
ಶಿಡ್ಲಘಟ್ಟ: ರಾಜ್ಯ ಸರ್ಕಾರವು ಪ್ರತಿ ಟನ್ ಕಬ್ಬಿಗೆ ₹3,500 ಬೆಂಬಲ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಸಮಿತಿ ವತಿಯಿಂದ ಗುರುವಾರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರಿಗೆ ಮನವಿ ಸಲ್ಲಿಸಲಾಯಿತು.
ಒಂದು ವೇಳೆ ತಮ್ಮ ಬೇಡಿಕೆ ಈಡೇರದಿದ್ದರೆ, ರಾಜ್ಯದಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಸಂಘಟನೆಯು ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
ಜಿಲ್ಲೆಯಲ್ಲಿ ಕೆರೆ ಕುಂಟೆಗಳಲ್ಲಿ ಜಾಲಿಗಿಡಗಳು ಬೆಳೆದಿದ್ದು, ಅವುಗಳನ್ನು ತೆರವುಗೊಳಿಸಬೇಕು. ಗೌರಿಬಿದನೂರಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ರೈತರಲ್ಲಿ ಭಯ ಹುಟ್ಟಿಸಿದೆ. ಚಿರತೆ ಹಿಡಿಯಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಪ್ರತಿ ಕ್ವಿಂಟಲ್ ಮೆಕ್ಕೆಜೋಳಕ್ಕೆ ಸರ್ಕಾರವು ₹3,800 ಬೆಂಬಲ ಬೆಲೆ ಘೋಷಣೆ ಮಾಡಿದೆ. ಆದರೆ, ಇನ್ನೂ ಖರೀದಿ ಕೇಂದ್ರವೇ ಆರಂಭವಾಗಿಲ್ಲ. ಇದರಿಂದ ರೈತರಿಗೆ ತೊಂದರೆಯಾಗಿದೆ. ಕೂಡಲೇ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಸರ್ಕಾರ ಕ್ರಮ ವಹಿಸಬೇಕು ಎಂದು ರೈತರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಪ್ರತೀಶ್, ಜಿಲ್ಲಾ ಯುವ ಘಟಕ ಅಧ್ಯಕ್ಷ ನಲ್ಲೇನಹಳ್ಳಿ ಎನ್.ಸಿ. ಸುಬ್ರಮಣಿ, ಗೌರಿಬಿದನೂರು ತಾಲ್ಲೂಕು ಅಧ್ಯಕ್ಷ ಲೋಕೇಶಗೌಡ, ಕಾರ್ಯದರ್ಶಿ ರಾಜಣ್ಣ, ಮುದ್ದುಗಂಗಪ್ಪ, ಎ.ಎನ್.ಮುನೇಗೌಡ, ನವೀನ್ ಕುಮಾರ್, ನಿರಂಜನ, ದಿವಾಕರ್, ಶಂಕರ್, ಚಂದನ್ ಕುಮಾರ್, ಮಹಿಳಾ ಘಟಕದ ಸುವರ್ಣಮ್ಮ, ಅಮರಮ್ಮ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.