ADVERTISEMENT

ನಂದಿ ಬೆಟ್ಟಕ್ಕೆ ಒಂದೂವರೆ ವರ್ಷದಲ್ಲಿ ರೋಪ್‌ ವೇ ನಿರ್ಮಾಣ- ಸಚಿವ ಎಂ.ಸಿ. ಸುಧಾಕರ

ಜಿಲ್ಲೆಯಾದ್ಯಂತ ಅದ್ದೂರಿ ಗಣರಾಜ್ಯೋತ್ಸವ; ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 27 ಜನವರಿ 2026, 3:15 IST
Last Updated 27 ಜನವರಿ 2026, 3:15 IST
ಚಿಕ್ಕಬಳ್ಳಾಪುರದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ
ಚಿಕ್ಕಬಳ್ಳಾಪುರದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ   

ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿ ಬೆಟ್ಟಕ್ಕೆ ರೋಪ್ ವೇ ನಿರ್ಮಿಸುವ ವಿಚಾರವಾಗಿ ಈ ಹಿಂದಿನಿಂದ ಸರ್ಕಾರ ಯಾವುದೇ ಕ್ರಮವಹಿಸಿರಲಿಲ್ಲ. ರೋಪ್ ವೇ ನಿರ್ಮಾಣಕ್ಕೆ ಸಂಬಂಧಿಸಿದಂತೆ ಎದುರಾಗಿರುವ ಸಮಸ್ಯೆಗಳನ್ನು ನಮ್ಮ ಸರ್ಕಾರ ಪರಿಹರಿಸಿದೆ. ಒಂದೂವರೆ ವರ್ಷದೊಳಗೆ ರೋಪ್ ವೇ ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಭರವಸೆ ನೀಡಿದರು.

ಇಲ್ಲಿನ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಜಿಲ್ಲಾಡಳಿತ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ನಮ್ಮ ಸರ್ಕಾರ ಕ್ರಮವಹಿಸಿದೆ. ಈ ದಿಕ್ಕಿನಲ್ಲಿ ಹಲವು ಯೋಜನೆಗಳು ಪ್ರಗತಿಯಲ್ಲಿವೆ ಎಂದರು.

ADVERTISEMENT

ಶಿಡ್ಲಘಟ್ಟ ತಾಲ್ಲೂಕಿನ ಅಮರಾವತಿ ಗ್ರಾಮದಲ್ಲಿ ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯದ ಹೊಸ ಕ್ಯಾಂಪಸ್ ಕಟ್ಟಡದ ಎರಡನೇ ಹಂತದ ಕಾಮಗಾರಿ ₹120 ಕೋಟಿಯಲ್ಲಿ ಪ್ರಗತಿಯಲ್ಲಿವೆ ಎಂದು ಹೇಳಿದರು.

ಚಿಕ್ಕಬಳ್ಳಾಪುರ ತಾಲ್ಲೂಕಿನ ಅರೂರು ಬಳಿ ಸರ್ಕಾರಿ ವೈದ್ಯಕೀಯ ಶಿಕ್ಷಣ ಕಾಲೇಜು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಮುದ್ದೇನಹಳ್ಳಿ ಹಾಗೂ ಚಿಂತಾಮಣಿಯಲ್ಲಿ ತಲಾ ಒಂದು ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು ನಡೆಯುತ್ತಿವೆ. ಚಿಕ್ಕಬಳ್ಳಾಪುರ ವೈದ್ಯಕೀಯ ಕಾಲೇಜು ನಿರ್ಮಾಣಕ್ಕಾಗಿ ಹಿಂದಿನ ಸರ್ಕಾರದಲ್ಲಿ ₹375 ಕೋಟಿ ರೂ. ಗಳನ್ನು ಮಂಜೂರು ಮಾಡಿತ್ತು. ನಮ್ಮ ಸರ್ಕಾರ ₹435 ಕೋಟಿ ರೂ. ಗಳನ್ನು ಹೆಚ್ಚುವರಿಯಾಗಿ ಮಂಜೂರು ಮಾಡಿದೆ ಎಂದರು.

ಈ ಹಣದಲ್ಲಿ ರೇಡಿಯಾಲಜಿ ಬ್ಲಾಕ್ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಅಲ್ಲದೇ ಹೊಸ ಅಕಾಡೆಮಿಕ್ ಬ್ಲಾಕ್ ಸಿದ್ದವಾಗಿದೆ. ವೈದ್ಯಕೀಯ ವಿದ್ಯಾರ್ಥಿಗಳ ವಸತಿ ನಿಲಯಗಳು ನಿರ್ಮಾಣಗೊಂಡು ಕಾರ್ಯನಿರ್ವಸಲಾಗುತ್ತಿವೆ. ವೈದ್ಯಕೀಯ ಸಿಬ್ಬಂದಿ ನಿವಾಸಗಳು ಪೂರ್ಣಗೊಂಡಿವೆ ಎಂದು ಹೇಳಿದರು.

ನಂದಿ ಕ್ರಾಸ್‌ನಲ್ಲಿ ನೂತನ ಹೂವಿನ ಮಾರುಕಟ್ಟೆ ನಿರ್ಮಾಣಕ್ಕಾಗಿ 20 ಎಕರೆ ಜಮೀನು ಮಂಜೂರಾಗಿದೆ. ಈ ಜಮೀನಿನಲ್ಲಿ ₹140 ಕೋಟಿ ಅಂದಾಜು ವೆಚ್ಚದಲ್ಲಿ ನೂತನ ಹೂವಿನ ಮಾರುಕಟ್ಟೆ ಅಭಿವೃದ್ಧಿಗೆ ನೀಲ ನಕ್ಷೆ ಸಿದ್ದಪಡಿಲಾಗಿದೆ ಎಂದು ವಿವರಿಸಿದರು.

ಜಿಲ್ಲೆಯಲ್ಲಿ ನೂತನವಾಗಿ 464 ಕಂದಾಯ ಗ್ರಾಮ ಮತ್ತು ಉಪ ಗ್ರಾಮಗಳನ್ನು ಗುರುತಿಸಲಾಗಿದೆ. ಈ ಪೈಕಿ 2,237 ದಾಖಲೆ ರಹಿತ ಜನವಸತಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಲಾಗಿದೆ. ಪ್ರಸ್ತುತ ಕಂದಾಯ ಗ್ರಾಮ ಮುಕ್ತ ವಿಶೇಷ ಅಭಿಯಾನವು ಭರದಿಂದ ನಡೆಯುತ್ತಿದೆ. ಗ್ರಾಮೀಣ ಭಾಗದ ಅನಧಿಕೃತ 20,000 ಮನೆಗಳ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದರು.

ಶಾಸಕ ಪ್ರದೀಪ್ ಈಶ್ವರ್,  ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ  ಅಧ್ಯಕ್ಷ ಡಾ. ಬಿ.ಸಿ. ಮುದ್ದುಗಂಗಾಧರ್, ಹಕಾರ ಕೈಮಗ್ಗ ನೇಕಾರರ ಮಹಾಮಂಡಳಿ ನಿಗಮದ ಅಧ್ಯಕ್ಷ ಬಿ.ಜಿ. ಗಣೇಶ್, ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್. ಕೇಶವರೆಡ್ಡಿ, ಜಿಲ್ಲಾಧಿಕಾರಿ ಜಿ.ಪ್ರಭು, ಜಿಲ್ಲಾ ಪಂಚಾಯಿತಿ ಸಿ.ಇ.ಓ ಡಾ.ವೈ. ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ,  ಜಿಲ್ಲಾ ಅರಣ್ಯ ಉಪ ಸಂರಕ್ಷಣಾಧಿಕಾರಿ ಗಿರೀಶ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಎನ್.ಭಾಸ್ಕರ್ ಮತ್ತಿತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.