ADVERTISEMENT

ಪ.ಪಂ ವಿರುದ್ಧ ದೂರು ದಾಖಲಿಸಲು ಕ್ರಮ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2018, 9:59 IST
Last Updated 7 ಫೆಬ್ರುವರಿ 2018, 9:59 IST

ಮೂಡಿಗೆರೆ: ಪಟ್ಟಣ ಪಂಚಾಯಿತಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಸವಲತ್ತುಗಳು ದುರ್ಬಳಕೆಯಾಗಿರುವ ದೂರನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್‌ ಅಧೀಕ್ಷಕ ಡಾ. ಸಿ.ಬಿ.ವೇದಮೂರ್ತಿ ಭರವಸೆ ನೀಡಿದರು.

ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಿಂದ ಮಂಗಳವಾರ ನಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಕುಂದುಕೊರತೆ ಸಭೆಯಲ್ಲಿ ಸಮಸ್ಯೆ ಆಲಿಸಿ ಅವರು ಮಾತನಾಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಅಮಿತಾಮುತ್ತಪ್ಪ ಮಾತನಾಡಿ, ‘ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಸಂಬಂಧಿಸಿದಂತೆ ಯಾವುದೇ ಸಭೆ ನಡೆಸಿದರೂ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಭಾಗವಹಿಸುವುದಿಲ್ಲ. ಪಟ್ಟಣ ಪಂಚಾಯಿತಿಗೆ ಮಂಜೂರಾದ ಯೋಜನೆಗಳು ಹಾಗೂ ಅನುದಾನಗಳ ಬಗ್ಗೆ ಮಾಹಿತಿ ನೀಡುವುದಿಲ್ಲ ಎಂದು ಆರೋಪಿಸಿದರು.

ADVERTISEMENT

ಈ ಆರೋಪಕ್ಕೆ ಧ್ವನಿಗೂಡಿಸಿದ ಬಿಎಸ್‌ಪಿ ಜಿಲ್ಲಾ ಕಾರ್ಯದರ್ಶಿ ಲೋಕವಳ್ಳಿ ರಮೇಶ್‌, ‘ಪಟ್ಟಣ ಪಂಚಾಯಿತಿಯಲ್ಲಿ ಪರಿಶಿಷ್ಟರ ಅನುದಾನಗಳನ್ನು ಸದಸ್ಯರೊಬ್ಬರು ತಮ್ಮ ಖಾಸಗಿ ಕಾಮಗಾರಿಗಳಿಗೆ ಬಳಸಿಕೊಂಡಿದ್ದಾರೆ. ಈ ಕುರಿತು ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಆರೋಪಿಸಿದರು.

ಅನುದಾನ ದುರ್ಬಳಕೆ ಮಾಡಿಕೊಂಡಿರುವ ಬಗ್ಗೆ ಲಿಖಿತ ದೂರು ನೀಡಿದರೆ, ಪರಿಶೀಲನೆ ನಡೆಸಿ, ಪಟ್ಟಣ ಪಂಚಾಯಿತಿ ವಿರುದ್ದ ಪ್ರಕರಣ ದಾಖಲಿಸಲಾಗುವುದು ಎಂದು ವೇದನೂರ್ತಿ ತಿಳಿಸಿದರು. ಲಿಖಿತ ದೂರನ್ನು ಸಲ್ಲಿಸುವುದಾಗಿ ಲೋಕವಳ್ಳಿ ರಮೇಶ್‌ ತಿಳಿಸಿದರು.

ಕೆಲ್ಲೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕುಟುಂಬದವರಿಗೆ ನೀಡಿರುವ ಜಮೀನಿಗೆ ಸಾಗುವಳಿ ಚೀಟಿ ನೀಡುತ್ತಿಲ್ಲ ಎಂದು ಗ್ರಾಮಸ್ಥರು ದೂರು ನೀಡಿದರು. ಕೂಡಲೇ ಸ್ಥಳ ಪರಿಶೀಲನೆ ನಡೆಸಿ, ಸಾಗುವಳಿ ಚೀಟಿ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿದ್ದ ತಹಶೀಲ್ದಾರ್‌ ನಂದಕುಮಾರ್‌ಗೆ ಸೂಚಿಸಿದರು.

ಬೆಟ್ಟಗೆರೆ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರು ವಾಸ ಮಾಡುವ ಪ್ರದೇಶದಲ್ಲಿ ಸಮುದಾಯ ಭವನ ನಿರ್ಮಿಸಲು ಮೂರು ತಿಂಗಳ ಹಿಂದೆ ಶಂಕುಸ್ಥಾಪನೆ ನಡೆಸಿದ್ದು, ಇದುವರೆಗೂ ಕಾಮಗಾರಿ ಕೈಗೊಂಡಿಲ್ಲ. ಪ್ರಶ್ನಿಸಿದರೆ ಸೂಕ್ತ ಉತ್ತರ ದೊರಕುತ್ತಿಲ್ಲ ಎಂದು ಗ್ರಾಮಸ್ಥ ಕುಮಾರ್‌ ಆರೋಪಿಸಿದರು.

ಗುತ್ತಿಗೆಯನ್ನು ನಿರ್ಮಿತಿ ಕೇಂದ್ರಕ್ಕೆ ವಹಿಸಿದ್ದು, ತಾಂತ್ರಿಕ ಕಾರಣದಿಂದ ಸಮಸ್ಯೆ ಉದ್ಭವಿಸಿದ್ದು, ಶೀಘ್ರವಾಗಿ ಪರಿಹರಿಸಿ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಧನಂಜಯ್‌ ತಿಳಿಸಿದರು.

ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮಂಜೂರಾಗಿರುವ ಜಾಗದ ವಿವಾದವನ್ನು ದಲಿತ ಮುಖಂಡರು ಅಧಿಕಾರಿಯೊಂದಿಗೆ ಚರ್ಚಿಸಿದರು, ಪ್ರಕರಣವು ನ್ಯಾಯಾಲಯದಲ್ಲಿರುವುದರಿಂದ, ತ್ವರಿತವಾಗಿ ಇತ್ಯರ್ಥಪಡಿಸುವಂತೆ ಸರ್ಕಾರಿ ಅಭಿಯೋಜಕರಿಗೆ ಮನವಿ ಮಾಡಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.