ಚಿಕ್ಕಬಳ್ಳಾಪುರ: ಶಾಲಾ ಮತ್ತು ಶಿಕ್ಷಣ ಇಲಾಖೆಯು ಶಾಲಾ ಕಾಲೇಜುಗಳಲ್ಲಿ ತಿಂಗಳಿಗೆ ಒಮ್ಮೆ ಸಾರ್ವತ್ರಿಕ ಲಸಿಕೆ ಕಾರ್ಯಕ್ರಮದಡಿ ದಡಾರ, ರುಬೆಲ್ಲಾ ನಿರ್ಮೂಲನೆ ಚಟುವಟಿಕೆ ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ‘ರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಕುರಿತ ಟಾಸ್ಕ್ ಫೋರ್ಸ್ ಸಮಿತಿ’ ಸಭೆಯಲ್ಲಿ ಮಾತನಾಡಿದರು.
ರುಬೆಲ್ಲಾ ಸೋಂಕಿತ ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿಯಲ್ಲಿ ದಡಾರ, ರುಬೆಲ್ಲಾ ನಿರ್ಮೂಲನೆ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು. ಕಟ್ಟಡ ಕಾರ್ಮಿಕರ ಪ್ರದೇಶಗಳ ಮಾಹಿತಿಯನ್ನು ಆರೋಗ್ಯ ಇಲಾಖೆಗೆ ಒದಗಿಸಿ ಲಸಿಕೀಕರಣದಿಂದ ವಂಚಿತವಾಗಿರುವ ಮಕ್ಕಳನ್ನು ಗುರುತಿಸಬೇಕು. ಅವರ ಮಾಹಿತಿಯನ್ನು ಕಾರ್ಮಿಕ ಇಲಾಖೆಯವರು ಆರೋಗ್ಯ ಇಲಾಖೆಗೆ ತಿಳಿಸಬೇಕು ಎಂದರು.
ನಗರ ಪ್ರದೇಶಗಳಲ್ಲಿ ವಿಶೇಷವಾಗಿ ಕೊಳೆಗೇರಿಗಳಲ್ಲಿ ನಗರ ಪ್ರದೇಶಗಳ ಹೊರವಲಯಗಳಲ್ಲಿ ಅಭಿಯಾನ ನಡೆಸಲು ನಗರ ಲಸಿಕಾ ಕಾರ್ಯಪಡೆ ಸಮಿತಿ ರಚಿಸಿ ನಗರಸಭೆ ವ್ಯಾಪ್ತಿಯಲ್ಲಿ ಆಯುಕ್ತರು ಎಲ್ಲರ ಸಹಕಾರ ಪಡೆಯಬೇಕು ಎಂದು ಸೂಚಿಸಿದರು.
ನಗರ ಸ್ಥಳೀಯ ಸಂಸ್ಥೆಗಳು ಹೆಚ್ಚು ಅಪಾಯದ ಅಂಚಿನಲ್ಲಿರುವ ಪ್ರದೇಶಗಳಲ್ಲಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ ದಡಾರ, ರುಬೆಲ್ಲಾ ನಿರ್ಮೂಲನೆ ಬಗ್ಗೆ ದಿನಾಂಕಗಳ ಕುರಿತು ಪ್ರಚಾರ ನಡೆಸಬೇಕು. ಲಸಿಕೀಕರಣಕ್ಕಾಗಿ ಆರೋಗ್ಯ ಇಲಾಖೆಗೆ ಸಹಕರಿಸಲು ನಗರ ಸ್ಥಳೀಯ ಸಂಸ್ಥೆಗಳು ನೋಡಲ್ ವ್ಯಕ್ತಿಗಳನ್ನು ನಿಯೋಜಿಸಬೇಕು ಎಂದು ತಿಳಿಸಿದರು.
5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೀಕರಣವನ್ನು ಸರ್ಕಾರ ಹಮ್ಮಿಕೊಂಡಿದೆ. ದಡಾರ ಸಾಂಕ್ರಾಮಿಕ ರೋಗ. ದಡಾರ ಮತ್ತು ರುಬೆಲ್ಲಾ ವಿಭಿನ್ನ ವೈರಸ್‌ಗಳಿಂದ ಉಂಟಾಗುತ್ತವೆ. ಎರಡೂ ಕಾಯಿಲೆಗಳು ದದ್ದುಗಳಿಗೆ ಕಾರಣವಾಗಬಹುದು. ದಡಾರವು ಹೆಚ್ಚು ತೀವ್ರವಾಗಿರುತ್ತದೆ. ನ್ಯುಮೋನಿಯಾ, ಕಿವುಡುತನ ಮತ್ತು ಸಾವು ಸೇರಿದಂತೆ ಗಂಭೀರ ತೊಡಕುಗಳಿಗೆ ಕಾರಣವಾಗಬಹುದು ಎಂದು ಹೇಳಿದರು.
ದಡಾರ ಮತ್ತು ರುಬೆಲ್ಲಾ ಲಸಿಕೆಯನ್ನು ಸಾಮಾನ್ಯವಾಗಿ ಎರಡು ಡೋಸ್‌ಗಳಲ್ಲಿ ನೀಡಲಾಗುತ್ತದೆ. ಮೊದಲ ಡೋಸ್ ಸುಮಾರು 9-11 ತಿಂಗಳ ವಯಸ್ಸಿನಲ್ಲಿ ಮತ್ತು ಎರಡನೇ ಡೋಸ್ ಲಸಿಕೆಯನ್ನು 12 ತಿಂಗಳಿಂದ 5 ವರ್ಷ ವಯಸ್ಸಿನಲ್ಲಿ ಹಾಕಲಾಗುತ್ತದೆ. ಪೋಷಕರು ಈ ಬಗ್ಗೆ ನಿಗಾ ವಹಿಸಬೇಕು. ಹತ್ತಿರದಲ್ಲಿರುವ ಆರೋಗ್ಯ ಕೇಂದ್ರಗಳನ್ನು ಸಂಪರ್ಕಿಸಿ ನಿಗದಿತ ವೇಳೆಯಲ್ಲಿ ಲಸಿಕೆ ಹಾಕಿಸಲು ಸಹಕಾರ ನೀಡಬೇಕು ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಎನ್ ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಎಚ್. ಅಶ್ವಿನ್, ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ರಘು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್. ಮಹೇಶ್ ಕುಮಾರ್, ತಾಲೂಕು ವೈದ್ಯಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಲಸಿಕೆ; ಶಿಕ್ಷಕರು ಖಚಿತಪಡಿಸಿಕೊಳ್ಳಿ
ಅಲ್ಪ ಸಂಖ್ಯಾತರು ಹಾಗೂ ಹಿಂದುಳಿದ ವರ್ಗ ಕಲ್ಯಾಣಗಳ ಇಲಾಖೆಗಳು ಲಸಿಕೀಕರಣದ ಬಗ್ಗೆ ಜಾಗೃತಿ ಮೂಡಿಸಬೇಕು. ಎಲ್ಲಾ ಮಕ್ಕಳು ಮತ್ತು ಗರ್ಭಿಣಿಯರು ಪೂರ್ಣ ಪ್ರಮಾಣದ ಲಸಿಕೀಕರಣ ಪಡೆದಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಮಕ್ಕಳನ್ನು ಶಾಲೆಗಳಿಗೆ ದಾಖಲಿಸುವಾಗ ಲಸಿಕೆಯಾಗಿದೆ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳುವುದು ಶಾಲಾ ಶಿಕ್ಷಣ ಇಲಾಖೆಯಲ್ಲಿ ಕೆಲಸ ನಿರ್ವಹಿಸುವ ಶಿಕ್ಷಕರು ಹಾಗೂ ಸಿಬ್ಬಂದಿ ಕರ್ತವ್ಯ. ಈ ನಿಟ್ಟಿನಲ್ಲಿ ಮೇಲಧಿಕಾರಿಗಳು ನಿಗಾ ವಹಿಸಬೇಕು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.