ADVERTISEMENT

ಒತ್ತಡಕ್ಕೆ ಮಣಿಯದಿರಿ: ಪಿಡಿಒಗಳಿಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2012, 8:05 IST
Last Updated 7 ಫೆಬ್ರುವರಿ 2012, 8:05 IST

ತರೀಕೆರೆ: ತಾಲ್ಲೂಕಿನ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಒತ್ತಡಕ್ಕೆ ಮಣಿಯದೆ ಕಾನೂನು ಮಿತಿಯಲ್ಲಿ ಕರ್ತವ್ಯ ನಿರ್ವಹಿಸುವಂತೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ಆರ್.ರವಿ ಹೇಳಿದರು.

ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸದಸ್ಯರು ಮತ್ತು ಗ್ರಾಮಸ್ಥರಲ್ಲಿ ತಾರತಮ್ಯ ತೋರದೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯಿಂದ ನಡೆದುಕೊಳ್ಳುವಂತೆ ಮತ್ತು ಇತ್ತೀಚೆಗೆ ಕುಡಿಯುವ ನೀರಿನ ಸಮಸ್ಯೆಗಳು ಅಲ್ಲಲ್ಲಿ ಕೇಳಿಬರುತ್ತಿದ್ದು, ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳುವಂತೆ ಸಲಹೆ ನೀಡಿದರು.

ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಸಿ.ದೇವರಾಜ್ ಮಾತನಾಡಿ, ಎನ್‌ಆರ್‌ಇಜಿ ಕಾರ್ಯಕ್ರಮ ತಾಲ್ಲೂಕಿನಲ್ಲಿ ಯಶಸ್ವಿಯಾಗಿದ್ದು, ಮತ್ತೆ ಜಿಲ್ಲಾ ಪಂಚಾಯಿತಿಯಿಂದ ರೂ 3 ಕೋಟಿ ಹಣವನ್ನು ಬಿಡುಗಡೆ ಮಾಡಿಸುವಂತೆ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಿಗೆ ಮನವಿ ಮಾಡಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಿ ಕರ್ತವ್ಯವನ್ನು ನಿಭಾಯಿಸುವ ಜತೆಗೆ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ನೋಡಿಕೊಳ್ಳುವಂತೆ ತಿಳಿಸಿದರು.

ಸ್ಥಾಯಿ ಸಮಿತಿ ಅಧ್ಯಕ್ಷ ವಿಜಯಾನಾಯ್ಕ, ಸದಸ್ಯ ಧಮೇಂದ್ರ, ನಿವೃತ್ತ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಲ್ಲೇಶಪ್ಪ ಮತ್ತು ತಾಲ್ಲೂಕಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳು ಈ ಸಂದರ್ಭದಲ್ಲಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.