ADVERTISEMENT

ಮಹಿಳೆಯರಿಗೆ ಸ್ವರಕ್ಷಣೆ ತರಬೇತಿ ಅಗತ್ಯ

ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ನಾಗಾಂಬಿಕಾ ದೇವಿ ಸಲಹೆ

​ಪ್ರಜಾವಾಣಿ ವಾರ್ತೆ
Published 24 ಜನವರಿ 2020, 15:56 IST
Last Updated 24 ಜನವರಿ 2020, 15:56 IST
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ನಾಗಾಂಬಿಕಾ ದೇವಿ ಮಾತನಾಡಿದರು.
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ನಾಗಾಂಬಿಕಾ ದೇವಿ ಮಾತನಾಡಿದರು.   

ಚಿಕ್ಕಬಳ್ಳಾಪುರ: ‘ಜಿಲ್ಲೆಯಲ್ಲಿ ಈಗಾಗಲೇ ಮಹಿಳೆಯರ ರಕ್ಷಣೆಗಾಗಿ ಒಬ್ಬವ್ವ ಪಡೆ ರಚನೆ ಮಾಡಲಾಗಿದೆ. ಈ ಪಡೆಯಲ್ಲಿ ನೀಡುವ ಸ್ವರಕ್ಷಣೆ ತರಬೇತಿಯನ್ನು ಪ್ರತಿಯೊಬ್ಬ ಮಹಿಳೆಯರು ಪಡೆದುಕೊಂಡು ಆತ್ಮ ರಕ್ಷಣೆ ಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಅರಿವು ಮೂಡಿಸಿ’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ನಾಗಾಂಬಿಕಾ ದೇವಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ದಾಪುಗಾಲು ಇಟ್ಟಿರುವುದು ಶ್ಲಾಘನೀಯ. ಇವತ್ತು ಪುರುಷರಿಗೆ ಸರಿಸಮಾನಾಗಿ ದುಡಿಯುವ ಮಹಿಳೆಗೆ ಸಂಕಷ್ಟದ ಸಮಯದಲ್ಲಿ ತನ್ನನ್ನು ತಾನು ರಕ್ಷಿಸಿಕೊಳ್ಳುವ ಕೌಶಲದ ಅಗತ್ಯವಿದೆ. ಆ ನಿಟ್ಟಿನಲ್ಲಿ ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಆತ್ಮ ರಕ್ಷಣೆ ಮಾಡಿಕೊಳ್ಳುವ ಕುರಿತು ತರಬೇತಿ ಪಡೆದುಕೊಳ್ಳುವ ಅಗತ್ಯವಿದೆ’ ಎಂದು ತಿಳಿಸಿದರು.

ADVERTISEMENT

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಜಿಲ್ಲೆಯಲ್ಲಿ ಸದ್ಯ 72 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. 17 ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ಹಾಗೂ 55 ಹಳ್ಳಿಗಳಿಗೆ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಿದರು.

ಈ ವೇಳೆ ಮಾತನಾಡಿದ ನಾಗಾಂಬಿಕಾ ದೇವಿ, ‘ಫೆಬ್ರವರಿ ಹಾಗೂ ಮಾರ್ಚ್ ತಿಂಗಳಿನಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಜಾಸ್ತಿಯಾಗುವ ಸಾಧ್ಯತೆ ಇದೆ. ಆದ್ದರಿಂದ ಈಗಿನಿಂದಲೇ ಕುಡಿಯುವ ನೀರನ್ನು ಸಮರ್ಪಕವಾಗಿ ಸರಬರಾಜು ಮಾಡುವುದಕ್ಕೆ ಕ್ರಮ ವಹಿಸಬೇಕು. ಕುಡಿಯುವ ನೀರಿಗೆ ಎಲ್ಲಿಯೂ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಈ ವಿಚಾರದಲ್ಲಿ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು’ ಎಂದು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ಮಾತನಾಡಿ, ‘ಜಿಲ್ಲೆಯಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆ ಅಡಿ 68 ಸಮುದಾಯ ಶೌಚಾಲಯಗಳನ್ನು ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ. ಆ ಪೈಕಿ 17 ಶೌಚಾಲಯಗಳು ಪೂರ್ಣಗೊಂಡಿವೆ. ಉಳಿದ ಶೌಚಾಲಯಗಳ ಕಾಮಗಾರಿ ಪ್ರಗತಿಯಲ್ಲಿವೆ. ಮುಂದಿನ ದಿನಗಳಲ್ಲಿ ಪೂರ್ಣಗೊಳಿಸಲಾಗುತ್ತದೆ’ ಎಂದು ಹೇಳಿದರು.

‘ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ವಸತಿ ನಿವೇಶನಗಳಿಗೆ ಅನುದಾನ ಬಿಡುಗಡೆಯಾಗುತ್ತಿದೆ. ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಬಿ.ಆರ್.ಅಂಬೇಡ್ಕರ್ ವಸತಿ ಯೋಜನೆಗಳಿಗೆ ಅನುದಾನವು ಬಿಡುಗಡೆಯಾಗುತ್ತಿಲ್ಲ. ಈ ಕುರಿತು ಸರ್ಕಾರಕ್ಕೆ ಪತ್ರ ಬರೆಯಲಾಗಿದೆ’ ಎಂದು ತಿಳಿಸಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕಿ ರೂಪಾ ಮಾತನಾಡಿ, ‘ಈ ಬಾರಿ ತೊಗರಿ ಬೆಳೆಯನ್ನು ಅತ್ಯಧಿಕವಾಗಿ ಬೆಳೆದ ಗೌರಿಬಿದನೂರು ತಾಲ್ಲೂಕಿನ ರೈತರು ರಾಜ್ಯದಲ್ಲಿಯೇ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಪಡೆದುಕೊಂಡಿರುವುದು ಶ್ಲಾಘನೀಯ ವಿಚಾರ’ ಎಂದು ಮಾಹಿತಿ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎನ್.ನೋಮೇಶ್‌ ಕುಮಾರ್ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.