ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಯೂರಿಯಾ ರಸಗೊಬ್ಬರದ ದಾಸ್ತಾನು ಪ್ರಸ್ತುತ 3,150 ಟನ್ ಇದೆ. ರೈತರ ಬೇಡಿಕೆಗೆ ಅನುಗುಣವಾಗಿ ಪೂರೈಕೆಗೆ ಕ್ರಮವಹಿಸಲಾಗಿದೆ. ರೈತರು ಹೆಚ್ಚಿನ ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ತಿಳಿಸಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ವಿಪತ್ತು ನಿರ್ವಹಣಾ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು.
ಜಿಲ್ಲೆಯಲ್ಲಿ ಈ ವರ್ಷ ವಾಡಿಕೆಗಿಂತ ಶೇ 16ರಷ್ಟು ಹೆಚ್ಚಿಗೆ ಮಳೆ ಆಗಿದೆ. ಈ ಕಾಲಾವಧಿಗೆ 251 ಮಿ.ಮೀ ವಾಡಿಕೆ ಇದ್ದು 291 ಮಿ.ಮೀ ಮಳೆಯಾಗಿದೆ. ಮಳೆ ಉತ್ತಮವಾಗಿ ಆಗಿರುವುದರಿಂದ ಬಿತ್ತನೆ ಕಾರ್ಯಗಳು ಚುರುಕಾಗಿವೆ. ರೈತರು ಈಗಾಗಲೇ 8,900 ಟನ್ ರಸಗೊಬ್ಬರವನ್ನು ಖರೀದಿಸಿ ಕೃಷಿ ಚಟುವಟಿಕೆಗಳಿಗೆ ಬಳಕೆ ಮಾಡಿದ್ದಾರೆ ಎಂದರು.
ರೈತರ ಅಗತ್ಯಕ್ಕೆ ತಕ್ಕಂತೆ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳನ್ನು ಪೂರೈಸಲು ಜಿಲ್ಲಾಡಳಿತ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದರು.
ಮಳೆಬಾರದಿದ್ದಲ್ಲಿ 164 ಗ್ರಾಮಗಳಲ್ಲಿ ನೀರಿನ ಸಮಸ್ಯೆ: ಜಿಲ್ಲೆಯಲ್ಲಿ ಪ್ರಸ್ತುತ 27 ಗ್ರಾಮಗಳಿಗೆ ಹಾಗೂ 25 ವಾರ್ಡ್‌ಗಳಿಗೆ ಖಾಸಗಿ ಕೊಳವೆ ಬಾವಿಗಳಿಂದ ನೀರು ಪಡೆದು ಪೂರೈಕೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮಳೆಬಾರದಿದ್ದಲ್ಲಿ 26 ವಾರ್ಡ್‌ಗಳು ಹಾಗೂ 164 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ಹೇಳಿದರು.
ಈಗಾಗಲೇ 66 ಖಾಸಗಿ ಕೊಳವೆ ಬಾವಿ ಮಾಲೀಕರೊಂದಿಗೆ ಮುನ್ನೆಚ್ಚರಿಕೆಯಾಗಿ ಒಪ್ಪಂದ ಮಾಡಿಕೊಳ್ಳಲಾಗಿದೆ. ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಆಗಬಾರದು ಎಂದು ಸೂಚಿಸಿದರು.
ಮಳೆ ಹಾನಿ ಪರಿಹಾರಕ್ಕೆ ಜಿಲ್ಲಾಡಳಿತವು ತಾಲ್ಲೂಕುವಾರು ಸಹಾಯವಾಣಿ ತೆರೆದಿದೆ. ಕರೆ ಮಾಡಿ ನೆರವು ಪಡೆದುಕೊಳ್ಳಬಹುದು ಎಂದು ಸಲಹೆ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್. ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಎಚ್. ಅಶ್ವಿನ್, ಜಂಟಿ ಕೃಷಿ ನಿರ್ದೇಶಕಿ ಜಾವೀದಾ ನಸೀಮಾ ಖಾನಂ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.