ADVERTISEMENT

ಬದಲಾವಣೆ ಬಯಸಿರುವ ಶೃಂಗೇರಿ ಕ್ಷೇತ್ರದ ಜನತೆ

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಎಲ್.ವಿಜಯಕುಮಾರ್ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2018, 6:10 IST
Last Updated 20 ಏಪ್ರಿಲ್ 2018, 6:10 IST

ಬಾಳೆಹೊನ್ನೂರು: ‘ಶೃಂಗೇರಿ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಶಾಸಕ ಡಿ.ಎನ್.ಜೀವರಾಜ್ ಅವರು ಜನರು ನಿರೀಕ್ಷಿಸಿದಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ದೊಡ್ಡ ಯೋಜನೆಗಳನ್ನು ಈ ಭಾಗಕ್ಕೆ ತಂದಿಲ್ಲ ಎಂಬ ಆಪಾದನೆ ಅವರ ಮೇಲಿದೆ. ಆದ್ದರಿಂದ ಜನತೆ ಈ ಬಾರಿ ಕ್ಷೇತ್ರದಲ್ಲಿ ಬದಲಾವಣೆ ಬಯಸಿದ್ದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಟಿ.ಡಿ.ರಾಜೇಗೌಡ ಗೆಲುವು ಸಾಧಿಸಲಿದ್ದಾರೆ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಎಲ್.ವಿಜಯಕುಮಾರ್ ಆಶಯ ವ್ಯಕ್ತಪಡಿಸಿದರು.

ಪಟ್ಟಣದ ಬೈರೇಗುಡ್ಡದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯ ಐದು ಕ್ಷೇತ್ರ ಸೇರಿದಂತೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಈಗಾಗಲೇ 218 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು ಎಲ್ಲಾ ಕಡೆಗಳಲ್ಲೂ ಉತ್ತಮ ಸ್ಪಂದನೆ ದೊರೆತಿದೆ. ಸಾಧನೆ, ಅಭಿವೃದ್ಧಿಗಳ ಆಧಾರದಲ್ಲಿ ಕಾಂಗ್ರೆಸ್ ಪಕ್ಷ ಜನರ ಮುಂದೆ ಮತ ಯಾಚಿಸುತ್ತದೆ. ಕಳೆದ ಬಾರಿ ಕಡಿಮೆ ಅಂತರದಲ್ಲಿ ಸೋಲುಂಡ ಟಿ.ಡಿ.ರಾಜೇಗೌಡ ಅವರನ್ನು ಈ ಬಾರಿ ಮತ್ತೆ ಶೃಂಗೇರಿ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಸೋಲನ್ನು ಸವಾಲಾಗಿ ಸ್ವೀಕರಿಸಿದ ಅವರು ನಂತರದ ದಿನಗಳಲ್ಲಿ ಕ್ಷೇತ್ರದಾದ್ಯಂತ ಸರಣಿ ಸಭೆಗಳನ್ನು ನಡೆಸಿ ಜನರ ಸಮಸ್ಯಗಳಿಗೆ ಸ್ಪಂದಿಸಿದ್ದಾರೆ. ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಎಲ್ಲರೂ ಒಗ್ಗಟ್ಟಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಕೇಂದ್ರದ ವೈಫಲ್ಯಗಳನ್ನು ಮನೆ ಮನೆಗೂ ತಲುಪಿಸಲಾಗುತ್ತದೆ’ ಎಂದರು.

ಪಕ್ಷದಲ್ಲಿ ಭುಗಿಲೆದ್ದಿರುವ ಭಿನ್ನಮತ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ‘ಇದೊಂದು ಸಹಜ ಪ್ರಕ್ರಿಯೆ, ಇನ್ನೆರಡು ದಿನಗಳಲ್ಲಿ ಎಲ್ಲವೂ ಸಹಜ ಸ್ಥಿತಿಗೆ ಬರಲಿದೆ. ತರೀಕೆರೆ ಕೇತ್ರದಲ್ಲಿ ಹಿಂದಿನ ಶಾಸಕರಿಗಿಂತಲೂ ಸಮರ್ಥ ಅಭ್ಯರ್ಥಿಯನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಅವರ ಗೆಲುವಿಗೆ ಶ್ರಮಿಸಲಾಗುವುದು ಎಂದರು.

ADVERTISEMENT

ಐಟಿ ಅಧಿಕಾರಿಳು ಚುನಾವಣೆಗೂ ಮುನ್ನ ಕಾಂಗ್ರೆಸ್ ಮುಖಂಡರ ಮನೆ ಮೇಲೆ ದಾಳಿ ನಡೆಸುವ ಮೂಲಕ ಒತ್ತಡ ಹೇರಿ ಕೆಲಸ ಮಾಡದಂತೆ ತಡೆಯಲು ಯತ್ನಿಸುತ್ತಿದ್ದಾರೆ. ಇದಕ್ಕೆ ಪಕ್ಷದ ಕಾರ್ಯಕರ್ತರು ಮಣಿಯುವುದಿಲ್ಲ. ಜಿಲ್ಲಾ ಕೇಂದ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಚೇರಿಗೆ ನುಗ್ಗಿ ದಾಂದಲೆ ನಡೆಸಿದ ಕುರಿತು ಹೈಕಮಾಂಡ್ ವರದಿ ಕೇಳಿದ್ದು ಅದನ್ನು ನೀಡಲಾಗಿದೆ ಎಂದರು.

ಅಭ್ಯರ್ಥಿ ಟಿ.ಡಿ.ರಾಜೇಗೌಡ ಮಾತನಾಡಿ, ಶಾಸಕರು ನೀರಿಕ್ಷಿತ ಮಟ್ಟದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಸ್ಪಂದಿಸಿಲ್ಲ. ಕಳೆದ ಐದು ವರ್ಷಗಳಿಂದ ಆರಾಧನಾ ಸಮಿತಿ, ಶಾಲಾಭಿವೃದ್ಧಿ ಸಮಿತಿಗಳ ಅಧ್ಯಕ್ಷರಾಗಿರುವ ಶಾಸಕರು ಸಭೆ ಕರೆಯದೆ ನಿರ್ಲಕ್ಷ್ಯ ವಹಿಸಿದ್ದಾರೆ. 2006ರಲ್ಲಿ ಬಿಜೆಪಿ ಸರ್ಕಾರ ಭೂಕಬಳಿಗೆ ನಿಷೇಧ ಕಾಯ್ದೆ ಜಾರಿಗೊಳಿಸುವ ಮೂಲಕ ರೈತರಿಗೆ ಮಾರಕವಾದ ಕಾನೂನನ್ನು ಜಾರಿಗೊಳಿಸಿದ್ದಾರೆ ಎಂದರು.

ಕೆಪಿಸಿಸಿ ಕಾರ್ಯದರ್ಶಿ ದಿನೇಶ್, ಪ್ರಧಾನ ಕಾರ್ಯದರ್ಶಿ ಎಂ.ಎಲ್.ಮೂರ್ತಿ, ಗಂಗಾಧರಗೌಡ, ಶಿವಾನಂದಸ್ವಾಮಿ, ಸದಾಶಿವ, ಬಿ.ಸಿ.ಗೀತಾ, ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ಸಿ.ಸಂತೋಷ್ ಕುಮಾರ್, ಉಪೇಂದ್ರ, ಶಹಾಬ್, ಜುಹೇಬ್, ಕೌಶಿಕ್, ಮಹಮ್ಮದ್ ಇಫ್ತಿಕಾರ್ ಆದಿಲ್, ಕಿಸಾನ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸಚಿನ್ ಮೀಗ, ಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಮುರೋಳ್ಳಿ, ಶೃಂಗೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾರನಕೊಡಿಗೆ ನಟರಾಜ್, ನರಸಿಂಹರಾಜಪುರ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ಅಂಶುಮಂತ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.