ಚಿಕ್ಕಬಳ್ಳಾಪುರದಲ್ಲಿ ನಡೆದ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡಿದ್ದ ಸಮುದಾಯದ ಮುಖಂಡರು.
ಚಿಕ್ಕಬಳ್ಳಾಪುರ: ಮಹರ್ಷಿ ವಾಲ್ಮೀಕಿ ಅವರ ಜಯಂತಿಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಅ.7 ರಂದು ನಗರದ ಕನ್ನಡ ಭವನದಲ್ಲಿ ಸಂಭ್ರಮ ಸಡಗರ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ತಿಳಿಸಿದರು.
ಜಿಲ್ಲಾ ಪಂಚಾಯಿತಿಯ ಸರ್ ಎಂ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಮಂಗಳವಾರ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.
ಜಯಂತಿ ಅಂಗವಾಗಿ ಈ ತಿಂಗಳ ಕೊನೆಯ ವಾರದಲ್ಲಿ ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಇರುವ ಸರ್ಕಾರದ ಯೋಜನೆಗಳು ಮತ್ತು ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಲು ಕಾರ್ಯಾಗಾರ ಅಥವಾ ಕಾರ್ಯಕ್ರಮವನ್ನು ಆಯೋಜಿಸುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.
ಜಯಂತಿ ದಿನ ವಾಪಸಂದ್ರದ ಶ್ರೀರಂಗನಾಥ ಸ್ವಾಮಿ ದೇವಾಲಯದಿಂದ ಕನ್ನಡ ಭವನದವರೆಗೆ ಪಲ್ಲಕ್ಕಿ ಮತ್ತು ಸ್ತಬ್ದ ಚಿತ್ರಗಳು ಹಾಗೂ ಜಾನಪದ ಕಲಾ ತಂಡಗಳೊಂದಿಗೆ ಮೆರವಣಿಗೆ ನಡೆಯಲಿದೆ. ವೇದಿಕೆ ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮೀಕಿ ಅವರ ವಿಚಾರಗಳ ಕುರಿತು ಭಾಷಣ, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಸಮುದಾಯದ ಸಾಧಕರಿಗೆ ಸನ್ಮಾನ ಮಾಡಲು ತೀರ್ಮಾನಿಸಲಾಗಿದೆ. ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಮತ್ತು ಸಮುದಾಯದ ವಿವಿಧ ಇಲಾಖೆಗಳಿಂದ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಣೆ ಮಾಡಬೇಕು. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಕೈಗೊಳ್ಳುವ ಸರ್ಕಾರಿ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಸಹ ಅಂದು ಹಮ್ಮಿಕೊಳ್ಳಬೇಕು ಎಂದು ಸೂಚಿಸಿದರು.
ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ, ಶಾಲಾ ಕಾಲೇಜು ಸರ್ಕಾರಿ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ವೈ. ನವೀನ್ ಭಟ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಎನ್ ಭಾಸ್ಕರ್, ಡಿವೈಎಸ್‌ಪಿ ಶಿವ ಕುಮಾರ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರವೀಣ್ ಪಾಟೀಲ್, ತಹಶೀಲ್ದಾರ್ ರಶ್ಮಿ, ಜಾಗೃತಿ ಸಮಿತಿ ಜಿಲ್ಲಾ ಅಧ್ಯಕ್ಷ ಸುಬ್ಬರಾಯಪ್ಪ, ಪ್ರಧಾನ ಕಾರ್ಯದರ್ಶಿ ಗವಿರಾಯಪ್ಪ, ಕಾರ್ಯಾಧ್ಯಕ್ಷ ಕೆ.ಟಿ ನಾರಾಯಣಸ್ವಾಮಿ, ಕೆ. ಆವಲಕೊಂಡರಾಯಪ್ಪ, ಎಸ್.ಎನ್. ಅಶ್ವತ್ ನಾರಾಯಣ, ಪಿ. ಮುನಿವೆಂಕಟಸ್ವಾಮಿ, ಕೆ.ಎನ್.ಎಸ್ ನಾರಾಯಣಸ್ವಾಮಿ, ನಾಗರಾಜಪ್ಪ, ಸಮುದಾಯ ಮುಖಂಡರಾದ ಅರುಣ್, ರಘು, ಅಶ್ವತ್ಥನಾರಾಯಣ, ಪಿ ಮುನಿವೆಂಕಟಸ್ವಾಮಿ, ನಂಜುಂಡಯ್ಯ, ಮೂರ್ತಿ ಎಂ, ನರಸಿಂಹರಾಜು ಇತರರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.