾಯ ಪಡೆದು ನಾವು ಮುಂದುವರಿಯಬೇಕಾಗುತ್ತದೆ. ಉಪ ಚುನಾವಣೆಯಲ್ಲಿ ಮೈತ್ರಿ ಕುರಿತಂತೆ ಪಕ್ಷದ ಹಂತದಲ್ಲಿ ವರಿಷ್ಠರು ನಿರ್ಧಾರ ತೆಗೆದುಕೊಳ್ಳುತ್ತಾರೆ’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಚ್.ವಿ.ಮಂಜುನಾಥ್‌, ಮಾಜಿ ಶಾಸಕರಾದ ಎಸ್‌.ಎಂ.ಮುನಿಯಪ್ಪ, ಶಿವಾನಂದ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ, ಮುಖಂಡರಾದ ಎಸ್‌.ವೈ.ಮರಿಯಪ್ಪ, ಜಿ.ಎಚ್‌.ನಾಗರಾಜ್, ಅಡ್ಡಗಲ್ ಶ್ರೀಧರ್, ಯಲುವಹಳ್ಳಿ ರಮೇಶ್‌, ವಿನಯ್, ಕೆಪಿಸಿಸಿ ಸದಸ್ಯ ಎಸ್‌.ಪಿ.ಶ್ರೀನಿವಾಸ್ ಈ ಸಂದರ್ಭದಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.