ADVERTISEMENT

ಜನರಿಗೆ ಸೌಲಭ್ಯ ಕಲ್ಪಿಸಿ: ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಲಹೆ

ಗ್ರಾಮ ಸ್ವರಾಜ್ಯ ಸಮಾವೇಶ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2020, 1:58 IST
Last Updated 30 ನವೆಂಬರ್ 2020, 1:58 IST
ಬಾಗೇಪಲ್ಲಿ ತಾಲ್ಲೂಕಿನ ಕೊಂಡಂವಾರಿಪಲ್ಲಿ ಗ್ರಾಮದಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ನಡೆದ ಗ್ರಾಮ ಸ್ವರಾಜ್ಯ ಸಮಾವೇಶವನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಉದ್ಘಾಟಿಸಿದರು
ಬಾಗೇಪಲ್ಲಿ ತಾಲ್ಲೂಕಿನ ಕೊಂಡಂವಾರಿಪಲ್ಲಿ ಗ್ರಾಮದಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ನಡೆದ ಗ್ರಾಮ ಸ್ವರಾಜ್ಯ ಸಮಾವೇಶವನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಉದ್ಘಾಟಿಸಿದರು   

ಬಾಗೇಪಲ್ಲಿ: ‘ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸಿ ಮುಂಬರುವ ಗ್ರಾಮ, ತಾಲ್ಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕರೆ ನೀಡಿದರು.

ತಾಲ್ಲೂಕಿನ ಕೊಂಡಂವಾರಿಪಲ್ಲಿ ಗ್ರಾಮದಲ್ಲಿ ಭಾನುವಾರ ಬಿಜೆಪಿ ಜಿಲ್ಲಾ ಘಟಕದಿಂದ ಹಮ್ಮಿಕೊಂಡಿದ್ದ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿದ್ದಾರೆ. ದೇಶದ ಪ್ರತಿ ಗ್ರಾಮ ಪಂಚಾಯಿತಿಗೂ ಕೇಂದ್ರ ಸರ್ಕಾರ ₹ 1 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದೆ. ಗ್ರಾಮಗಳಲ್ಲಿ ಗ್ರಾಮಸಭೆಗಳು ಮಾಡುವುದರ ಮೂಲಕ ಬಿಜೆಪಿ ಸಂಘಟಿಸಬೇಕು. ಜನರ ಸಮಸ್ಯೆ ಬಗ್ಗೆ ಮುಖಂಡರು, ಕಾರ್ಯಕರ್ತರು ಸ್ಪಂದಿಸಬೇಕು. ಮುಂಬರುವ ಚುನಾವಣೆಗಳಲ್ಲಿ ಪಕ್ಷ ಆಡಳಿತದ ಚುಕ್ಕಾಣಿ ಹಿಡಿಯಬೇಕು ಎಂದು ತಿಳಿಸಿದರು.

ADVERTISEMENT

ಮುಂದಿನ ದಿನಗಳಲ್ಲಿ ಬಯಲುಸೀಮೆ ಪ್ರದೇಶಗಳಿಗೆ ಕುಡಿಯುವ ನೀರು, ಕೈಗಾರಿಕಾ ಪ್ರದೇಶ ಅನುಷ್ಠಾನಗೊಳಿಸಲು ಸರ್ಕಾರ ಬದ್ಧವಿದೆ. ಕ್ಷೇತ್ರದಲ್ಲಿ ಬಿಜೆಪಿ ಪರ್ವ ಆರಂಭವಾಗಿದೆ ಎಂದರು.

ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ, ವ್ಯಕ್ತಿಗಳಿಂತ ಪಕ್ಷ ದೊಡ್ಡದು. 15ನೇ ಹಣಕಾಸು ಯೋಜನೆಯಡಿ ಸೌಲಭ್ಯಗಳು ಜಾರಿಯಾಗಿರುವ ಬಗ್ಗೆ ಜನರಿಗೆ ಜಾಗೃತಿ ಮೂಡಿಸಬೇಕು. ಜನರ ಮೂಲ ಸಮಸ್ಯೆಗಳ ಬಗ್ಗೆ ಮುಖಂಡರು, ಕಾರ್ಯಕರ್ತರು ಅಧ್ಯಯನ ಮಾಡಿ ಸ್ಪಂದಿಸಬೇಕು ಎಂದು ತಿಳಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಮಲಿಂಗಪ್ಪ ಮಾತನಾಡಿ, ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳ ಎಲ್ಲಾ ತಾಲ್ಲೂಕು, ಹೋಬಳಿ, ಗ್ರಾಮ ಹಾಗೂ ಬೂತ್ ಮಟ್ಟದಲ್ಲಿ ಸಭೆ ನಡೆಸಲಾಗುವುದು. ಆ ಮೂಲಕ ಪಕ್ಷ ಸಂಘಟಿಸಲಾಗುವುದು. ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿ‌ಗಳನ್ನು ಗೆಲ್ಲಿಸಲು ಮುಖಂಡರು, ಕಾರ್ಯಕರ್ತರು ಶ್ರಮಿಸಬೇಕು ಎಂದರು.‌

ಸಮಾವೇಶದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಶೋಭಾ ಕರಂದ್ಲಾಜೆ, ಕೋಲಾರ ಸಂಸದ ಮುನಿಸ್ವಾಮಿ, ಬಿಜೆಪಿ ಮಹಿಳಾ ಘಟಕದ ರಾಜ್ಯ ಅಧ್ಯಕ್ಷೆ ಗೀತಾ ವಿವೇಕಾನಂದರೆಡ್ಡಿ, ರಾಜ್ಯ ಕಾರ್ಯದರ್ಶಿಗಳಾದ ಮಹೇಶ್ ಟೆಂಗಿನಕಾಯಿ, ಕೇಶವಪ್ರಸಾದ್, ರಾಜ್ಯ ಉಪಾಧ್ಯಕ್ಷ ಶಂಕರಪ್ಪ, ವಿಭಾಗೀಯ ಪ್ರಭಾರಿ ಕಾಂತರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮರಳುಕುಂಟೆ ಕೃಷ್ಣಮೂರ್ತಿ, ಜಿಲ್ಲಾ ಪ್ರಭಾರಿ ಕೃಷ್ಣಾರೆಡ್ಡಿ, ಜಿಲ್ಲಾ ಎಸ್‌ಟಿ ಮೋರ್ಚಾ ಅಧ್ಯಕ್ಷ ವೆಂಕಟೇಶ್, ಮಂಡಲ ಅಧ್ಯಕ್ಷ ಆರ್. ಪ್ರತಾಪ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.