
ಚಿಕ್ಕಮಗಳೂರು: ಕಡೂರು ತಾಲ್ಲೂಕಿನ ಬಾಸೂರು ಬಳಿ ಮೂರು ಕೃಷ್ಣಮೃಗಳು ಗುಂಡೇಟಿಗೆ ಬಲಿಯಾದ ಪ್ರಕರಣದ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.
ಬುಧವಾರ ಮೂರು ಮರಿಗಳ ಮರಣೋತ್ತರ ಪರೀಕ್ಷೆ ಪೂರ್ಣಗೊಳಿಸಿ ಕಳೇಬರ ಸುಡಲಾಯಿತು. ಚಿಕ್ಕಮಗಳೂರು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ್ ಕ್ಷೀರಸಾಗರ, ಉಪಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಬಾಬು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್, ಯಗಟಿ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಮಂಜುನಾಥ್, ವನ್ಯಜೀವಿ ಪರಿಪಾಲಕ ಜಿ.ವೀರೇಶ್, ವೈಲ್ಡ್ ಕೇರ್ ಸಂಸ್ಥೆ ಅಧ್ಯಕ್ಷ ಮಧು ಮೂಗ್ತಿಹಳ್ಳಿ ಹಾಜರಿದ್ದರು.
ಕೃಷ್ಣಮೃಗಗಳ ಸಾವಿಗೆ ಕಾರಣರಾದವರನ್ನು ಪತ್ತೆ ಮಾಡಲು ಅರಣ್ಯ ಇಲಾಖೆ ಅಧಿಕಾರಿಗಳು, ಯಗಟಿ ಠಾಣೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಕೃಷ್ಣಮೃಗಗಳ ಮೃತದೇಹಗಳು ಪತ್ತೆಯಾದ ಜಾಗಕ್ಕೆ ಶ್ವಾನದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
‘ಒಂದೆರಡು ದಿನಗಳಲ್ಲಿ ಬೇಟೆಗಾರನನ್ನು ಪತ್ತೆ ಹಚ್ಚುವ ವಿಶ್ವಾಸ ಇದೆ’ ಎಂದು ಉಪಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಬಾಬು ‘ಪ್ರಜಾವಾಣಿ’ಗೆ ತಿಳಿಸಿದರು.
ಬಾಸೂರು ಅಮೃತ ಮಹಲ್ ಕಾವಲಿನ ಕೃಷ್ಣಮೃಗ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ಖಾಸಗಿ ಕೃಷಿ ಭೂಮಿಯಲ್ಲಿ ಮೂರು ಕೃಷ್ಣಮೃಗಗಳ ಮೃತದೇಹ ಮಂಗಳವಾರ ಪತ್ತೆಯಾಗಿವೆ. ಎರಡು ಹೆಣ್ಣು ಮತ್ತು ಒಂದು ಗಂಡು ಕೃಷ್ಣಮೃಗವಾಗಿದ್ದು, ಒಂದೂವರೆ ವರ್ಷದಿಂದ ಎರಡು ವರ್ಷದೊಳಗಿನ ವಯಸ್ಸಿನವು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಅಂದಾಜಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.