
ಮೂಡಿಗೆರೆ (ಚಿಕ್ಕಮಗಳೂರು): ದಕ್ಷಿಣ ಕನ್ನಡ–ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ಭಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ.
ಮೂಡಿಗೆರೆ ಅರಣ್ಯ ವಲಯದ ವ್ಯಾಪ್ತಿಗೆ ಸೇರಿರುವ ಪ್ರದೇಶದೊಳಗೆ ಸಂಭವಿಸಿರುವ ಈ ಅಗ್ನಿ ಅವಘಡದಲ್ಲಿ, ಹತ್ತಾರು ಎಕರೆ ಹುಲ್ಲುಗಾವಲು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಎರಡು ಗಂಟೆಗೂ ಹೆಚ್ಚು ಕಾಲ ಬೆಂಕಿಯ ಜ್ವಾಲೆ ಧಗಧಗಿಸುತ್ತಿತ್ತು.
ಗಾಳಿಯ ವೇಗ ಹೆಚ್ಚಿರುವುದರಿಂದ ಬೆಂಕಿ ಕ್ಷಿಪ್ರವಾಗಿ ಹರಡುತ್ತಿದ್ದು, ಅರಣ್ಯ ಸಂಪತ್ತಿಗೆ ಭಾರಿ ಹಾನಿಯಾಗುವ ಆತಂಕ ವ್ಯಕ್ತವಾಗಿದೆ. ರಸ್ತೆಯ ಪಕ್ಕದಲ್ಲೇ ಬೆಂಕಿ ಕಾಣಿಸಿಕೊಂಡಿರುವುದರಿಂದ ಚಾರ್ಮಾಡಿ ಘಾಟಿಯಲ್ಲಿ ಸಂಚರಿಸುವ ವಾಹನ ಸವಾರರಲ್ಲಿ ಆತಂಕ ಮೂಡಿದೆ.
ಮಾಹಿತಿ ಪಡೆದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಬೆಂಕಿಯಿಂದ ಇಡೀ ಗುಡ್ಡವೇ ಅಗ್ನಿಯುಂಡೆಯಂತೆ ಕಾಣುತ್ತಿದೆ.
ಬೆಂಕಿ ಸಂಪೂರ್ಣ ನಿಯಂತ್ರಣಕ್ಕೆ ತರಲು ಪ್ರಯತ್ನಗಳು ಮುಂದುವರಿದಿವೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿದ್ದು, ತಡರಾತ್ರಿಯವರೆಗೂ ಕಾರ್ಯಚರಣೆ ಮುಂದುವರಿದಿತ್ತು.
ಕಿಡಿಗೇಡಿಗಳು ಉದ್ದೇಶ ಪೂರ್ವಕವಾಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ತನಿಖೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.