ಚಿಂತಾಮಣಿ: ನಗರದ ಹೊರವಲಯದ ಮಾಡಿಕೆರೆ ಕ್ರಾಸ್‌ನಲ್ಲಿ ದ್ವಿಚಕ್ರವಾಹನಕ್ಕೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮಾಡಿಕೆರೆ ಗ್ರಾಮದ ಜಯಮ್ಮ (50) ಮೃತಪಟ್ಟ ಮಹಿಳೆ. ಆವರ ಮಗ ಬೈಕ್ ಸವಾರ ಶ್ರೀನಿವಾಸ್‌ಗೆ ಸಣ್ಣಪುಟ್ದ ಗಾಯಗಳಾಗಿವೆ.
ತಾಯಿ ಮತ್ತು ಮಗ ಬೈಕ್‌ನಲ್ಲಿ ನಗರದಲ್ಲಿರುವ ಶ್ರೀನಿವಾಸ್ ಅವರ ಚಿಕ್ಕಮ್ಮನ ಮನೆಗೆ ಹೋಗಿ ವಾಪಸ್ ಬರುತ್ತಿದ್ದಾಗ ಮಾಡಿಕೆರೆ ಕ್ರಾಸ್‌ನಲ್ಲಿ ಬೆಂಗಳೂರು ಕಡೆಯಿಂದ ಅತಿವೇಗವಾಗಿ ಬಂದ ಕಾರು ದ್ವಿಚಕ್ರವಾಹನಕ್ಕೆ ಡಿಕ್ಕಿಯಾಯಿತು. ಬೈಕ್‌ನಲ್ಲಿದ್ದವರು ಕೆಳಗೆ ಬಿದ್ದು ಗಾಯಗೊಂಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಜಯಮ್ಮ ಅವರಿಗೆ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಶ್ರೀನಿವಾಸ್ ಗ್ರಾಮಾಂತರ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಸೇಂಟ್‌ಜಾನ್ಸ್ ಆಸ್ಪತ್ರೆಗೆ ನಂತರ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ತಾಯಿ ಮೃತಪಟ್ಟರು. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಬೈಕ್‌ಗೆ ಡಿಕ್ಕಿ ಹೊಡೆದು ಕಾರಿನ ಚಾಲಕನ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.