ಗೌರಿಬಿದನೂರು: ನಗರದಲ್ಲಿ ಜಿಲ್ಲಾ ಕದಳಿ ಮಹಿಳಾ ವೇದಿಕೆ ಮತ್ತು ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕರ ಸಂಘದಿಂದ ಶನಿವಾರ ಸಾವಿತ್ರಿಬಾಯಿ ಫುಲೆ ಜಯಂತಿ ಆಚರಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್ ಮೂರ್ತಿ ಮಾತನಾಡಿ, ವಿಶ್ವದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಮಹಿಳೆಯರಿಗೆ ಶಿಕ್ಷಣ ಮರೀಚಿಕೆಯಾದ ಕಾಲದಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸಿ ಶಿಕ್ಷಣವೇ ಅಸ್ತ್ರ ಎಂದು ಶಿಕ್ಷಣಕ್ಕಾಗಿ ಹೋರಾಟ ಮಾಡಿ ಸಮಾಜದ ಬದಲಾವಣೆಗೆ ನಾಂದಿ ಹಾಡಿದ್ದರು. ಪುರುಷ ಪ್ರಧಾನ ಸಮಾಜದಲ್ಲಿ ಇಂದು ಮಹಿಳೆಯರು ಅನೇಕ ಕ್ಷೇತ್ರಗಳಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ ಎಂದು ತಿಳಿಸಿದರು.
ಕೆಎಚ್‌ಪಿ ಮುಖ್ಯಸ್ಥೆ ಶಶಿಕಲಾ ಮಾತನಾಡಿ, ಯಾವುದೇ ವ್ಯವಸ್ಥೆ ಇಲ್ಲದ ಕಾಲದಲ್ಲಿ ಸಾವಿತ್ರಿಬಾಯಿ ಫುಲೆ ಸಾಕಷ್ಟು ಸಾಧನೆ ಮಾಡಿದ್ದಾರೆ. ಆದರೆ ಇಂದಿನ ಕಾಲದಲ್ಲಿ ಮೊಬೈಲ್ ಗೀಳಿನಲ್ಲಿ ಜನತೆ ಮುಳುಗಿ ಹೋಗಿದ್ದಾರೆ. ಶಿಕ್ಷಕರು ಸಮಾಜದ ಅಂಕು ಡೊಂಕುಗಳನ್ನು ತಿದ್ದಬೇಕು ಎಂದು ತಿಳಿಸಿದರು.
ಸರ್ವೋದಯ ಸಂಘದ ಜಿಲ್ಲಾ ಅಧ್ಯಕ್ಷರಾದ ಪದ್ಮ ಮಾತನಾಡಿ, ಸಾವಿತ್ರಿಬಾಯಿ ಫುಲೆ ಸಮಾಜ ಸುಧಾರಣೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಮಹಿಳೆಯರಿಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು ಎಂದು ತಿಳಿಸಿದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳಾ ಸಾಧಕರನ್ನು ಸನ್ಮಾನಿಸಲಾಯಿತು.
ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್, ವೀರಣ್ಣ, ವಿಜಯ ಲಕ್ಷ್ಮಿ, ಶಿವಶಂಕರ, ಸಂಜೀವರಾಯಪ್ಪ, ಶೈಲಜಾ ಸಪ್ತಗಿರಿ, ಬಿಆರ್ ಶ್ರೀನಿವಾಸ್ ಮೂರ್ತಿ, ಗೀತಾ, ಪದ್ಮ, ಸೀತಾ, ಸುವರ್ಣಮ್ಮ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.