ADVERTISEMENT

ಕುಡಿಯುವ ನೀರು ಸಮರ್ಪಕವಾಗಿ ಪೂರೈಸಿ

ಕುಡಿಯುವ ನೀರಿನ ಕಾರ್ಯಪಡೆ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ ಚಿಕ್ಕನರಸಿಂಹಯ್ಯ ಸೂಚನೆ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2020, 14:29 IST
Last Updated 7 ಏಪ್ರಿಲ್ 2020, 14:29 IST
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮಾತನಾಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮಾತನಾಡಿದರು.   

ಚಿಕ್ಕಬಳ್ಳಾಪುರ: ‘ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನೈರ್ಮಲ್ಯಕ್ಕೆ ಹೆಚ್ಚು ಒತ್ತು ನೀಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ ಚಿಕ್ಕನರಸಿಂಹಯ್ಯ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕುಡಿಯುವ ನೀರಿನ ಕಾರ್ಯಪಡೆ ಸಭೆಯಲ್ಲಿ ಅವರು ಮಾತನಾಡಿದರು.

‘ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮೂರು ತಿಂಗಳ ಯೋಜನಾ ವರದಿ ಸಿದ್ಧಪಡಿಸಿಕೊಳ್ಳಬೇಕು. ಕೊರೊನಾ ಸೋಂಕಿನ ಕಾರಣಕ್ಕೆ ಪಟ್ಟಣ ಪ್ರದೇಶಗಳಿಂದ ಗ್ರಾಮೀಣ ಪ್ರದೇಶಗಳಿಗೆ ಹೆಚ್ಚು ಜನರು ಆಗಮಿಸಿರುವುದರಿಂದ ನೀರಿನ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಕುಡಿಯುವ ನೀರು ಪೂರೈಕೆ ಮಾಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು’ ಎಂದು ಹೇಳಿದರು.

ADVERTISEMENT

‘ಗ್ರಾಮೀಣ ಪ್ರದೇಶಗಳಲ್ಲಿರುವ ಗ್ರಾಮ ಕಾರ್ಯಪಡೆಗಳು ಕ್ರೀಯಾಶೀಲವಾಗಿ ಕಾರ್ಯನಿರ್ವಹಿಸಬೇಕು. ಪ್ರತಿಯೊಬ್ಬ ಅಧಿಕಾರಿಯು ಸಮಸ್ಯೆಗಳಿರುವ ಸ್ಥಳಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ಮಾಡಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮಾತನಾಡಿ, ‘ಕೊರೊನಾ ಸೋಂಕು ತಡೆಗಟ್ಟಲು ಪ್ರತಿ ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಕೊರೊನಾ ಬಗ್ಗೆ ಸಾರ್ವಜನಿಕರಿಗೆ ಇನ್ನಷ್ಟು ಜಾಗೃತಿ ಮೂಡಿಸಲು ಕ್ರಮಕೈಗೊಳ್ಳಬೇಕು, ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು’ ಎಂದು ತಿಳಿಸಿದರು.

‘ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿಗಳು ಖುದ್ದಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಲಭ್ಯ ಹಾಗೂ ಅಗತ್ಯವಿರುವ ಔಷಧಿಗಳ ಬಗ್ಗೆ ಖಾತ್ರಿ ಪಡಿಸಿಕೊಂಡು ವರದಿ ಸಲ್ಲಿಸಬೇಕು’ ಎಂದು ಸೂಚಿಸಿದರು. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ನಿರ್ಮಲಾ ಮುನಿರಾಜು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.