ADVERTISEMENT

ತಂಬಾಕು ಸೇವನೆ: ದಂಡ ವಸೂಲಿಗೆ ಸೂಚನೆ

ಜಿಲ್ಲಾ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಚ್‌. ಅಮರೇಶ್

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2021, 3:06 IST
Last Updated 19 ಫೆಬ್ರುವರಿ 2021, 3:06 IST
ಜಿಲ್ಲಾಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಚ್‌.ಅಮರೇಶ್‌ ಮಾತನಾಡಿದರು
ಜಿಲ್ಲಾಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಚ್‌.ಅಮರೇಶ್‌ ಮಾತನಾಡಿದರು   

ಚಿಕ್ಕಬಳ್ಳಾಪುರ: ತಂಬಾಕು ಸೇವನೆಯಿಂದ ಆರೋಗ್ಯ ಹದಗೆಡುತ್ತದೆ. ಜೊತೆಗೆ, ನೆರೆಹೊರೆಯವರ ಮೇಲೂ ಇದು ಹೆಚ್ಚು ದುಷ್ಪರಿಣಾಮ ಬೀರುತ್ತದೆ. ಹಾಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಸೇರಿದಂತೆ ತಂಬಾಕು ಸೇವನೆ ಮಾಡುವವರ ವಿರುದ್ಧ ಕಾನೂನು ರೀತಿಯಲ್ಲಿ ದಂಡ ವಸೂಲಿಗೆ ಕ್ರಮಕೈಗೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಚ್‌. ಅಮರೇಶ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಮತ್ತು ಕೊಟ್ಪಾ ಕಾಯ್ದೆ ಅನುಷ್ಠಾನ ಕುರಿತು ಜಿಲ್ಲಾಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಈಗಾಗಲೇ ಜಿಲ್ಲೆಯಾದ್ಯಂತ ಹಲವು ತಂಬಾಕು ನಿಯಂತ್ರಣ ಕಾರ್ಯಕ್ರಮಗಳು ಹಾಗೂ ಗುಲಾಬಿ ಚಳವಳಿಯ ಜಾಥಾಗಳನ್ನೂ ನಡೆಸಲಾಗಿದೆ. ತಂಬಾಕು ಸೇವನೆಯಿಂದ ಮನುಷ್ಯನ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜನಸಾಮಾನ್ಯರಿಗೆ ಹಾಗೂ ಯುವಕರಿಗೆ ಇನ್ನೂ ಹೆಚ್ಚಿನ ರೀತಿಯಲ್ಲಿ ಅರಿವಿನ ಅಗತ್ಯವಿದೆ ಎಂದರು.

ADVERTISEMENT

ತಂಬಾಕು ಸೇವನೆಯಲ್ಲಿ ತೊಡಗಿರುವವರನ್ನು ಮುಕ್ತಗೊಳಿಸಬೇಕು ಹಾಗೂ ತಂಬಾಕು ಉತ್ಪನ್ನಗಳ ಸೇವನೆ
ಯಲ್ಲಿ ಹೊಸಬರು ಸೇರ್ಪಡೆಯಾಗದಂತೆ ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಾರ್ವಜನಿಕ ಸ್ಥಳಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ ಹಾಗೂ ಚಿಕ್ಕ-ಚಿಕ್ಕ ಅಂಗಡಿ ಮುಂಗಟ್ಟುಗಳು ಹಾಗೂ ಆಸ್ಪತ್ರೆಯ ಸುತ್ತಲೂ ಸ್ವಚ್ಛತೆಯ ಕಾಪಾಡಿಕೊಳ್ಳುವುದರ ಜೊತೆಗೆ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು.

ಕೊಟ್ಪಾ ಕಾಯ್ದೆಯನ್ನು ಉಲ್ಲಂಘಿಸಿ ನಿಷೇಧ ಪ್ರದೇಶಗಳಲ್ಲಿ ತಂಬಾಕು ಸೇವನೆ ಮಾಡಿದವರು ತಾಲೂಕುವಾರು ಈಗಾಗಲೇ 528 ಮಂದಿಗೆ ದಂಡ ವಿಧಿಸಿದ್ದು, ಒಟ್ಟು ₹39.500 ದಂಡ ಸಂಗ್ರಹಿಸಲಾಗಿದೆ. ಜಿಲ್ಲೆಯಾದ್ಯಂತ 18 ವರ್ಷದೊಳಗಿನ ವಯಸ್ಕರಿಗೆ ತಂಬಾಕು ಹಾಗೂ ಧೂಮಪಾನ ಮಾರಾಟ ಮಾಡದಂತೆ ಕ್ರಮ ಜರುಗಿಸಲಾಗಿದ್ದು, ಶೇ 80.77ರಷ್ಟು ಪ್ರಗತಿ ಸಾಧಿಸಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದಿರಾ ಆರ್ ಕಬಾಡೆ, ಡಿಎಲ್‍ಓ ಶಿವಕುಮಾರ್, ಜಿಲ್ಲಾ ಸರ್ಜನ್ ಡಾ.ರಮೇಶ್, ಆರೋಗ್ಯ ಸುರಕ್ಷತಾ ಅಧಿಕಾರಿ ಡಾ.ಮೀಟಿ, ಜಿಲ್ಲಾ ಸಲಹೆಗಾರರು ರಾಘವೇಂದ್ರರೆಡ್ಡಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.