ADVERTISEMENT

ಶಿಡ್ಲಘಟ್ಟ: ಕಾಂಗ್ರೆಸ್‌ ಮಹಿಳಾ ಕಾರ್ಯಕರ್ತೆಯರ ಪ್ರತಿಭಟನೆ

ಡಾ.ಎಂ.ಸಿ. ಸುಧಾಕರ್ ವಿರುದ್ಧ ಧಿಕ್ಕಾರ ಘೋಷಣೆ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2026, 2:59 IST
Last Updated 23 ಫೆಬ್ರುವರಿ 2026, 2:59 IST
ಶಿಡ್ಲಘಟ್ಟದಲ್ಲಿ ಕಾಂಗ್ರೆಸ್‌ ಮಹಿಳಾ ಕಾರ್ಯಕರ್ತೆಯರು ಸಚಿವ ಡಾ.ಎಂ.ಸಿ.ಸುಧಾಕರ್ ಅವರ ವಿರುದ್ಧ ಕೋಟೆ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು
ಶಿಡ್ಲಘಟ್ಟದಲ್ಲಿ ಕಾಂಗ್ರೆಸ್‌ ಮಹಿಳಾ ಕಾರ್ಯಕರ್ತೆಯರು ಸಚಿವ ಡಾ.ಎಂ.ಸಿ.ಸುಧಾಕರ್ ಅವರ ವಿರುದ್ಧ ಕೋಟೆ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು   

ಶಿಡ್ಲಘಟ್ಟ: ‘ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಮಹಿಳಾ ಅಧಿಕಾರಿ ಬಗ್ಗೆ ಕೀಳಾಗಿ ಮಾತನಾಡಿದ್ದು, ಕೂಡಲೆ ಅವರು ಮಹಿಳೆಯರಲ್ಲಿ ಕ್ಷಮೆ ಕೇಳಬೇಕು’ ಎಂದು ಶಿಡ್ಲಘಟ್ಟದಲ್ಲಿ ಭಾನುವಾರ ಕಾಂಗ್ರೆಸ್‌ ಮಹಿಳಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

ಬಸ್ ನಿಲ್ದಾಣದ ಇಂದಿರಾ ಕ್ಯಾಂಟೀನ್‌ನಿಂದ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತೆಯರು ಸಚಿವ ಡಾ.ಎಂ.ಸಿ.ಸುಧಾಕರ್ ಅವರ ಭಿತ್ತಿಚಿತ್ರ ಪ್ರದರ್ಶಿಸಿ ಅವರ ವಿರುದ್ಧ ಧಿಕ್ಕಾರ ಕೂಗಿದರು.

ಸಚಿವ ಡಾ.ಎಂ.ಸಿ.ಸುಧಾಕರ್ ಈ ಹಿಂದೆ ತನ್ನ ಬೆಂಬಲಿಗ ಉಮೇಶ್ ಅವರೊಂದಿಗೆ ಮೊಬೈಲ್‌ನಲ್ಲಿ ಮಾತನಾಡುವಾಗ ಮಹಿಳಾ ಅಧಿಕಾರಿಯನ್ನು ಅವಾಚ್ಯವಾಗಿ ನಿಂದಿಸಿದ್ದು, ಅಧಿಕಾರಿ, ಶಾಸಕರು ಹಾಗೂ ಸಚಿವರ ಕಾರ್ಯಕ್ರಮವನ್ನು ಬಹಿಷ್ಕರಿಸಿ ಎಂದು ಪ್ರಚೋದಿಸಿರುವ ಆಡಿಯೋ ಎಲ್ಲೆಡೆ ವೈರಲ್ ಆಗಿದ್ದು ಜಿಲ್ಲಾ ಕಾಂಗ್ರೆಸ್‌ನಲ್ಲಿ ಸಂಚಲನ ಮೂಡಿಸಿ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.

ADVERTISEMENT

ಕಾಂಗ್ರೆಸ್‌ ಮಹಿಳಾ ಘಟಕದ ಉಪಾಧ್ಯಕ್ಷೆ ಗಾಯಿತ್ರಮ್ಮ ಮಾತನಾಡಿ, ‘ಸಚಿವ ಸುಧಾಕರ್ ಇದೀಗ ಉನ್ನತ ಸ್ಥಾನದಲ್ಲಿದ್ದಾರೆ. ಈ ಹಿಂದೆ ಅವರು ಒಬ್ಬ ಮಹಿಳಾ ಅಧಿಕಾರಿ ಕುರಿತು ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾತನಾಡಿರುವ ಆಡಿಯೋ ವೈರಲ್ ಆಗುತ್ತಿದೆ. ಇದು ಮಹಿಳೆಯರಿಗೆ ಮಾಡುವ ಅಪಮಾನ’ ಎಂದು ದೂರಿದರು.

‘ಕಾಂಗ್ರೆಸ್ ಎಂದಿಗೂ ಮಹಿಳೆಯರನ್ನು ಪೂಜನೀಯ ಸ್ಥಾನದಲ್ಲಿ ನೋಡುತ್ತದೆ. ಅಷ್ಟೇ ಗೌರವ ನೀಡುತ್ತದೆ. ಆದರೆ ಡಾ.ಎಂ.ಸಿ.ಸುಧಾಕರ್ ಅವರು ಮಹಿಳಾ ಅಧಿಕಾರಿ ಬಗ್ಗೆ ಕೀಳಾಗಿ ಮಾತನಾಡಿದ್ದು ನಮ್ಮೆಲ್ಲರಿಗೂ ಬೇಸರ ತಂದಿದೆ. ಕೂಡಲೇ ಅವರು ಮಹಿಳೆಯರಲ್ಲಿ ಕ್ಷಮೆ ಕೇಳಬೇಕು’ ಎಂದು ಆಗ್ರಹಿಸಿದರು.

ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ ದೂರನ್ನು ನೀಡಿ ಈ ಆಡಿಯೋದ ಸತ್ಯಾಸತ್ಯತೆ ಪತ್ತೆ ಹಚ್ಚಬೇಕು ಎಂದು ಆಗ್ರಹಿಸುತ್ತೇವೆ. ಮಹಿಳಾ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ಸಚಿವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷರಿಗೂ ದೂರು ನೀಡುತ್ತೇವೆ ಎಂದರು.

ಸೌಮ್ಯ, ಆಶಾ, ರಾಧಮ್ಮ, ರೂಪ, ಮಂಜುಳಮ್ಮ ಮುತ್ತೂರು ಉಮಾ, ಲಕ್ಷ್ಮಮ್ಮ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.