ADVERTISEMENT

ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ಅಗತ್ಯ

ಬೀಡಿಗಾನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಫೌಂಡೇಶನ್ ವತಿಯಿಂದ ‘ಆರೋಗ್ಯ ಮತ್ತು ಪರಿಸರ ಜಾಗೃತಿ’ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 23 ಜುಲೈ 2019, 13:14 IST
Last Updated 23 ಜುಲೈ 2019, 13:14 IST
ಕಾರ್ಯಕ್ರಮದಲ್ಲಿ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.   

ಚಿಕ್ಕಬಳ್ಳಾಪುರ: ‘ಪ್ರತಿ ಮಗುವಿಗೆ ಗುಣಾತ್ಮಕ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಶಿಕ್ಷಣ ಫೌಂಡೇಶನ್ ಸಂಸ್ಥೆ ವತಿಯಿಂದ ಸುಮಾರು 50 ಶಾಲೆಗಳಲ್ಲಿ ಪ್ರೇರಣ 2.0 ಎಂಬ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಮಕ್ಕಳಲ್ಲಿ ಸಂವಹನ, ಸಹಯೋಗ, ಸೃಜನಶೀಲತೆ ಮತ್ತು ತರ್ಕಬದ್ಧ ಚಿಂತನೆಗಳನ್ನು ಬೆಳೆಸುವುದು ಈ ಕಾರ್ಯಕ್ರಮದ ಉದ್ದೇಶ’ ಎಂದು ಶಿಕ್ಷಣ ಫೌಂಡೇಶನ್ ಸಂಸ್ಥೆಯ ತಾಲ್ಲೂಕು ಸಂಯೋಜಕ ಎನ್.ವೈ.ಮುನಿರಾಜು ಅಭಿಪ್ರಾಯಪಟ್ಟರು.

ತಾಲ್ಲೂಕಿನ ಬೀಡಿಗಾನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಫೌಂಡೇಶನ್ ವತಿಯಿಂದ ಮಂಗಳವಾರ ಆಯೋಜಿಸಿದ್ದ ‘ಆರೋಗ್ಯ ಮತ್ತು ಪರಿಸರ ಜಾಗೃತಿ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಪ್ರತಿ ಮಗುವೂ ಗುಣಾತ್ಮಕ ಶಿಕ್ಷಣ ಪಡೆದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ. ವಿದ್ಯಾರ್ಥಿಗಳು ಇಂಗ್ಲೀಷ್ ಭಾಷೆಯನ್ನು ಭಯವಿಲ್ಲದೆ ಸುಲಭವಾಗಿ ಕಲಿಯಲು ತಾಲ್ಲೂಕಿನ 6 ಶಾಲೆಗಳಲ್ಲಿ ಇಂಗ್ಲೀಷ್ ಭಾಷೆಗೆ ಸಂಬಂಧಿಸಿದ ಕಾರ್ಯಕ್ರಮ ಏರ್ಪಡಿಸಲಾಗುತ್ತಿದೆ. ಮನರಂಜನೆಯ ಮೂಲಕ ಮಕ್ಕಳಿಗೆ ಇಂಗ್ಲೀಷ್ ಭಾಷೆಯಲ್ಲಿ ಆಸಕ್ತಿ ಮೂಡಿಸಲಾಗುವುದು’ ಎಂದು ಹೇಳಿದರು.

ADVERTISEMENT

ತಾಲ್ಲೂಕು ವೈದ್ಯಾಧಿಕಾರಿ ಡಾ.ಗೌತಮಿ ಮಾತನಾಡಿ, ‘ಆರೋಗ್ಯವೇ ಭಾಗ್ಯ ಎಂಬುದು ಅರಿತು ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತಲಿನ ವಾತಾವರಣ ಸ್ವಚ್ಛವಾಗಿಟ್ಟುಕೊಳ್ಳಲು ಆದ್ಯತೆ ನೀಡಬೇಕು. ಮನೆ ಪರಿಸರದಲ್ಲಿ ನೀರು ನಿಲ್ಲದಂತೆ ಜಾಗರೂಕತೆ ವಹಿಸಬೇಕು. ಈ ಕುರಿತು ಮಕ್ಕಳು ಜನರಲ್ಲಿ ಅರಿವು ಮೂಡಿಸಬೇಕು’ ಎಂದು ಹೇಳಿದರು.

‘ಮಳೆಗಾಲದಲ್ಲಿ ಡೆಂಗಿ ಜ್ವರದ ಬಗ್ಗೆ ಸಾರ್ವಜನಿಕರು ಜಾಗೃತಿ ವಹಿಸಬೇಕು. ಜ್ವರ, ತಲೆ ನೋವು, ಕೈಕಾಲು ನೋವು, ಚಳಿ ಬಂದಾಗ ತಕ್ಷಣ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ಮಾಡಿಸಿ, ಸೂಕ್ತ ಚಿಕಿತ್ಸೆ ಪಡೆಯಬೇಕು. ಮಕ್ಕಳು ಪೌಷ್ಟಿಕ ಆಹಾರ, ಮೊಟ್ಟೆ, ಹಾಲು, ತರಕಾರಿ, ಸೊಪ್ಪು, ಕಾಳುಗಳನ್ನು ಹೆಚ್ಚಾಗಿ ಸೇವಿಸಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು’ ಎಂದು ತಿಳಿಸಿದರು.

ಬೀಡಗಾನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರಾಮಸ್ವಾಮಿ, ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಗೋವಿಂದಪ್ಪ, ಗ್ರಾಮ ಪಂಚಾಯಿತಿ ಸದಸ್ಯೆ ಪುಷ್ಪಾ, ಶಾಲೆಯ ಮುಖ್ಯ ಶಿಕ್ಷಕ ಮಂಜುನಾಥ್, ಸಹ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆ ಸುಜಾತಾ, ಶಾಲೆಯ ಮರ್ಗದರ್ಶಕರಾದ ನಾಗೇಶ್ ಮತ್ತು ಗಂಗರಾಜು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.