ADVERTISEMENT

ಬಡವರನ್ನು ಮುಖ್ಯವಾಹಿನಿಗೆ ತರಲು ಶ್ರಮಿಸಿ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2020, 16:14 IST
Last Updated 23 ಸೆಪ್ಟೆಂಬರ್ 2020, 16:14 IST
ಭೈರಪ್ಪ ಶಿವಲಿಂಗ ನಾಯಿಕ
ಭೈರಪ್ಪ ಶಿವಲಿಂಗ ನಾಯಿಕ   

ಚಿಕ್ಕಬಳ್ಳಾಪುರ: ‘ಸರ್ಕಾರದ ಯೋಜನೆಗಳು ಅರ್ಹ ಬಡ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ ಮುಂದಿನ ದಿನಗಳಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದೆ. ಅದಕ್ಕಾಗಿ ಜಿಲ್ಲೆಯಲ್ಲಿ ಬಡತನ ನಿರ್ಮೂಲನಾ ಯೋಜನೆ – 2015 ಕಾನೂನನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅಧಿಕಾರಿಗಳು ಸಹಕಾರ ನೀಡಬೇಕು’ ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಭೈರಪ್ಪ ಶಿವಲಿಂಗ ನಾಯಿಕ ತಿಳಿಸಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಡತನ ನಿರ್ಮೂಲನಾ ಯೋಜನೆ ಅರ್ಹ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಅದಕ್ಕಾಗಿ ಹೈಕೋರ್ಟ್‌ ನಿರ್ದೇಶನದಂತೆ ನಿವೃತ್ತ ನ್ಯಾಯಮೂರ್ತಿ ಎ.ಎನ್ ವೇಣುಗೋಪಾಲ್ ಗೌಡ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ’ ಎಂದು ಹೇಳಿದರು.

‘ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಸೆ.29 ರಂದು ವಿಡಿಯೊ ಸಂವಾದ ಮೂಲಕ ಬಡತನ ನಿರ್ಮೂಲನೆ ಯೋಜನೆಗಳ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಂದ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ಕಲೆ ಹಾಕಲಿದ್ದಾರೆ’ ಎಂದು ತಿಳಿಸಿದರು.

ADVERTISEMENT

‘ಬಳಿಕ, ಪ್ರತಿ ಗ್ರಾಮಗಳಿಗೆ ಪ್ರಾಧಿಕಾರದ ವತಿಯಿಂದ ಪ್ಯಾನಲ್ ವಕೀಲರನ್ನು ಕಾನೂನು ಸೇವೆಗಳ ಅಧಿಕಾರಿ ಎಂದು ನೇಮಕ ಮಾಡಲಾಗುತ್ತದೆ. ಪ್ರತಿಯೊಬ್ಬ ಅಧಿಕಾರಿಯ ಕೆಳಗೆ ಮೂರು ಜನ ಅರೆಕಾಲಿಕ ಕಾನೂನು ಸ್ವಯಂ ಸೇವಕರ ಸಮಿತಿ ರಚಿಸಲಾಗುತ್ತದೆ. ಈ ಸಮಿತಿ ಸದಸ್ಯರು ಪ್ರತಿ ಗ್ರಾಮದಲ್ಲಿ ಮನೆಮನೆಗೆ ಭೇಟಿ ನೀಡಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿದೆಯೇ? ಇಲ್ಲವೇ? ಎಂಬುದರ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಲಿದ್ದಾರೆ’ ಎಂದರು.

‘ಯೋಜನೆಯ ಪ್ರಯೋಜನೆವನ್ನು ಅರ್ಹ ವ್ಯಕ್ತಿಗೆ ತಲುಪುವಂತೆ ಮಾಡಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲ್ಲೂಕು ಸೇವೆಗಳ ಸಮಿತಿಗಳು ಕ್ರಮಕೈಗೊಳ್ಳಲಿವೆ. ಅದರ ಉಸ್ತುವಾರಿಗಾಗಿ ಪ್ರತಿ ತಂಡಕ್ಕೆ ಒಬ್ಬ ನ್ಯಾಯಾಧೀಶರನ್ನು ನೇಮಕ ಮಾಡಿ ಜವಾಬ್ದಾರಿ ನೀಡಲಾಗುತ್ತದೆ. ಜಿಲ್ಲಾ ಮಟ್ಟದಲ್ಲಿ ಸಹ ಎರಡು ತಂಡಗಳನ್ನು ರಚಿಸಲಾಗಿದೆ’ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅಮರೇಶ್ ಮಾತನಾಡಿ, ‘ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಮಾಧ್ಯಮಗಳ ಪಾತ್ರ ಬಹಳ ಮುಖ್ಯ. ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಕರ್ನಾಟಕ ರಾಜ್ಯ ಮೊದಲ ಸ್ಥಾನದಲ್ಲಿದೆ. ಇದನ್ನು ಸಮರ್ಪಕವಾಗಿ ಕಾರ್ಯಗತಗೊಳಿಸುವಂತೆ ಮಾಡಬೇಕಾಗಿದೆ’ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶ ಎಚ್.ದೇವರಾಜು, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಗಿರಿಜಾಶಂಕರ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.