ADVERTISEMENT

ಡಿಕೆಶಿ ಹೇಳಿಕೆ ಖಂಡಿಸಿ ಸುಧಾಕರ್ ನೇತೃತ್ವದಲ್ಲಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2019, 10:01 IST
Last Updated 29 ಅಕ್ಟೋಬರ್ 2019, 10:01 IST
ಡಾ.ಕೆ.ಸುಧಾಕರ್
ಡಾ.ಕೆ.ಸುಧಾಕರ್    

ಚಿಕ್ಕಬಳ್ಳಾಪುರ: ಕನಕಪುರದಿಂದ ಚಿಕ್ಕಬಳ್ಳಾಪುರಕ್ಕೆ ವರ್ಗಾವಣೆಗೊಂಡಿರುವ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಪುನಃ ಕನಕಪುರಕ್ಕೆ ತೆಗೆದುಕೊಂಡು ಹೋಗುವೆ ಎಂಬ ಶಾಸಕ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಖಂಡಿಸಿ ಅನರ್ಹ ಶಾಸಕ ಡಾ.ಕೆ.ಸುಧಾಕರ್ ಅವರ ನೇತೃತ್ವದಲ್ಲಿ ನಗರದಲ್ಲಿ ಬುಧವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸುಧಾಕರ್, ‘2014–15 ನೇ ಸಾಲಿನ ಬಜೆಟ್‌ನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜನ್ನು ಹಿಂದಿನ ಸಮ್ಮಿಶ್ರ ಸರ್ಕಾರದಲ್ಲಿ ಅಕ್ರಮವಾಗಿ ಕನಕಪುರಕ್ಕೆ ವರ್ಗಾವಣೆ ಮಾಡಲಾಗಿತ್ತು. ನನ್ನ ಪರಿಶ್ರಮದಿಂದ ಕಾಲೇಜನ್ನು ಮುಖ್ಯಮಂತ್ರಿ ಅವರು ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿ ಚಿಕ್ಕಬಳ್ಳಾಪುರಕ್ಕೆ ವರ್ಗಾವಣೆ ಮಾಡಿದ್ದಾರೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ವೈದ್ಯಕೀಯ ಕಾಲೇಜು ಚಿಕ್ಕಬಳ್ಳಾಪುರದ ಆಸ್ತಿ. ಯಾವುದೇ ಕಾರಣಕ್ಕೂ ಇದನ್ನು ಬಿಟ್ಟುಕೊಡುವುದಿಲ್ಲ. ಆದ್ದರಿಂದ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಹಾಗೂ ಜಿಲ್ಲೆಯ ಎಲ್ಲಾ ನಾಗರಿಕ ಬಂಧುಗಳು, ಎಲ್ಲಾ ಜನಪ್ರತಿನಿಧಿಗಳು, ಸ್ಥಳೀಯ ಸಂಸ್ಥೆಗಳ ಪದಾಧಿಕಾರಿಗಳು, ರೈತ ಮುಖಂಡರು, ಮಹಿಳಾ ಮುಖಂಡರು ಪಕ್ಷಾತೀತವಾಗಿ ಪ್ರತಿಭಟನೆಯಲ್ಲಿ ಭಾಗವಹಿಸಬೇಕು. ನಮ್ಮ ಆಸ್ತಿಯಾದ ವೈದ್ಯಕೀಯ ಕಾಲೇಜು ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ’ ಎಂದು ಹೇಳಲಾಗಿದೆ.

ADVERTISEMENT

ನಗರದಲ್ಲಿ ಬುಧವಾರ ಬೆಳಿಗ್ಗೆ ಪಿಎಲ್‌ಡಿ ಬ್ಯಾಂಕ್‌ನಿಂದ ಬಿ.ಬಿ.ರಸ್ತೆಯಲ್ಲಿರುವ ಶಿಡ್ಲಘಟ್ಟ ವೃತ್ತದ ವರೆಗೆ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.