ADVERTISEMENT

ಮತದಾರರ ದಿನಾಚರಣೆ: ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2020, 7:52 IST
Last Updated 15 ಡಿಸೆಂಬರ್ 2020, 7:52 IST
ಶಿಡ್ಲಘಟ್ಟದ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಚಟುವಟಿಕೆ ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಇಒ ಚಂದ್ರಕಾಂತ್ ಮಾತನಾಡಿದರು
ಶಿಡ್ಲಘಟ್ಟದ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಚಟುವಟಿಕೆ ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಇಒ ಚಂದ್ರಕಾಂತ್ ಮಾತನಾಡಿದರು   

ಶಿಡ್ಲಘಟ್ಟ: ಯುವ ಮತದಾರರನ್ನು ಮತದಾರರ ಪಟ್ಟಿಗೆ ನೋಂದಾಯಿಸುವುದು, ಅವರು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಆಯೀಜಿಸಲಾಗುತ್ತಿದೆ ಎಂದು ತಾಲ್ಲೂಕು ಪಂಚಾಯಿತಿ ಇಒ ಚಂದ್ರಕಾಂತ್ ತಿಳಿಸಿದರು.

ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ತಾಲ್ಲೂಕು ಪಂಚಾಯಿತಿ ಹಾಗೂ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ ತಾಲ್ಲೂಕುಮಟ್ಟದ ರಾಷ್ಟ್ರೀಯ ಮತದಾರರ ದಿನಾಚರಣೆಗೆ ಸಂಬಂಧಿಸಿದಂತೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಚಟುವಟಿಕೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಚುನಾವಣೆ ಬಗ್ಗೆ ತಿಳಿಸುತ್ತಾ ಭವಿಷ್ಯದಲ್ಲಿ ದೇಶವನ್ನು ಮುನ್ನಡೆಸುವ ಅವರನ್ನು ಮಾನಸಿಕವಾಗಿ ಸಿದ್ಧಗೊಳಿಸಲಾಗುತ್ತಿದೆ ಎಂದರು.

ADVERTISEMENT

ಪ್ರಜಾಪ್ರಭುತ್ವದ ಬುನಾದಿಯಾದ ಚುನಾವಣಾ ಪ್ರಕ್ರಿಯೆಯಲ್ಲಿ ನಾವೆಲ್ಲ ಪಾಲ್ಗೊಂಡಾಗ ಮಾತ್ರ ವ್ಯವಸ್ಥೆಯನ್ನು ಪ್ರಶ್ನಿಸುವಂತಹ ಹಕ್ಕು ನಮಗೆ ಲಭಿಸುತ್ತದೆ. ಆದ್ದರಿಂದ ವ್ಯವಸ್ಥೆಯನ್ನು ದೂರುವ ಬದಲು ನಮ್ಮಲ್ಲಿ ಮೊದಲು ಬದಲಾವಣೆ ತಂದುಕೊಂಡು ನಮ್ಮ ಕರ್ತವ್ಯ ನಿರ್ವಹಿಸಬೇಕು ಎಂದರು.

ಇಸಿಒ ಭಾಸ್ಕರ ಗೌಡ ಮಾತನಾಡಿ, ರಾಷ್ಟ್ರದ ಪ್ರಗತಿಯು ಯುವಪೀಳಿಗೆಯ ಕೈಯಲ್ಲಿದೆ. ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಮತದಾನ ಮಾಡಿ, ಒಳ್ಳೆಯ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು. ಭಾರತದ ಸಂವಿಧಾನದ ಪ್ರಕಾರ ಚುನಾವಣಾ ಆಯೋಗವು 18 ವರ್ಷ ಮೇಲ್ಪಟ್ಟವರಿಗೆ ಮತದಾನದ ಅವಕಾಶ ನೀಡಿದೆ. ವಿದ್ಯಾರ್ಥಿಗಳು ತಮ್ಮ ಕುಟುಂಬ, ನೆರೆಹೊರೆ, ಹಳ್ಳಿಗಳಲ್ಲಿ ಈ ಬಗ್ಗೆ ತಿಳಿಹೇಳಬೇಕು ಎಂದರು.

ಮುಖ್ಯಶಿಕ್ಷಕ ರವಿಂದ್ರ, ತರಬೇತುದಾರ ಶಂಕರಪ್ಪ, ಶಿಕ್ಷಕರಾದ ಪ್ರಭಾಕರ್, ಶಂಕರಪ್ಪ, ರವೀಂದ್ರ, ನಾಗೇಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.