ADVERTISEMENT

ಬೆಳೆ ಸಮೀಕ್ಷೆ ಆ್ಯಪ್ ಬಳಸಿ; ವಿವರ ನೀಡಿ

ಶಿಡ್ಲಘಟ್ಟದಲ್ಲಿ ನಡೆದ ಸಭೆಯಲ್ಲಿ ರೈತರಿಗೆ ತಹಶೀಲ್ದಾರ್ ಕೆ.ಅರುಂಧತಿ ಸಲಹೆ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2020, 4:40 IST
Last Updated 14 ಆಗಸ್ಟ್ 2020, 4:40 IST
ಶಿಡ್ಲಘಟ್ಟದ ತಾಲ್ಲೂಕು ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬೆಳೆ ಸಮೀಕ್ಷೆ ಆ್ಯಪ್ ಬಳಸುವ ವಿಧಾನದ ಕುರಿತು ತಾಲ್ಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಸ್.ವಿ.ಮಂಜುನಾಥ್ ಮಾಹಿತಿ ನೀಡಿದರು
ಶಿಡ್ಲಘಟ್ಟದ ತಾಲ್ಲೂಕು ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬೆಳೆ ಸಮೀಕ್ಷೆ ಆ್ಯಪ್ ಬಳಸುವ ವಿಧಾನದ ಕುರಿತು ತಾಲ್ಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಸ್.ವಿ.ಮಂಜುನಾಥ್ ಮಾಹಿತಿ ನೀಡಿದರು   

ಶಿಡ್ಲಘಟ್ಟ: 2020-21ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಜಿಲ್ಲೆಯಾದ್ಯಂತ ಆ. 11ರಿಂದ ಆರಂಭವಾಗಿದ್ದು, ರೈತರು ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆ ವಿವರಗಳನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದುತಹಶೀಲ್ದಾರ್ ಕೆ.ಅರುಂಧತಿ ಹೇಳಿದರು.

ನಗರದ ತಾಲ್ಲೂಕು ಕಚೇರಿಯಲ್ಲಿ ಬೆಳೆ ಸಮೀಕ್ಷೆಗೆ ಸಂಬಂಧಿಸಿದಂತೆ ಕೈಗೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸಿ ಮಾತನಾಡಿದರು.

ತಾಲ್ಲೂಕಿನಲ್ಲಿ ಜಮೀನಿನಲ್ಲಿ ಯಾವ ಬೆಳೆ ಬೆಳೆದಿದ್ದಾರೆ ಎಂಬ ಬಗ್ಗೆ ನಿಖರ ಮಾಹಿತಿಯನ್ನು ಅಪಡೇಟ್ ಮಾಡಲು ಸರ್ಕಾರ ಆ್ಯಪ್ ಪರಿಚಯಿಸಿದ್ದು, ರೈತರು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಕೋರಿದರು.

ADVERTISEMENT

ತಾಲ್ಲೂಕು ಕೃಷಿ ಸಹಾಯಕ ನಿರ್ದೇಶಕ ಡಾ.ಎಸ್.ವಿ.ಮಂಜುನಾಥ್ ಮಾತನಾಡಿ, ಗೂಗಲ್ ಪ್ಲೇಸ್ಟೋರ್‌ನಲ್ಲಿ ‘ರೈತರ ಬೆಳೆ ಸಮೀಕ್ಷೆ’ ಎಂಬ ಹೆಸರಿನ ಆ್ಯಪ್‌ ಅನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಬಳಿಕ ರೈತರ ಹೆಸರು, ಮೊಬೈಲ್ ಸಂಖ್ಯೆ ಮತ್ತು ಓಟಿಪಿ ಸಂಖ್ಯೆಯನ್ನು ನಮೂದಿಸಿ ನೋಂದಣಿ ಮಾಡಿಕೊಳ್ಳಬೇಕು ಎಂದು ವಿವರಿಸಿದರು.

ಮೊಬೈಲ್ ಆ್ಯಪ್‌ನಲ್ಲಿ ಮೊದಲು ಮಾಸ್ಟರ್ ವಿವರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ನಂತರ ತಮ್ಮ ಜಮೀನಿನ ಸರ್ವೆ ನಂಬರ್‌ಗಳನ್ನು ಆ್ಯಪ್‌ನಲ್ಲೆ ಸೇರಿಸಬೇಕು. ಮುಂದಿನ ಹಂತದಲ್ಲಿ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರಗಳನ್ನು ದಾಖಲಿಸಬೇಕು. ಈ ಹಂತದಲ್ಲಿ ರೈತರು ತಮ್ಮ ಜಮೀನಿನಲ್ಲಿ ಪಾಳು ಬಿದ್ದಿರುವ ಪ್ರದೇಶ, ಈಗಾಗಲೇ ಕಟಾವಾದ ಪ್ರದೇಶ, ಕೃಷಿಯೇತರ ಉದ್ದೇಶಕ್ಕೆ (ಕೊಟ್ಟಿಗೆ, ಕೃಷಿ, ಹೊಂಡ, ಮನೆ ಇತರೆ) ಬಳಕೆಯಾದ ಪ್ರದೇಶದ ವಿವರಗಳನ್ನು ಸಹ ದಾಖಲಿಸಬೇಕು. ಜತೆಗೆ ರೈತರು ತಾವು ಬೆಳೆದ ಪ್ರತಿ ಬೆಳೆಯ ವಿಸ್ತೀರ್ಣದ ಜತೆಗೆ 20 ಛಾಯಾಚಿತ್ರಗಳನ್ನು ತೆಗೆದು ಅಪ್‌ಲೋಡ್ ಮಾಡಬೇಕು ಎಂದು ತಿಳಿಸಿದರು.

ಅಪ್‌ಲೋಡ್ ಮಾಡಲಾದ ಮಾಹಿತಿಯನ್ನು ಪ್ರತಿ ಗ್ರಾಮಕ್ಕೆ ನೇಮಿಸಲಾದ ಸರ್ಕಾರಿ ಅಧಿಕಾರಿಗಳು (ಮೇಲ್ವಿಚಾರಕರು) ಪರಿಶೀಲಿಸಿ ಅನುಮೋದಿಸುತ್ತಾರೆ. ರೈತರು ಸ್ವತಃ ತಮ್ಮ ಬೆಳೆ ವಿವರಗಳನ್ನು ಆ. 24 ರೊಳಗೆ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಸಭೆಯಲ್ಲಿ ಕೃಷಿ ಇಲಾಖೆಯ ಅಧಿಕಾರಿ ಶ್ರೀನಿವಾಸ್, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್, ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ರಾಮಕೃಷ್ಣಪ್ಪ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.