ADVERTISEMENT

ವಿದ್ಯಾರ್ಥಿನಿ ಹಂತಕರ ಬಂಧನಕ್ಕೆ ಆಗ್ರಹ

ವಿಜಯಪುರ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಪದಾಧಿಕಾರಿಗಳಿಂದ ಜಿಲ್ಲಾಧಿಕಾರಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2019, 12:29 IST
Last Updated 27 ಸೆಪ್ಟೆಂಬರ್ 2019, 12:29 IST
ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು.
ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು.   

ಚಿಕ್ಕಬಳ್ಳಾಪುರ: ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲ್ಲೂಕು ಅಸಂತಾಪುರ ಗ್ರಾಮದ ಪಿಯು ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ನಡೆಸಿ, ಕೊಲೆ ಮಾಡಿದ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ಜರುಗಿಸಬೇಕು ಎಂದು ಆಗ್ರಹಿಸಿ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಪದಾಧಿಕಾರಿಗಳು ಶುಕ್ರವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಸಮಿತಿಯ ಮಹಿಳಾ ವಿಭಾಗದ ರಾಜ್ಯ ಘಟಕದ ಅಧ್ಯಕ್ಷೆ ಸಿ.ವಿ ವೀಣಾ, ‘ರಾಜ್ಯದಲ್ಲಿ ಕೋಮುವಾದದ ಜ್ವಾಲೆಯಿಂದ ಜನತೆ ನಲುಗುತ್ತಿದ್ದರೆ, ಇನ್ನೊಂದೆಡೆ ಇಡೀ ಸಮಾಜವೇ ತಲೆ ತಗ್ಗಿಸುವ ಹೇಯ ಕೃತ್ಯಗಳು ವಿದ್ಯಾರ್ಥಿನಿಯರ ಮೇಲೆ ನಿರಂತರವಾಗಿ ನಡೆಯುತ್ತಿರುವುದು ಶೋಚನೀಯ ಸಂಗತಿ’ ಎಂದು ಹೇಳಿದರು.

‘ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಕೊಲೆ ಮಾಡುವುದು, ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಒಡ್ಡುವ ಪ್ರಕರಣಗಳಿಂದಾಗಿ ವಿದ್ಯಾರ್ಥಿ ಸಮುದಾಯದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕೂಡಲೇ ಸರ್ಕಾರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವ ಮೂಲಕ ಇದನ್ನು ಹೋಗಲಾಡಿಸುವ ಕೆಲಸ ಮಾಡಬೇಕು’ ಎಂದು ಆಗ್ರಹಿಸಿದರು.

ADVERTISEMENT

‘ವಿದ್ಯಾರ್ಥಿನಿಯರ ಮೇಲೆ ನಡೆಯುತ್ತಿರುವ ಹೇಯ ಕೃತ್ಯಗಳನ್ನು ತಡೆಯಲು, ಪುಂಡಾಟಿಕೆ ಪ್ರದರ್ಶಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವ ಮೂಲಕ ವಿದ್ಯಾರ್ಥಿನಿಯರಲ್ಲಿ ನೆಲೆಸಿರುವ ಭಯದ ಕಾರ್ಮೋಡವನ್ನು ತೊಡೆದುಹಾಕಬೇಕು’ ಎಂದು ತಿಳಿಸಿದರು.

‘ಗ್ರಾಮೀಣ ಹೆಣ್ಣುಮಕ್ಕಳು ದೂರದ ಪ್ರದೇಶದ ಶಾಲಾ ಕಾಲೇಜುಗಳಲ್ಲಿ ವಿದ್ಯಾಭ್ಯಾಸಕ್ಕಾಗಿ ತೆರಳುತ್ತಾರೆ. ಅಂತವರಿಗೆ ಸೂಕ್ತ ರಕ್ಷಣೆ ಇಲ್ಲದಂತಾಗಿದೆ. ರಾಜ್ಯದಲ್ಲಿ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳು, ಅತ್ಯಾಚಾರಗಳು, ಕೋಮುಗಲಭೆಗಳು ಹೆಚ್ಚುತ್ತಿವೆ. ಜನಸಾಮಾನ್ಯರಲ್ಲಿ ಭಯದ ವಾತಾವರಣ ಸೃಷ್ಟಿ ಆಗಿದೆ. ಸರ್ಕಾರ ಇನ್ನಾದರೂ ಎಚ್ಚೆತ್ತುಕೊಂಡು ಕಾನೂನು ಸುವ್ಯವಸ್ಥೆ ಕಾಪಾಡಲು ಮುಂದಾಗಬೇಕು’ ಎಂದು ಒತ್ತಾಯಿಸಿದರು.

ಮಾದಿಗ ದಂಡೋರ ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ಎಂ.ವಿ.ರಾಮಪ್ಪ, ಉಪಾಧ್ಯಕ್ಷ ರಾಮಕೃಷ್ಣಪ್ಪ, ಮುಖಂಡರಾದ ಮಧುಕುಮಾರ್, ಎಂ.ಆವುಲಪ್ಪ, ಗಂಗರತ್ನಮ್ಮ, ಗಂಗಮ್ಮ, ಶಿವಣ್ಣ, ಜಯಮ್ಮ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.