ಬೀರೂರು (ಕಡೂರು): ಸ್ವತಂತ್ರ ಭಾರತದ ಪ್ರಜೆಗಳಾಗಿ ನಾವು ದೇಶದ ಪ್ರಗತಿಗೆ ಕೈಜೋಡಿಸಿದರೆ ನಮ್ಮದು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುತ್ತದೆ ಎಂದು ಪುರಸಭೆ ಅಧ್ಯಕ್ಷೆ ಭಾಗ್ಯಲಕ್ಷ್ಮಿ ಮೋಹನ್ ಅಭಿಪ್ರಾಯಪಟ್ಟರು.
ಬೀರೂರು ಪಟ್ಟಣದ ಕೆಎಲ್‌ಕೆ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಸ್ವಾತಂತ್ರ್ಯವನ್ನು ಅನುಭವಿಸುವುದು ಮಾತ್ರವಲ್ಲ, ಅದನ್ನು ಪಡೆಯಲು ಶ್ರಮಿಸಿದವರ ಮತ್ತು ದೇಶದ ಗೌರವ ಹೆಚ್ಚಿಸುವ ನಿಟ್ಟಿನಲ್ಲಿ ನಮ್ಮ ನಡೆ-ನುಡಿ ಇರಲಿ. ಭವ್ಯಭಾರತ ಜಗತ್ತಿನ ಮುಂಚೂಣಿ ರಾಷ್ಟ್ರವಾಗಲಿ ಎಂದು ಆಶಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಬುರ್ಹಾನುದ್ದೀನ್ ಚೋಪ್‌ದಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪುರಸಭೆ ಮಾಜಿ ಅಧ್ಯಕ್ಷೆ ವನಿತಾ ಮಧುಬಾವಿಮನೆ, ಸದಸ್ಯ ಕೆ.ಆರ್.ರಘು, ಬಿ.ಆರ್.ಮೋಹನ್ ಕುಮಾರ್, ಕ್ಷೇತ್ರ ಶಿಕ್ಷಣ ಸಮನ್ವಯ ಅಧಿಕಾರಿ ಶೇಖರಪ್ಪ ಮಾತನಾಡಿದರು.
ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ, ಮಾಜಿ ಸೈನಿಕರು, ಸ್ವಾತಂತ್ರ್ಯ ಹೋರಾಟಗಾರರು, ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಲಾಯಿತು. ಪಥ ಸಂಚಲನ ನಡೆಸಿದ ವಿವಿಧ ಶಾಲಾ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಪುರಸಭೆ ಮುಖ್ಯಾಧಿಕಾರಿ ಜಿ.ಪ್ರಕಾಶ್, ಪುರಸಭೆ ಸದಸ್ಯರು, ನಾಮನಿರ್ದೇಶಿತ ಸದಸ್ಯರು, ಪೊಲೀಸ್, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಮತ್ತು ಸಿಬ್ಬಂದಿ, ಪಟ್ಟಣದ ವಿವಿಧ ಶಾಲೆಯ ಮಕ್ಕಳು, ಪೋಷಕರು ಭಾಗವಹಿಸಿದ್ದರು.
ಪಟ್ಟಣದ ವಿವಿಧ ಶಾಲೆಗಳು, ಪುರಸಭೆ, ನಾಡಕಚೇರಿ, ಆಟೊ ನಿಲ್ದಾಣ, ಟ್ಯಾಕ್ಸಿ ನಿಲ್ದಾಣ, ಗೂಡ್ಸ್ ವಾಹನ ನಿಲ್ದಾಣ ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ದ್ವಜಾರೋಹಣ ನೆರವೇರಿಸಿ ಸಿಹಿ ಹಂಚಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.