
ಚಿಕ್ಕಮಗಳೂರು: ಅಂಗನವಾಡಿ ನೌಕರರ ಗೌರವಧನ ಹೆಚ್ಚಿಸುವ ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಮಾರ್ಚ್ 2ರಂದು ಬೆಂಗಳೂರು ಚಲೊ ಹಮ್ಮಿಕೊಳ್ಳಲಾಗಿದೆ ಎಂದು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ರಾಜ್ಯ ಘಟಕದ ಅಧ್ಯಕ್ಷ ಬಿ. ಅಮ್ಜದ್ ತಿಳಿಸಿದರು.
ಚುನಾವಣಾ ಪ್ರಣಾಳಿಕೆಯ ಭರವಸೆಯಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ₹15 ಸಾವಿರ ಹಾಗೂ ಸಹಾಯಕಿಯರಿಗೆ ₹10 ಸಾವಿರ ಗೌರವಧನ ನೀಡಬೇಕೆಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
2011ರಿಂದ ನಿವೃತ್ತರಾಗಿರುವ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಜಾರಿಗೊಳಿಸಬೇಕು. ಈಗಾಗಲೇ ಸ್ವಯಂ ನಿವೃತ್ತಿ ಹೊಂದಿರುವವರಿಗೂ ಗ್ರಾಚ್ಯುಟಿ ನೀಡಬೇಕು. ಬಲವಂತವಾಗಿ ಬಿಎಲ್ಒ ಜವಾಬ್ದಾರಿ ಹೊರೆಸಲಾಗುತ್ತಿದೆ. ನಿರಾಕರಿಸುವ ಕಾರ್ಯಕರ್ತೆಯರ ವಿರುದ್ಧ ಕ್ರಮ ಜರುಗಿಸಲಾಗುತ್ತಿದೆ. ಇದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಅಂಗನವಾಡಿಗಳಿಗೆ ಬರುವ ಮಕ್ಕಳಿಗೆ ಪೌಷ್ಟಿಕ ಆಹಾರ ತಯಾರಿಸಿ ಬಡಿಸಲು ತರಕಾರಿ ವೆಚ್ಚ ಕೇವಲ 50 ಪೈಸೆ, ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಡಿ.ಎ ₹30 ನೀಡಲಾಗುತ್ತಿದೆ. ಬೆಲೆ ಏರಿಕೆಗೆ ಅನುಗುಣವಾಗಿ ಹೆಚ್ಚಿಸಬೇಕು. ಮಾತೃವಂದನ, ಭಾಗ್ಯಲಕ್ಷ್ಮಿ ಪ್ರೋತ್ಸಾಹಧನ ಬಿಡುಗಡೆ ಮಾಡಬೇಕು ಎಂದರು.
ಅನಾರೋಗ್ಯಕ್ಕೆ ತುತ್ತಾಗುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಶಸ್ತ್ರಚಿಕಿತ್ಸೆ ಸೇರಿ ಎಲ್ಲಾ ರೀತಿಯ ಚಿಕಿತ್ಸೆಗೆ ಉಚಿತ ವೈದ್ಯಕೀಯ ಸೌಲಭ್ಯ ನೀಡಲು ಕ್ರಮ ಕೈಗೊಳ್ಳಬೇಕು. ಅನಾರೋಗ್ಯಕ್ಕೆ ಒಳಗಾದ ಅವಧಿಯನ್ನು ವೇತನ ಸಹಿತ ವೈದ್ಯಕೀಯ ರಜೆ ಎಂದು ಪರಿಗಣಿಸಬೇಕು ಎಂದು ಹೇಳಿದರು.
ಮೊಟ್ಟೆಯ ದರ ಏರುಪೇರು ಆಗುತ್ತಿದ್ದು, ಮಾರುಕಟ್ಟೆಯ ದರ ಹೆಚ್ಚಳಕ್ಕೆ ಅನುಗುಣವಾಗಿ ಮೊಟ್ಟೆ ಹಣ ಬಿಡುಗಡೆ ಮಾಡಬೇಕು. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಕಾಲಕಾಲಕ್ಕೆ ಭರ್ತಿ ಮಾಡಬೇಕು ಎಂದರು.
ಎಲ್ಲಾ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿ ಎಐಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ನೇತೃತ್ವದಲ್ಲಿ ಬೆಂಗಳೂರು ಚಲೊ ಹಮ್ಮಿಕೊಳ್ಳಲಾಗಿದೆ. ಅಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಅವರು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಫೆಡರೇಷನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಜಯಮ್ಮ, ಜಿಲ್ಲಾ ಘಟಕದ ಅಧ್ಯಕ್ಷ ಗ್ರೇಟಾ ಪರ್ನಾಡಿಸ್, ಪ್ರಧಾನ ಕಾರ್ಯದರ್ಶಿ ಪುಷ್ಪಾವತಿ, ರಾಧಾ ಸುಂದರೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.