ಬಾಳೆಹೊನ್ನೂರು (ಚಿಕ್ಕಮಗಳೂರು): ಕಾಡಾನೆ ದಾಳಿಯಿಂದ ನಾಲ್ಕು ದಿನಗಳಲ್ಲಿ ಇಬ್ಬರು ಮೃತಪಟ್ಟಿದ್ದು, ಇದರಿಂದ ಆಕ್ರೋಶಗೊಂಡ ಸ್ಥಳೀಯರು ಬಾಳೆಹೊನ್ನೂರು, ಖಾಂಡ್ಯದಲ್ಲಿ ಸೋಮವಾರ ಸ್ವಯಂ ಪ್ರೇರಿತ ಬಂದ್ ನಡೆಸಿದರು. ಎರಡು ಕಾಡಾನೆಗಳನ್ನು ಹಿಡಿದು ಸ್ಥಳಾಂತರ ಮಾಡಲು ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ.
ಬಾಳೆಹೊನ್ನೂರು, ಖಾಂಡ್ಯ, ಹುಯಿಗೇರೆ, ದೇವದಾನ ಸೇರಿ ಸುತ್ತಮುತ್ತಲ ಗ್ರಾಮಗಳಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಸ್ಥಳೀಯರು ಪ್ರತಿಭಟನೆ ನಡೆಸಿದರು. ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿದ್ದರಿಂದ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಸ್ಥಳೀಯರು, ಅರಣ್ಯ ಇಲಾಖೆಗೆ ಮುತ್ತಿಗೆ ಹಾಕಲು ಮುಂದಾದರು. ಚಿಕ್ಕಮಗಳೂರು ಮತ್ತು ಶಿವಮೊಗ್ಗದಿಂದ ಬಂದಿದ್ದ ಹೆಚ್ಚಿನ ಸಂಖ್ಯೆಯ ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದರು.
ಜಿಲ್ಲಾಧಿಕಾರಿ ಮೀನಾ ನಾಗರಾಜ್, ಸಿಸಿಎಫ್ ಯಶಪಾಲ್ ಕ್ಷೀರಸಾಗರ, ಪಶ್ಚಿಮ ವಿಭಾಗದ ಐಜಿಪಿ ಅಮಿತ್ ಸಿಂಗ್ ಸ್ಥಳಕ್ಕೆ ಬಂದು ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದರು. ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಅವರು ಅರಣ್ಯ ಇಲಾಖೆ ಅಧಿಕಾರಿಗಳೊಂದಗೆ ವರ್ಚುವಲ್ ಸಭೆ ನಡೆಸಿ, ‘ಪುಂಡಾನೆಗಳನ್ನು ಸೆರೆ ಹಿಡಿಯಬೇಕು’ ಎಂದು ಸೂಚನೆ ನೀಡಿದರು.
ಆನೆ ಸೆರೆ ಕಾರ್ಯಾಚರಣೆ ಆರಂಭಿಸುವ ತನಕ ಪ್ರತಿಭಟನೆ ಹಿಂಪಡೆಯುವುದಿಲ್ಲ. ಸ್ಥಳಕ್ಕೆ ಅರಣ್ಯ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಬರಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದರು. ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲು ಆನೆ ಬಿಡಾರದಿಂದ 4 ಆನೆಗಳು ಬಂದಿಳಿದ ಬಳಿಕ ಪ್ರತಿಭಟನೆ ಕೈಬಿಡಲಾಯಿತು.
‘ನಾಲ್ಕು ಸಾಕಾನೆಗಳು ಬಂದಿದ್ದು, ಇನ್ನೂ ಐದು ಆನೆಗಳು ಮಂಗಳವಾರ ಬರಲಿವೆ. ಮೊದಲಿಗೆ ಎರಡು ಕಾಡಾನೆಗಳನ್ನು ಹಿಡಿದು ಸ್ಥಳಾಂತರ ಮಾಡಲಾಗುವುದು. ಬಳಿಕ ಹಂತ ಹಂತವಾಗಿ ಬೇರೆ ಆನೆಗಳನ್ನು ಸೆರೆ ಹಿಡಿಯಲಾಗುವುದು’ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.