ADVERTISEMENT

ಉಚಿತ ಬಸ್‌ ಪಾಸ್‌ ನೀಡಲು ಆಗ್ರಹ

ತಾಲ್ಲೂಕು ಕಚೇರಿ ಎದುರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 7 ಜುಲೈ 2018, 12:23 IST
Last Updated 7 ಜುಲೈ 2018, 12:23 IST
ಎಬಿವಿಪಿ ಕಾರ್ಯಕರ್ತರು, ವಿದ್ಯಾರ್ಥಿಗಳು ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಎಬಿವಿಪಿ ಕಾರ್ಯಕರ್ತರು, ವಿದ್ಯಾರ್ಥಿಗಳು ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.   

ಚಿಕ್ಕಬಳ್ಳಾಪುರ: ಸಮ್ಮಿಶ್ರ ಸರ್ಕಾರದ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು, ವಿದ್ಯಾರ್ಥಿಗಳು ನಗರದ ತಾಲ್ಲೂಕು ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಎಬಿವಿಪಿ ವಿಭಾಗದ ಸಂಚಾಲಕ ಮಂಜುನಾಥ್‌ ರೆಡ್ಡಿ, ‘ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಮತ್ತು ಹಿಂದುಳಿದ ವರ್ಗಗಗಳ ಬಡ ವಿದ್ಯಾರ್ಥಿಗಳಿಗೆ ಪ್ರಸಕ್ತ ಸಾಲಿನಲ್ಲಿ ಉಚಿತ ಬಸ್‌ ಪಾಸ್‌ ನೀಡುವುದಾಗಿ ಹಿಂದಿನ ಕಾಂಗ್ರೆಸ್‌ ಸರ್ಕಾರ ಬಜೆಟ್‌ನಲ್ಲಿ ಘೋಷಣೆ ಮಾಡಿತ್ತು. ಆದರೆ, ಈಗಾಗಲೇ ಶಾಲಾ–ಕಾಲೇಜುಗಳು ಆರಂಭಗೊಂಡು ಒಂದು ತಿಂಗಳು ಕಳೆದರೂ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ವಿತರಣೆ ಮಾಡಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇತ್ತೀಚೆಗೆ ಮಂಡಿಸಿದ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರವನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ವಿದ್ಯಾರ್ಥಿಗಳಿಗೆ ಅವಶ್ಯವಿರುವ ಉಚಿತ ಬಸ್‌ ಪಾಸ್‌ ವಿತರಣೆ , ಪರಿಶಿಷ್ಟ ಜಾತಿ ಮತ್ತು ಪಂಗಡ ಮತ್ತು ಹಿಂದುಳಿದ ವರ್ಗಗಗಳ ವಿದ್ಯಾರ್ಥಿನಿಲಯಗಳ ಉನ್ನತೀಕರಣ, ಖಾಲಿಯಿರುವ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ನೇಮಕಾತಿಯ ಬಗ್ಗೆ ಪ್ರಸ್ತಾಪಿಸಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಪಾಲಿಗೆ ನಿರಾಶದಾಯಕ ಬಜೆಟ್‌ ಆಗಿದೆ’ ಎಂದು ಆರೋಪಿಸಿದರು.

ADVERTISEMENT

‘ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದಂತೆ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ವ್ಯವಸ್ಥೆ ಮುಂದುವರಿಸಬೇಕು. ಒಂದು ವೇಳೆ ಬಸ್‌ ಪಾಸ್‌ ನೀತಿಯಲ್ಲಿ ಬದಲಿಸಿದರೆ ರಾಜ್ಯದಾದ್ಯಂತ ಹೋರಾಟ ಮಾಡಲಾಗುವುದು’ ಎಂದು ಎಚ್ಚರಿಕೆ ನೀಡಿದರು. ಎಬಿವಿಪಿ ಕಾರ್ಯಕರ್ತರಾದ ಚರಣ್‌, ಬಾಬುರೆಡ್ಡಿ, ಪ್ರಶಾಂತ್‌, ವಿನಯ್‌, ಜಾನಕಿ, ಶಿಲ್ಪ, ರಶ್ಮಿ, ಪೂರ್ಣಿಮಾ ಪ್ರತಿಭಟನೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.