ತರೀಕೆರೆ: ರಕ್ತದೊತ್ತಡವನ್ನು ಸರಿಯಾದ ರೀತಿಯಲ್ಲಿ ಪರೀಕ್ಷೆ ಮಾಡಿಸಿಕೊಂಡು, ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ದೇವರಾಜ್ ಹೇಳಿದರು.
ಸಾರ್ವಜನಿಕ ಆಸ್ಪತ್ರೆಯ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ‘ವಿಶ್ವ ಅಧಿಕ ರಕ್ತದೊತ್ತಡ ದಿನ’ದಲ್ಲಿ ಅವರು ಮಾತನಾಡಿದರು.
ಹಿರಿಯ ನಾಗರಿಕರೇ ಇಂಥ ಸಮಸ್ಯೆಯಿಂದ ಹೆಚ್ಚಾಗಿ ಬಳಲುತ್ತಿದ್ದು, ಸಾರ್ವಜನಿಕ ಆಸ್ಪತ್ರೆಗಳಲ್ಲಿ ರಕ್ತದೊತ್ತಡ ಮತ್ತು ಮಧುಮೇಹಕ್ಕೆ ಔಷಧಿಗಳು ಲಭ್ಯವಿರುತ್ತವೆ. ಅವಶ್ಯಕತೆ ಇರುವ ರೋಗಿಗಳು ಉಚಿತವಾಗಿ ಇಸಿಜಿ, ಬಿ.ಪಿ, ಸಕ್ಕರೆ ಕಾಯಿಲೆ ತಪಾಸಣೆ ಮಾಡಿಸಿಕೊಂಡು ಚಿಕಿತ್ಸೆ, ಔಷಧಿ ಪಡೆದುಕೊಳ್ಳಬೇಕು ಎಂದರು.
ಅಧಿಕ ರಕ್ತದ ಒತ್ತಡದಿಂದ ಮಿದುಳಿಗೆ ರಕ್ತಸ್ರಾವವಾಗಿ ಪಾರ್ಶ್ವವಾಯು ಆಗುವ ಸಂಭವ, ಕಿಡ್ನಿಗಳ ಮೇಲೆ ಆಗಬಹುದಾದ ತೊಂದರೆಗಳನ್ನು ವಿವರಿಸಿದರು. ಸದ್ಯದಲ್ಲೇ ಬಿ.ಪಿ ಮತ್ತು ಮಧುಮೇಹಕ್ಕೆ ಸಂಬಂಧಿಸಿದ ಮಾತ್ರೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸರ್ಕಾರ ಮಾಡಲಿದ್ದು, ಅದುವರೆಗೂ ಆಸ್ಪತ್ರೆಯಲ್ಲಿ ಔಷಧಿಗಳು ಲಭ್ಯವಿರುತ್ತವೆ ಎಂದರು.
ರಾಜ್ಯದ ಸರ್ಕಾರಿ ಆಸ್ಪತ್ರೆಗಳು ಚಿಕಿತ್ಸೆ ನೀಡುವ ಜೊತೆಗೆ ರೋಗ ಬರುವುದನ್ನು ತಡೆಗಟ್ಟುವ ಕಾರ್ಯಕ್ರಮಗಳನ್ನೂ ನಡೆಸುತ್ತಿವೆ ಎಂದರು.
ಓಂಕಾರ್ ಮೂರ್ತಿ ಸ್ವಾಗತಿಸಿದರು. ಡಾ.ಶ್ರೀನಿವಾಸ್ ವಂದಿಸಿದರು. ಆಸ್ಪತ್ರೆಯ ತಜ್ಞ ವೈದ್ಯರು, ಸಿಬ್ಬಂದಿ, ತಾಲ್ಲೂಕು ಆರೋಗ್ಯ ಅಧಿಕಾರಿ, ಸಿಬ್ಬಂದಿ, ಸಾರ್ವಜನಿಕರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.