ಚಿಕ್ಕಬಳ್ಳಾಪುರ: ಚಲನಚಿತ್ರಗಳಲ್ಲಿ ನಟರು ಮತ್ತು ಕಲಾವಿದರು ಅಭಿನಯಿಸುವ ತಂಬಾಕು ಸೇವನೆ ದೃಶ್ಯ ನೋಡಿ ಆಕರ್ಷಣೆ ಮತ್ತು ಕುತೂಹಲಕ್ಕೆ ಒಳಗಾಗಿ ಯುವಜನರು ತಂಬಾಕು ಉತ್ಪನ್ನಕ್ಕೆ ದಾಸರಾಗುತ್ತಿದ್ದಾರೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಶಿಲ್ಪಾ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಆಶ್ರಯದಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ‘ವಿಶ್ವ ತಂಬಾಕು ರಹಿತ ದಿನಾಚರಣೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ನಿರ್ಮಾಪಕರು ಸಿನಿಮಾಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆಯ ದೃಶ್ಯಗಳನ್ನು ಕಡಿಮೆ ಸಮಯದಲ್ಲಿ ತೋರಿಸಿ ಸಾಮಾಜಿಕ ಹಾಗೂ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳನ್ನು ಹೆಚ್ಚು ಸಮಯ ಪರಿಣಾಮಕಾರಿಯಾಗಿ ತೋರಿಸಿ ಜಾಗೃತಿ ಮೂಡಿಸಬೇಕು. ಆ ಮೂಲಕ ಸಾಮಾಜಿಕ ಜವಾಬ್ದಾರಿ ತೋರಬೇಕು ಎಂದರು.
ವಿಶ್ವ ‘ತಂಬಾಕು ರಹಿತ ದಿನ’ವು ತಂಬಾಕು ಸೇವನೆಯು ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಉಂಟುಮಾಡುವ ನಕಾರಾತ್ಮಕ ಪರಿಣಾಮಗಳನ್ನು ಯುವ ಸಮುದಾಯಕ್ಕೆ ಮನಮುಟ್ಟುವಂತೆ ತಿಳಿಸಿಕೊಡಲು ಸಹಕಾರಿಯಾಗಿದೆ. ತಂಬಾಕು ಸೇವನೆಯಿಂದ ಯುವ ಪೀಳಿಗೆಯನ್ನು ರಕ್ಷಿಸುವುದು ಹೇಗೆ ಎಂಬ ಬಗ್ಗೆ ಯೋಜನೆಗಳನ್ನು ರೂಪಿಸುವುದರ ಜೊತೆಗೆ ಅವರಲ್ಲಿ ಈ ಬಗ್ಗೆ ಅರಿವು ಮೂಡಿಸಬೇಕು ಎಂದರು.
ತಂಬಾಕು ನಿಯಂತ್ರಣದ ವಿಚಾರದಲ್ಲಿ ನೂತನ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಸಮಾಜ ಒಟ್ಟಾಗಿ ಪಣ ತೊಡಬೇಕು. ಈ ನಿಟ್ಟಿನಲ್ಲಿ ಅರಿವು ಮೂಡಿಸಲು ಪ್ರತಿ ವರ್ಷ ಮೇ 31 ರಂದು ವಿಶ್ವ ತಂಬಾಕು ರಹಿತ ದಿನ ಆಚರಿಸಲಾಗುತ್ತಿದೆ ಎಂದರು.
ಶಾಲಾ, ಕಾಲೇಜು ವಿದ್ಯಾರ್ಥಿಗಳನ್ನು ಹಾಗೂ ಹದಿಹರೆಯದವರನ್ನು ತಂಬಾಕು ಬಳಕೆಯ ಅಪಾಯದಿಂದ ದೂರವಿರಿಸುವುದು ಅತಿ ಮುಖ್ಯ. ಈ ಬಗ್ಗೆ ಅರಿವು ಮೂಡಿಸಿ ಆರೋಗ್ಯ ಶಿಕ್ಷಣ ನೀಡಬೇಕು. ದೇಶದಲ್ಲಿ ಅತಿ ಹೆಚ್ಚು ತಂಬಾಕನ್ನು ಬೆಳೆಯುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಹೇಳಿದರು.
ಇತ್ತೀಚಿನ ದಿನಮಾನಗಳಲ್ಲಿ ಯುವಪೀಳಿಗೆಯು ತಂಬಾಕು ವ್ಯಸನಕ್ಕೆ ಬಲಿ ಆಗುತ್ತಿರುವುದು ಆತಂಕಕಾರಿ. ಸಾರ್ವಜನಿಕರು, ವಿದ್ಯಾರ್ಥಿ ಯುವಜನರು ಹಾಗೂ ಮಕ್ಕಳನ್ನು ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಬಳಕೆಯಿಂದ ದೂರ ಇರಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಮಾತನಾಡಿ, ತಂಬಾಕು ಸೇವನೆಯಿಂದ ದೇಶದಲ್ಲಿ ವರ್ಷಕ್ಕೆ 8 ದಶಲಕ್ಷಕ್ಕೂ ಹೆಚ್ಚು ಜನರು ಮೃತಪಡುತ್ತಿದ್ದಾರೆ ಎಂದರು.
ಈ ಪೈಕಿ 7 ಮಿಲಿಯನ್‌ಗಿಂತಲೂ ಹೆಚ್ಚು ಸಾವುಗಳು ನೇರ ತಂಬಾಕು ಸೇವನೆಯಿಂದ ಉಂಟಾಗುತ್ತಿವೆ ಎಂಬುದು ಕಳವಳಕಾರಿ. ಅದೇ ಸಮಯದಲ್ಲಿ, ಮಿಲಿಯನ್‌ಗಳಷ್ಟು ಜನ ಧೂಮಪಾನಿಗಳಲ್ಲದವರು ನಿಷ್ಕ್ರಿಯ ಧೂಮಪಾನಕ್ಕೆ ಒಳಗಾಗುತ್ತಿದ್ದಾರೆ ಎಂದರು.
ತಂಬಾಕು ಉತ್ಪನ್ನಗಳಲ್ಲಿ ಕ್ಯಾನ್ಸರ್ ಉಂಟುಮಾಡುವ ಅಪಾಯಕಾರಿ ರಾಸಾಯನಿಕಗಳಿವೆ. ಬಾಯಿ ಕ್ಯಾನ್ಸರ್, ಶ್ವಾಸಕೋಶದ ಕ್ಯಾನ್ಸರ್, ಧ್ವನಿಪೆಟ್ಟಿಗೆ ಕ್ಯಾನ್ಸರ್ ಹಾಗೂ ಅನ್ನನಾಳ ಕ್ಯಾನ್ಸರ್ ನಂತಹ ಮಾರಣಾಂತಿಕ ಕಾಯಿಲೆಗಳಿಗೆ ಹೆಚ್ಚಾಗಿ ತುತ್ತಾಗುತ್ತಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ಕಾನೂನುಬಾಹಿರ ಎಂದು ಹೇಳಿದರು.
ಆರೋಗ್ಯಕ್ಕೆ ಹಾನಿ ಎಂಬುದು ತಿಳಿದಿದ್ದರೂ ಸೇವನೆ ಮಾಡುವವರ ಸಂಖ್ಯೆ ಕಡಿಮೆ ಆಗುತ್ತಿಲ್ಲ. ಅದಕ್ಕಾಗಿಯೇ ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿ ವರ್ಷ ವಿಶ್ವ ತಂಬಾಕು ನಿಷೇಧ ದಿನ ಅಥವಾ ವಿಶ್ವ ತಂಬಾಕು ರಹಿತ ದಿನ ಆಚರಿಸಲಾಗುತ್ತದೆ ಎಂದು ತಿಳಿಸಿದರು.
ಈ ವೇಳೆ ನಂದಿ ವೈದ್ಯಕೀಯ ವಿಜ್ಞಾನಗಳ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಿಂದ ತಂಬಾಕು ನಿಯಂತ್ರಣದ ಕಿರು ನಾಟಕ ಪ್ರದರ್ಶಿಸಿ ಅರಿವು ಮೂಡಿಸಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್ ಎಸ್ ಮಹೇಶ್ ಕುಮಾರ್, ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿ ಡಾ. ಕೃಷ್ಣಪ್ರಸಾದ್, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಎಂ ವೆಂಕಟೇಶ್, ಜಿಲ್ಲಾ ಕ್ಷಯ ರೋಗ ನಿಯಂತ್ರಣ ಅಧಿಕಾರಿ ಡಿ.ಟಿ ಉಮಾ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಕೆ.ಮಂಜುಳಾ, ಜಿಲ್ಲಾಸ್ಪತ್ರೆಯ ಮನೋವೈದ್ಯ ಡಿ.ಎನ್ ಕಿಶೋರ್, ಕಾಲೇಜಿನ ಪ್ರಾಂಶುಪಾಲರಾದ ಡಾ. ವಸುಂದರ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಬೋಧಕ, ಬೋಧಕೇತರ ಸಿಬ್ಬಂದಿ ಪಾಲ್ಗೊಂಡಿದ್ದರು.
ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟಬಳಕೆಯನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ ಹಾಗೂ ಮೊಬೈಲ್ ಮೂಲಕ ಕಾನೂನು ಬಾಹಿರ ತಂಬಾಕು ಉತ್ಪನ್ನಗಳ ಮಾರಾಟದ ಮೇಲೆ ಪ್ರಕರಣ ದಾಖಲಿಸಲು ಆಂಡ್ರಾಯ್ಡ್ ಅಪ್ಲಿಕೇಷನ್ ಪರಿಚಯಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.