ಚಿಕ್ಕಬಳ್ಳಾಪುರ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದ ‘ಶಕ್ತಿ’ ಯೋಜನೆ ಕಾರ್ಯಕ್ರಮದಲ್ಲಿ ಚಾಲಕ ಮತ್ತು ನಿರ್ವಾಹಕರನ್ನು ಸನ್ಮಾನಿಸಲಾಯಿತು
ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಲ್ಲಿ ಮುಖ್ಯವಾದ ‘ಶಕ್ತಿ’ ಯೋಜನೆಯಿಂದ ಜಿಲ್ಲೆಯಲ್ಲಿ ಇದುವರೆಗೂ 7,28,53,367 ಉಚಿತ ಟಿಕೆಟ್‌ಗಳನ್ನು ಪಡೆದು ಮಹಿಳೆಯರು ಪ್ರಯಾಣಿಸಿದ್ದಾರೆ. ಇದಕ್ಕೆ ಸರ್ಕಾರವು ಒಟ್ಟು ₹ 274,80,94,395 ಭರಿಸಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ಎನ್. ರಮೇಶ್ ತಿಳಿಸಿದರು.
ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸೋಮವಾರ ಬಸ್‌ಗೆ ಪೂಜೆ ಸಲ್ಲಿಸಿ ಪ್ರಯಾಣಿಕರಿಗೆ ಉಚಿತ ಟಿಕೆಟ್ ವಿತರಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಶಕ್ತಿ ಯೋಜನೆಯಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಆದ್ದರಿಂದ ಕೆಎಸ್‌ಆರ್‌ಟಿಸಿಯು ಒಂದು ಸಾವಿರ ಅಶ್ವಮೇಧ ಮಾದರಿಯ ಬಸ್‌ಗಳನ್ನು ಖರೀದಿಸುವ ಪ್ರಕ್ರಿಯೆಯು ಟೆಂಡರ್ ಹಂತದಲ್ಲಿದೆ ಎಂದು ಸಾರಿಗೆ ಸಚಿವರು ತಿಳಿಸಿದ್ದಾರೆ. ಸದ್ಯದಲ್ಲೆ ಹೊಸ ವಾಹನಗಳು ಎಲ್ಲ ಜಿಲ್ಲೆಗಳಿಗೆ ವಿತರಣೆ ಆಗಲಿವೆ ಎಂದರು.
ಯೋಜನೆಯು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಒದಗಿಸಿದೆ. ಆ ಮೂಲಕ ಆರ್ಥಿಕ ಸಬಲೀಕರಣಕ್ಕೆ ಕಾರಣವಾಗಿದೆ. 2023ರ ಜೂನ್ 11ರಂದು ಆರಂಭಗೊಂಡ ಈ ಯೋಜನೆಯು ಎರಡು ವರ್ಷಗಳಲ್ಲಿ ರಾಜ್ಯದಲ್ಲಿ 500 ಕೋಟಿ ಉಚಿತ ಪ್ರಯಾಣಗಳನ್ನು ಜು.9ರಂದು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಮಹಿಳೆಯರಿಗೆ ಉಚಿತ ಬಸ್ ಟಿಕೆಟ್ ನೀಡುವ ಜೊತೆಗೆ ಸಿಹಿ ಹಂಚಿ ಸಂಭ್ರಮಿಸಲಾಗುತ್ತಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ.ನವೀನ್ ಭಟ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ರಾಮಕೃಷ್ಣಪ್ಪ, ಚಿಕ್ಕಬಳ್ಳಾಪುರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಜಯರಾಮ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ನಾರಾಯಣಮ್ಮ ಪಾಲ್ಗೊಂಡಿದ್ದರು.
616 ಸರ್ಕಾರಿ ಬಸ್
ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ವಿ.ಬಸವರಾಜ್ ಮಾತನಾಡಿ, ಜಿಲ್ಲೆಯಲ್ಲಿ 616 ಸರ್ಕಾರಿ ಬಸ್‌ಗಳಿವೆ. 584 ಟ್ರಿಫ್ ಗಳನ್ನು ನಿತ್ಯ ಆಯೋಜಿಸಲಾಗುತ್ತಿದೆ ಎಂದರು.
ಸಿಬ್ಬಂದಿ ಕೊರತೆ ನೀಗಿಸಲು ಚಿಕ್ಕಬಳ್ಳಾಪುರ ವಿಭಾಗಕ್ಕೆ ಹೊಸದಾಗಿ 200 ಚಾಲಕ ಕಂ ನಿರ್ವಾಹಕರನ್ನು ಸರ್ಕಾರ ಒದಗಿಸಿದೆ. ಪ್ರಯಾಣಿಕರಿಗೆ ತೊಡಕಾಗದಂತೆ ವಾಹನ ವ್ಯವಸ್ಥೆ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಹೆಚ್ಚು ಓಡಾಟದ ಒತ್ತಡವಿರುವ ಕಡೆಗೆ ಹೆಚ್ಚು ಬಸ್ ನಿಯೋಜಿಸಲಾಗುವುದು ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.