ADVERTISEMENT

`ಗುಣಮಟ್ಟದ ಕಾಮಗಾರಿಗೆ ಆದ್ಯತೆ'

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2012, 9:33 IST
Last Updated 17 ಡಿಸೆಂಬರ್ 2012, 9:33 IST
`ಗುಣಮಟ್ಟದ ಕಾಮಗಾರಿಗೆ ಆದ್ಯತೆ'
`ಗುಣಮಟ್ಟದ ಕಾಮಗಾರಿಗೆ ಆದ್ಯತೆ'   

ನರಸಿಂಹರಾಜಪುರ: ಸಾರ್ವಜನಿಕರ ಅನುಕೂಲಕ್ಕಾಗಿ ಎನ್.ಆರ್.ಪುರ ಮತ್ತು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ತಲಾ ರೂ.7.15ಲಕ್ಷದ  ಆಂಬುಲೆನ್ಸ್ ಸರ್ಕಾರದಿಂದ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೀವರಾಜ್ ತಿಳಿಸಿದರು.

ಇಲ್ಲಿನ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಎನ್.ಆರ್.ಪುರ ಮತ್ತು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ಭಾನುವಾರ ಆಂಬುಲೆನ್ಸ್ ವಾಹನ ಹಸ್ತಾಂತರಿಸಿ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

108 ಅಂಬುಲೆನ್ಸ್ ಸೇವೆಯೊಂದಿಗೆ ಈ ಅಂಬುಲೆನ್ಸ್ ಸಹ ಕಾರ್ಯನಿರ್ವಹಿಸಲಿದೆ. ಸೇವೆಗೆ 35 ಕಿ.ಮೀ ಮಿತಿಯಿದೆ. ಬಡವರಿಗೆ ಈ ಸೇವೆ ಅತಿ ಕಡಿಮೆ ವೆಚ್ಚದಲ್ಲಿ ಲಭ್ಯವಾಗಲಿದೆ.108 ಅಂಬುಲೆನ್ಸ್ ಸೇವೆ ತುರ್ತು ಸಂದರ್ಭಗಳಲ್ಲಿ ಮಾತ್ರ ಲಭ್ಯವಾಗುತ್ತದೆ. ಆದರೆ ಇದು ಇತರ ಉದ್ದೇಶಗಳಿಗೂ ಬಳಸಿಕೊಳ್ಳಬಹುದಾಗಿದೆ ಎಂದರು.

ಎನ್.ಆರ್.ಪುರ ಮತ್ತು ಕೊಪ್ಪದ ಸರ್ಕಾರಿ ಆಸ್ಪತ್ರೆ 100 ಹಾಸಿಗೆಗೆ ಮೇಲ್ದರ್ಜೆಗೆ ಏರಿಸಲಾಗಿದ್ದು, ಇದರ ಕಾಮಗಾರಿ ಈಗಾಗಲೇ ಪ್ರಾರಂಭವಾಗಿದೆ. ಇಲ್ಲಿ ನಡೆಯುತ್ತಿರುವ ಕಾಮಗಾರಿಯಲ್ಲಿ ಗುಣಮಟ್ಟದಲ್ಲಿ ಕೊರತೆಯಿದೆ ಎಂಬುದು ಮೇಲುನೋಟಕ್ಕೆ ಕಂಡು ಬಂದಿದೆ. ಬಳಸಿರುವ ಮರ ಉತ್ತಮವಾಗಿಲ್ಲ. ಹಾಗಾಗಿ ಇದನ್ನು ಬದಲಾಯಿಸಲು ಸೂಚಿಸಲಾಗಿದೆ. ಗುಣಮಟ್ಟದ ಕಾಮಗಾರಿ ಮಾಡದಿದ್ದರೆ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಹೇಳಿದರು.

ಮೊರಾರ್ಜಿ ಶಾಲೆಯ ಕಟ್ಟಡ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ. ಇ ಟೆಂಡರ್‌ನಲ್ಲಿ ಅನುಕೂಲ ಮತ್ತು ಅನಾನುಕೂಲ ಎರಡೂ  ಇದೆ. ಬೇರೆ ಕಡೆಯ ಗುತ್ತಿಗೆದಾರರು ಟೆಂಡರ್ ಪಡೆದು ಕಾಮಗಾರಿ ಮಾಡದೆ  ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಈ ಕಾಮಗಾರಿಯನ್ನು ಪೂರ್ಣಗೊಳಿಸಲು ಕಾಲ ಮೀತಿ ನಿಗದಿಪಡಿಸಿದ್ದು, ಅದರೊಳಗೆ ಪೂರ್ಣಗೊಳಿ ಸದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಬಿ.ಎಚ್.ಕೈಮರದಿಂದ ಮಿನಿ ವಿಧಾನಸೌಧ ವೃತ್ತದವರೆಗೆ ರಸ್ತೆ ವಿಸ್ತರಣೆಯಾಗಿದ್ದು, ಈ ತಿಂಗಳೊಳಗೆ ಡಾಂಬರೀಕರಣ ಮಾಡಲಾಗುತ್ತದೆ ಎಂದು ಹೇಳಿದರು.

ಅಂಬುಲೆನ್ಸ್ ಹಸ್ತಾಂತರದ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಬಿ.ವಿ.ನಿರಜ್, ಸರ್ಕಾರಿ ಆಸ್ಪತ್ರೆಯ ವೈದ್ಯರಾದ ಡಾ.ಬಾಲಕೃಷ್ಣ, ಡಾ.ಸೀಮಾ, ಡಾ.ವಿವೇಕಾನಂದ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಜೆ.ಜಿ.ನಾಗರಾಜ್, ಕೊಪ್ಪ ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ರಮೇಶ್, ಪದ್ಮಾವತಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಅನ್ನಪೂರ್ಣ ಮತ್ತಿತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.