ADVERTISEMENT

‘ಹೆಚ್ಚು ಅಂಕ ಪಡೆದವರಿಗೆ ₹1 ಲಕ್ಷ ಬಹುಮಾನ’: ಶಾಸಕ ಮೇಲೂರು ರವಿಕುಮಾರ್

​ಪ್ರಜಾವಾಣಿ ವಾರ್ತೆ
Published 4 ಜೂನ್ 2025, 14:58 IST
Last Updated 4 ಜೂನ್ 2025, 14:58 IST
ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಮೇಲೂರು ರವಿಕುಮಾರ್ ಮಾತನಾಡಿದರು
ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಮೇಲೂರು ರವಿಕುಮಾರ್ ಮಾತನಾಡಿದರು   

ಶಿಡ್ಲಘಟ್ಟ: ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ 2025– 26ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಲ್ಲಿ ಹೆಚ್ಚು ಅಂಕ ಪಡೆದವರಿಗೆ ₹1 ಲಕ್ಷ, ದ್ವಿತೀಯ ಬಹುಮಾನ ₹50,000, ತೃತೀಯ ಬಹುಮಾನ ₹25,000 ನೀಡಲಾಗುವುದು ಎಂದು ಶಾಸಕ ಮೇಲೂರು ರವಿಕುಮಾರ್ ಹೇಳಿದರು.

ತಾಲ್ಲೂಕಿನ ಜಂಗಮಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಶಾಲಾ ಪ್ರಾರಂಭೋತ್ಸವದಲ್ಲಿ ಮಾತನಾಡಿದರು.

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆಗಾಗಿ ಅನೇಕ ಕ್ರಮ ಕೈಗೊಳ್ಳಲಾಗಿದೆ. ಶಿಡ್ಲಘಟ್ಟ ತಾಲ್ಲೂಕು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕು ಎಂಬ ಆಸೆಯಿಂದ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡಬೇಕು ಎಂಬ ಉದ್ದೇಶದಿಂದ ಅವರನ್ನು ಪ್ರೋತ್ಸಾಹಿಸುವ ಸಲುವಾಗಿ ನಗದು ಬಹುಮಾನ ಘೋಷಣೆ ಮಾಡಲಾಗಿದೆ. ತಮ್ಮ ವಾರ್ಷಿಕ ವೇತನ ₹33 ಲಕ್ಷವನ್ನು ಶಿಡ್ಲಘಟ್ಟದ ಸರ್ಕಾರಿ ಶಾಲೆಗಳ ಮಕ್ಕಳ ಶಿಕ್ಷಣಕ್ಕಾಗಿ ಮೀಸಲಿಡಲಾಗಿದೆ ಎಂದರು.

ADVERTISEMENT

ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದೆ. ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಶಿಕ್ಷಕರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಗಮನ ಹರಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳನ್ನು ಕರೆತರುವ ಕೆಲಸ ಮಾಡಬೇಕು ಎಂದರು.

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಮೂಲಕ ಸಿಎಸ್‌ಆರ್ ನಿಧಿಯಿಂದ ₹10 ಕೋಟಿ ಅನುದಾನ ನೀಡಲು ಒಪ್ಪಿಗೆ ಸಿಕ್ಕಿದ್ದು, ಶಾಲಾ ಮೂಲಸೌಕರ್ಯ ಅಭಿವೃದ್ಧಿಗೆ ತಯಾರಿ ನಡೆದಿದೆ ಎಂದು ಹೇಳಿದರು.

ಎಸ್‌ಎಸ್‌ಎಲ್‌ಸಿಯಲ್ಲಿ ಶಾಲೆಗೆ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಗೆ ಶಾಸಕ ರವಿಕುಮಾರ್ ಅವರು ₹5ಸಾವಿರ ಪ್ರೋತ್ಸಾಹ ಧನ ನೀಡಿ ಸನ್ಮಾನಿಸಿದರು.

ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಂಕ್ ಮುನಿಯಪ್ಪ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ಬಾರೆಡ್ಡಿ, ಜೆಡಿಎಸ್ ಯುವ ಮುಖಂಡ ತಾದೂರು ರಘು, ಗ್ರಾಮ ಪಂಚಾಯಿತಿ ಸದಸ್ಯ ಬಾಬು, ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮಹಬೂಬ್, ಶಿಕ್ಷಕ ಪ್ರಕಾಶ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.