ADVERTISEMENT

ಅತಿವೃಷ್ಟಿ ಅನುದಾನ ದುರ್ಬಳಕೆ

ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಜೀವರಾಜ್ ಆರೋಪ

​ಪ್ರಜಾವಾಣಿ ವಾರ್ತೆ
Published 17 ಜನವರಿ 2021, 2:01 IST
Last Updated 17 ಜನವರಿ 2021, 2:01 IST
ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡ ಡಿ.ಎನ್.ಜೀವರಾಜ್ ಅವರನ್ನು ನರಸಿಂಹರಾಜಪುರ ದಲ್ಲಿ ತಾಲ್ಲೂಕು ಬಿಜೆಪಿ ಘಟಕದ ವತಿಯಿಂದ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಅಭಿನಂದಿಸಲಾಯಿತು.
ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡ ಡಿ.ಎನ್.ಜೀವರಾಜ್ ಅವರನ್ನು ನರಸಿಂಹರಾಜಪುರ ದಲ್ಲಿ ತಾಲ್ಲೂಕು ಬಿಜೆಪಿ ಘಟಕದ ವತಿಯಿಂದ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಅಭಿನಂದಿಸಲಾಯಿತು.   

ನರಸಿಂಹರಾಜಪುರ: ‘ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಅತಿವೃಷ್ಟಿ ಪರಿಹಾರಕ್ಕೆ ಬಿಡುಗಡೆಯಾದ ಅನುದಾನದಲ್ಲಿ ಶಾಸಕರು ಕೈಗೊಂಡ ಕಾಮಗಾರಿಗಳ ಬಗ್ಗೆ ಅಂಕಿಅಂಶ ಸಹಿತ ದಾಖಲೆ ಬಿಡುಗಡೆ ಮಾಡಬೇಕು’ ಎಂದು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್ ಆಗ್ರಹಿಸಿದರು.

ಗ್ರಾಮ ಪಂಚಾಯಿತಿಯಲ್ಲಿ ಗೆದ್ದ ಹಾಗೂ ಸೋತ ಅಭ್ಯರ್ಥಿಗಳಿಗೆ ಇಲ್ಲಿನ ಗಣಪತಿ ಪೆಂಡಾಲ್ ಸಮೀಪ ತಾಲ್ಲೂಕು ಬಿಜೆಪಿ ಘಟಕದ ವತಿಯಿಂದ ಶನಿವಾರ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

‘ಅತಿವೃಷ್ಟಿ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡದೇ ತಮ್ಮ ಪಕ್ಷದ ಕೆಲವು ಮುಖಂಡರಿಗೆ ಅನುಕೂಲವಾಗುವ ಕಾಮಗಾರಿಗಳನ್ನು ಕೈಗೊಳ್ಳಲು ಬಳಸಿದ್ದಾರೆ’ ಎಂದು ದೂರಿದರು.

ADVERTISEMENT

ಕ್ಷೇತ್ರದಲ್ಲಿ 28 ಗ್ರಾಮ ಪಂಚಾಯಿತಿ ಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಿದ್ದರೆ, 9 ಗ್ರಾಮ ಪಂಚಾಯಿತಿಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. 4 ಗ್ರಾಮ ಪಂಚಾಯಿತಿಗಳಲ್ಲಿ ಸಮ ಸ್ಥಾನ ಬಂದಿದೆ ಎಂದರು.

‘ಇದೇ 24ರಂದು ಕೊಪ್ಪಕ್ಕೆ ಕಂದಾಯ ಸಚಿವ ಆರ್.ಅಶೋಕ್ ಬರಲಿದ್ದಾರೆ. 192 (ಎ) ಭೂ ಕಬಳಿಕೆ ಕಾಯ್ದೆ ತಿದ್ದುಪಡಿ ಮಾಡುವ ಬಗ್ಗೆ, ಸೊಪ್ಪಿನ ಬೆಟ್ಟಕ್ಕೆ ಹಕ್ಕು ಪತ್ರ ನೀಡುವ ಬಗ್ಗೆ ಹಾಗೂ ಒತ್ತುವರಿ ಜಮೀನನ್ನು ಗುತ್ತಿಗೆ ಆಧಾರದಲ್ಲಿ ನೀಡುವ ಬಗ್ಗೆ ಅಂದು ಒತ್ತಾಯಿಸಲಾಗುವುದು’ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ರಾಮದಾಸ್ ಮಾತನಾಡಿ, ‘ಜೀವರಾಜ್ ಅವರನ್ನು ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿರುವುದು ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿಯಾಗಲಿದೆ’ ಎಂದರು.

ಅಧ್ಯಕ್ಷತೆಯನ್ನು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಅರುಣ್ ಕುಮಾರ್ ವಹಿಸಿದ್ದರು. ಮುಖಂಡರಾದ ಆಶೀಶ್ ಕುಮಾರ್, ವೆನಿಲ್ಲಾ ಭಾಸ್ಕರ್, ಸಂಪತ್ ಕುಮಾರ್, ವಿ.ನಿಲೇಶ್, ಕೆಸವೆ ಮಂಜುನಾಥ್, ಕಲ್ಮಕ್ಕಿ ಉಮೇಶ್, ವೈ.ಎಸ್.ಸುಬ್ರಹ್ಮಣ್ಯ, ಎನ್.ಎಂ.ನಾಗೇಶ್, ಬಿ.ಎಸ್.ಸುಬ್ರಹ್ಮಣ್ಯ, ಪಿ.ಜೆ.ಅಂಟೋಣಿ, ರಶ್ಮಿ, ಕವಿತಾ ಲಿಂಗರಾಜು, ಯುವ ಮೋರ್ಚಾ ಅಧ್ಯಕ್ಷ ಭರತ್, ಜೆ.ಜಿ.ನಾಗರಾಜ್, ಕಾಂತರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.