ಶಿಡ್ಲಘಟ್ಟ: ತಾಲ್ಲೂಕಿನ ಭಕ್ತರಹಳ್ಳಿ ಗ್ರಾಮದ ಸಮುದಾಯ ಭವನದಲ್ಲಿ ಗುರುವಾರ ತಾಲ್ಲೂಕು ಪಂಚಾಯಿತಿಯಿಂದ ಮಹಿಳಾ ಸಬಲೀಕರಣ ಅರಿವು ಹಾಗೂ ದೌರ್ಜನ್ಯ ಮುಕ್ತ ಅಭಿಯಾನ ಕಾರ್ಯಕ್ರಮ ನಡೆಯಿತು.
ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಗರ್ಭಿಣಿಯರಿಗೆ ಸೀಮಂತ ಕಾರ್ಯವನ್ನು ತಾಲ್ಲೂಕು ಪಂಚಾಯಿತಿಯಿಂದ ನಡೆಸಿಕೊಡಲಾಯಿತು.
ತಾಲ್ಲೂಕು ಪಂಚಾಯಿತಿ ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ ಮಾತನಾಡಿ, ಮಹಿಳೆಯರು ಕೇವಲ ಮನೆ ಕೆಲಸಕ್ಕೆ ಸೀಮಿತವಾಗದೆ ಎಲ್ಲ ಕ್ಷೇತ್ರಗಳಲ್ಲೂ ತಮ್ಮನ್ನು ತೊಡಗಿಸಿಕೊಳ್ಳಬೇಕು. ತಮ್ಮಲ್ಲಿನ ಶಕ್ತಿ ಪ್ರತಿಭೆ ಬಳಸಿಕೊಂಡು ಎಲ್ಲ ಕ್ಷೇತ್ರಗಳಲ್ಲೂ ಅಭಿವೃದ್ದಿಯ ಹೆಜ್ಜೆ ಇಡುವಂತಾಗಬೇಕೆಂದು ಹೇಳಿದರು.
ಸಮಾಜದ ಅಭಿವೃದ್ಧಿ, ಪ್ರಗತಿಯ ಚಟುವಟಿಕೆ, ಆಡಳಿತದ ಪ್ರತಿ ಹಂತದಲ್ಲೂ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಬೇಕು ಎನ್ನುವುದೆ ಸರಕಾರದ ಉದ್ದೇಶವಾಗಿದೆ. ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚುವುದರಿಂದ ಮಹಿಳೆಯ ಸಬಲೀಕರಣ ಆಗಲಿದೆ ಎಂದು ಅಭಿಪ್ರಾಯಪಟ್ಟರು.
ಮಹಿಳೆಯರಿಗಾಗಿ ಮೀಸಲಾದ ಕಾರ್ಯಕ್ರಮ ಇದಾಗಿದ್ದು, ಈ ಕಾರ್ಯಕ್ರಮದಲ್ಲಿ ಮಹಿಳೆಯರು, ಗರ್ಭಿಣಿಯರು ಹಾಗೂ ಮಹಿಳೆಯರಿಗೆ ಉಂಟಾಗುವ ಸಮಸ್ಯೆಗಳಿಗೆ ಆರೋಗ್ಯ ಇಲಾಖೆ ಸೇರಿದಂತೆ ಯಾವ ಯಾವ ಇಲಾಖೆ ಯಾವ ರೀತಿ ಸ್ಪಂದಿಸುತ್ತದೆ ಎನ್ನುವುದರ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಮಹಿಳೆಯರಿಗೆ ಅವರ ಹಕ್ಕುಗಳು ಹಾಗೂ ಕರ್ತವ್ಯಗಳ ಬಗ್ಗೆ ಮನವರಿಕೆ ಮಾಡಿಕೊಡುವುದು ಸೇರಿದಂತೆ ಸಮಾಜದಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಮಹಿಳೆಯರಿಗೆ ಸಿಗಬೇಕಾದ ಸವಲತ್ತು ಕಲ್ಪಿಸಲು ಈ ಕಾರ್ಯಕ್ರಮ ಅನುಕೂಲಕರವಾಗಿದೆ ಎಂದರು.
ಅನಿರ್ಭಂತ ಹಣಕಾಸು ಯೋಜನೆಯಡಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಿಸಲಿಟ್ಟ ಅನುದಾನದಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಈ ಯೋಜನೆಯನ್ನು ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲೂ ಅನುಷ್ಟಾನಗೊಳಿಸಲಾಗುತ್ತಿದೆ ಎಂದು ಹೇಳಿದರು.
ಭಕ್ತರಹಳ್ಳಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಂಜನ್ ಕುಮಾರ್, ಆರೋಗ್ಯ ಇಲಾಖೆಯ ಮುನಿರತ್ನಮ್ಮ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.