ADVERTISEMENT

ಶಿಡ್ಲಘಟ್ಟ | ಗಮನ ಸೆಳೆದ ಮುತ್ತಿನ ಪಲ್ಲಕ್ಕಿ ಉತ್ಸವ

ಕಂಪೇಗೌಡ ಜಯಂತಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

​ಪ್ರಜಾವಾಣಿ ವಾರ್ತೆ
Published 27 ಜೂನ್ 2025, 14:34 IST
Last Updated 27 ಜೂನ್ 2025, 14:34 IST
ಶಿಡ್ಲಘಟ್ಟದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಕೆಂಪೇಗೌಡರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಶಾಸಕ ಬಿ.ಎನ್.ರವಿಕುಮಾರ್ ಮಾತನಾಡಿದರು
ಶಿಡ್ಲಘಟ್ಟದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಕೆಂಪೇಗೌಡರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಶಾಸಕ ಬಿ.ಎನ್.ರವಿಕುಮಾರ್ ಮಾತನಾಡಿದರು   

ಶಿಡ್ಲಘಟ್ಟ: ಕೆಂಪೇಗೌಡರು ಎಲ್ಲ ಮತ ಧರ್ಮ ಸಮಭಾವದಿಂದ ಕಂಡವರು. ಅನೇಕ ಚಕ್ರವರ್ತಿಗಳು, ಸಾಮ್ರಾಟರು, ರಾಜ ಮನೆತನಗಳು ಕಟ್ಟಿದ ರಾಜಧಾನಿಗಳು, ಬೃಹತ್ ನಗರಗಳು ಇಂದು ಅಸ್ತಿತ್ವದಲ್ಲಿಲ್ಲ. ಆದರೆ, ಕೆಂಪೇಗೌಡ ಅವರು ಕಟ್ಟಿದ ಬೆಂಗಳೂರು ಈಗಲೂ ಉತ್ತರೋತ್ತರವಾಗಿ ಬೆಳೆಯುತ್ತಲೇ ಇದೆ. ನಾಡಿನ ಅಭಿವೃದ್ಧಿ ಚಿಂತಕರಿಗೆ ಅವರು ಮಾದರಿ ಎಂದು ಶಾಸಕ ಬಿ.ಎನ್.ರವಿಕುಮಾರ್ ಅಭಿಪ್ರಾಯಪಟ್ಟರು.

ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಾಡ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಕೆಂಪೇಗೌಡ ಆಚರಣೆ ಸಮಿತಿಯಿಂದ ಹಮ್ಮಿಕೊಂಡಿದ್ದ 516ನೇ ಜಯಂತ್ಯುತ್ಸವದಲ್ಲಿ ಮಾತನಾಡಿದರು.

ನಾಡಪ್ರಭು ಬೆಂಗಳೂರಿನ ನಿರ್ಮಾತೃ, ಅಪ್ರತಿಮ ಆಡಳಿತಗಾರರಷ್ಟೇ ಆಗಿರಲಿಲ್ಲ. ಅವರೊಬ್ಬರು ಅನನ್ಯ ದಾರ್ಶನಿಕರು, ಶಾಂತಿಪ್ರಿಯರು, ಸರ್ವಜನರ ಶ್ರೇಯಸ್ಸಿಗಾಗಿ ದುಡಿದ ಮಹಾನ್ ಮಾನವತಾವಾದಿ. ಅಭಿವೃದ್ಧಿ, ಶಾಂತಿ, ಸೌಹಾರ್ದ, ನಗರಾಭಿವೃದ್ಧಿ, ನೀರಾವರಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಅವರು ಹಾಕಿಕೊಟ್ಟ ಹಾದಿ ಮಾದರಿಯಾಗಿದೆ ಎಂದರು.

ADVERTISEMENT

ಒಕ್ಕಲಿಗ ಸಮುದಾಯದ 108 ಮಂದಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಚಿಂತಾಮಣಿ ಮಾರ್ಗದಲ್ಲಿನ ಕೆಂಪೇಗೌಡರ ಪುತ್ಥಳಿಗೆ ಶಾಸಕರು ಹಾಗೂ ಎಲ್ಲ ಜನಪ್ರತಿನಿಧಿಗಳು, ಅಧಿಕಾರಿಗಳು, ಮುಖಂಡರು ಮಾಲಾರ್ಪಣೆ ಮಾಡಿದರು.

ಸಾರಿಗೆ ಬಸ್ ನಿಲ್ದಾಣದ ಸಲ್ಲಾಪುರಮ್ಮ ದೇವಿ ದೇವಾಲಯದ ಆವರಣದಲ್ಲಿ ಮುತ್ತಿನ ಪಲ್ಲಕ್ಕಿ ಮೆರವಣಿಗೆಗೆ ಶಾಸಕ ಬಿ.ಎನ್.ರವಿಕುಮಾರ್ ಚಾಲನೆ ನೀಡಿದರು. ನಗರದ ಪ್ರಮುಖ ಬೀದಿಗಳಲ್ಲಿ ಮುತ್ತಿನ ಪಲ್ಲಕ್ಕಿ ಮೆರವಣಿಗೆ ಸಾಗಿತು. ವಿವಿಧ ಜನಪದ ಕಲಾ ತಂಡಗಳು ಮೆರವಣಿಗೆಗೆ ಕಳೆ ಕಟ್ಟಿದ್ದವು.

ಕೆಂಪೇಗೌಡರ ಬದುಕು ಸಾಧನೆ ಕುರಿತು ಹಾಡು, ಘೋಷಣೆ ಮುಗಿಲು ಮುಟ್ಟಿದ್ದವು. ಕೋಟೆ ವೃತ್ತದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಸಹಕಾರ ನೀಡಿದ ಪ್ರಮುಖರನ್ನು ಸನ್ಮಾನಿಸಲಾಯಿತು. ಮೆರವಣಿಗೆಯಲ್ಲಿ ಭಾಗವಹಿಸಿದ್ದ ಮುತ್ತಿನ ಪಲ್ಲಕ್ಕಿ ವಾಹನಗಳಿಗೆ ನೆನಪಿನ ಕಾಣಿಕೆ ನೀಡಲಾಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ, ಕಾಂಗ್ರೆಸ್ ಮುಖಂಡ ರಾಜೀವ್‌ಗೌಡ, ಆಂಜಿನಪ್ಪ, ಸೀಕಲ್ ಆನಂದಗೌಡ, ಅಪ್ಪೇಗೌಡನಹಳ್ಳಿ ಕೆ.ಲಕ್ಷ್ಮಿನಾರಾಯಣರೆಡ್ಡಿ, ಒಕ್ಕಲಿಗರ ಸಂಘದ ಅಧ್ಯಕ್ಷ ಬಿ.ನಾರಾಯಣಸ್ವಾಮಿ, ಯುವ ಸೇನೆ ಅಧ್ಯಕ್ಷ ವೆಂಕಟಸ್ವಾಮಿ, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಬಂಕ್ ಮುನಿಯಪ್ಪ, ನಗರಸಭೆ ಅಧ್ಯಕ್ಷ ವೆಂಕಟಸ್ವಾಮಿ, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಮೇಲೂರು ಮಂಜುನಾಥ್, ತಹಶೀಲ್ಧಾರ್ ಗಗನ ಸಿಂಧು, ಇಒ ಹೇಮಾವತಿ, ಸರ್ಕಲ್ ಇನ್ಸ್‌ಪೆಕ್ಟರ್ ಎಂ.ಶ್ರೀನಿವಾಸ್, ನಗರಸಭೆ ಪೌರಾಯುಕ್ತ ಮೋಹನ್ ಕುಮಾರ್ ಸೇರಿದಂತೆ ಎಲ್ಲ ಇಲಾಖೆ ಅಧಿಕಾರಿಗಳು, ಸಿಬ್ಬಂದಿ, ಸಂಘ–ಸಂಸ್ಥೆಗಳ ಮುಖಂಡರು, ಸಾರ್ವಜನಿಕರು ಕೆಂಪೇಗೌಡರ ಉತ್ಸವದಲ್ಲಿ ಪಾಲ್ಗೊಂಡಿದ್ದರು.

ಪುತ್ಥಳಿಗೆ ಶಾಸಕರು ಹಾಗೂ ಎಲ್ಲ ಜನಪ್ರತಿನಿಧಿಗಳು ಅಧಿಕಾರಿಗಳು ಮುಖಂಡರು ಮಾಲಾರ್ಪಣೆ ಮಾಡಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.