ADVERTISEMENT

ಉದ್ಯೋಗ ಸೃಷ್ಟಿ; ಭರವಸೆ ಈಡೇರಿಸದ ಬಿಜೆಪಿ- – ಟೀಕೆ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2017, 6:05 IST
Last Updated 25 ಅಕ್ಟೋಬರ್ 2017, 6:05 IST
ಚಿಕ್ಕಮಗಳೂರಿನಲ್ಲಿ ಯುವಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ವಿ.ಶಿವಕುಮಾರ್, ಮುಖಂಡರಾದ ಸಿ.ಎನ್.ಅಕ್ಮಲ್ ಇದ್ದಾರೆ.
ಚಿಕ್ಕಮಗಳೂರಿನಲ್ಲಿ ಯುವಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ವಿ.ಶಿವಕುಮಾರ್, ಮುಖಂಡರಾದ ಸಿ.ಎನ್.ಅಕ್ಮಲ್ ಇದ್ದಾರೆ.   

ಚಿಕ್ಕಮಗಳೂರು: ಚುನಾವಣೆ ವೇಳೆ ನೀಡಿದ್ದ ಆಶ್ವಾಸನೆಯಂತೆ, ಉದ್ಯೋಗ ಸೃಷ್ಟಿಸಲು ಕೇಂದ್ರ ಸರ್ಕಾರವು ವಿಫಲವಾಗಿದೆ ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

ನಗರದ ಆಜಾದ್ ಪಾರ್ಕ್‌ವೃತ್ತದ ಸಮೀಪದ ಪ್ರಧಾನ ಅಂಚೆ ಕಚೇರಿ ಬಳಿ ಜಮಾಯಿಸಿದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ವಿ.ಶಿವಕುಮಾರ್ ಮಾತನಾಡಿ, ‘ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸಲಾಗುವುದು ಎಂದು ಬಿಜೆಪಿ ಭರವಸೆ ನೀಡಿತ್ತು.

ಕೇಂದ್ರದಲ್ಲಿ ಬಿಜೆಪಿ ಆಡಳಿತ ಚುಕ್ಕಾಣಿ ಹಿಡಿದು ಮೂರು ವರ್ಷಗಳಾಗಿವೆ. ಮೂರು ವರ್ಷಕ್ಕೆ ಆರು ಕೋಟಿ ಉದ್ಯೋಗ ಸೃಷ್ಟಿಸಬೇಕಿತ್ತು. ಈವರೆಗೆ ಶೇ 10ರಷ್ಟು ಮಾತ್ರ ಉದ್ಯೋಗ ಒದಗಿಸಲಾಗಿದೆ. ನಿರುದ್ಯೋಗ ಸಮಸ್ಯೆ ಪರಿಹರಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ’ ಎಂದು ದೂರಿದರು.

ADVERTISEMENT

‘ಜಿಎಸ್‌ಟಿ ತೆರಿಗೆ ಜಾರಿಗೊಳಿಸಿ ಜನಸಾಮಾನ್ಯರಿಗೆ ತೊಂದರೆ ಮಾಡಿದೆ. ಪ್ರಧಾನಿ ಮೋದಿ ವಿದೇಶ ಪ್ರಯಾಣಕ್ಕಾಗಿ ಜನರ ತೆರಿಗೆ ಹಣ ವ್ಯಯವಾಗುತ್ತಿದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ದೇಶದಲ್ಲಿ ಕೋಮುವಾದ ಹೆಚ್ಚಾಗುತ್ತಿದೆ’ ಎಂದು ಆಪಾದಿಸಿದರು.

ಯುವ ಕಾಂಗ್ರೆಸ್ ಮುಖಂಡ ರಾಹೀಲ್ ಷರೀಫ್ ಮಾತನಾಡಿ, ‘ಗರಿಷ್ಠ ಮುಖಬೆಲೆಯ ನೋಟು ರದ್ಧತಿ, ಜಿಎಸ್‌ಟಿ ತೆರಿಗೆಯಂತಹ ನೀತಿಯಿಂದ ಮಧ್ಯಮ ವರ್ಗದ ಜನರು ಕಂಗಾಲಾಗಿದ್ದಾರೆ. ದೇಶದ ಆರ್ಥಿಕ ಅಭಿವೃದ್ಧಿ ಕುಂಠಿತಗೊಂಡಿದೆ’ ಎಂದರು. ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಪುಷ್ಪಲತಾ, ಜಿಲ್ಲಾ ಯುವ ಕಾಂಗ್ರೆಸ್ ಮುಖಂಡರಾದ ಅಬ್ದುಲ್ ಅಜೀಜ್, ಜೆ.ವಿನಾಯಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.