ADVERTISEMENT

ಚಿಕ್ಕಮಗಳೂರು |108 ದೌರ್ಜನ್ಯ ಪ್ರಕರಣ: ₹1.44 ಕೋಟಿ ಪರಿಹಾರ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2025, 6:42 IST
Last Updated 20 ಸೆಪ್ಟೆಂಬರ್ 2025, 6:42 IST
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅಧ್ಯಕ್ಷತೆಯಲ್ಲಿ ಪ.ಜಾತಿ ಮತ್ತು ಪ.ಪಂಗಡಗಳ ಜಿಲ್ಲಾ ಮಟ್ಟದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅಧ್ಯಕ್ಷತೆಯಲ್ಲಿ ಪ.ಜಾತಿ ಮತ್ತು ಪ.ಪಂಗಡಗಳ ಜಿಲ್ಲಾ ಮಟ್ಟದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು.   

ಚಿಕ್ಕಮಗಳೂರು: ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ದೌರ್ಜನ್ಯದ 108 ಪ್ರಕರಣಗಳಿಗೆ ಸಂಬಂಧಿಸಿ 2022ರಿಂದ 2025ರ ಸೆ.17ರವರೆಗೆ ₹1,44,63,000 ಮಂಜೂರು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್‌.ಮೀನಾ ನಾಗರಾಜ್ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಿಲ್ಲಾ ಮಟ್ಟದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿ ತಾಲ್ಲೂಕು ಮಟ್ಟದ ಸಮಸ್ಯೆಗಳನ್ನು ತಾಲ್ಲೂಕು ಮಟ್ಟದ ಸಮಿತಿ ಸಭೆಯಲ್ಲಿ ಚರ್ಚಿಸಿ ಪರಿಹರಿಸಿಕೊಳ್ಳುವಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ತಾಲ್ಲೂಕುಗಳಲ್ಲಿ ಸಭೆ ನಡೆಸುವುದರಿಂದ ಪ್ರಕರಣಗಳ ಮೇಲಿನ ನಿಗಾಕ್ಕೆ ಹಾಗೂ ನಿಯತ್ರಣಕ್ಕೆ ಅನುಕೂಲವಾಗಲಿದೆ ಎಂದರು.

ADVERTISEMENT

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ಎಸಗಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ. ದೌರ್ಜನ್ಯ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿರುವ ಪ್ರದೇಶಗಳಿಗೆ ಪೊಲೀಸ್ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭೇಟಿ ನೀಡಿ ಜನರಲ್ಲಿ ಜಾಗೃತಿ ಹಾಗೂ ಕಾನೂನಿನ ಅರಿವು ಮೂಡಿಸಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ ಮಾತನಾಡಿ, ದೌರ್ಜನ್ಯ ಪ್ರಕರಣಕ್ಕೆ ಒಳಗಾದವರು ಬಡವರು, ಕೂಲಿ ಕಾರ್ಮಿಕರೂ ಆಗಿರುತ್ತಾರೆ. ಪ್ರಕರಣ ದಾಖಲಿಸಲು ಬರುವಾಗ ಗುರುತಿನ ಚೀಟಿ, ಆಧಾರ್ ಕಾರ್ಡ್‌ಗಳನ್ನು ತರಬೇಕು. ಬಂದು ಹೋಗುವ ವೆಚ್ಚವನ್ನು ಸಮಾಜ ಕಲ್ಯಾಣ ಇಲಾಖೆ ಭರಿಸಲಿದೆ ಎಂದು ತಿಳಿಸಿದರು.

ಮುಖಂಡರು ತಮ್ಮ ವ್ಯಾಪ್ತಿಗೆ ಬರುವ ಸಮುದಾಯದಲ್ಲಿ ಸಭೆಯನ್ನು ಕರೆದು ಅವರಿಗೆ ಕಾನೂನಿನ ಅರಿವು ಮೂಡಿಸುವಂತೆ ಸೂಚಿಸಿದರು.

ಇತ್ತೀಚಿನ ದಿನದಲ್ಲಿ ಪೋಕ್ಸೊ ಪ್ರಕರಣ ಹೆಚ್ಚಾಗಿದ್ದು, 15, 16, 17, 18 ವರ್ಷದ ಮಕ್ಕಳು ಹೆಚ್ಚಾಗಿ ಈ ಪ್ರಕರಣಕ್ಕೆ ಈಡಾಗುತ್ತಿದ್ದಾರೆ. ಶಾಲೆ ಬಿಟ್ಟ ಹೆಣ್ಣು ಮಕ್ಕಳನ್ನು ಶಾಲೆಗೆ ಹೋಗುವಂತೆ ಪ್ರೇರೇಪಿಸಬೇಕು. ಸ್ಥಳೀಯ ಮುಖಂಡರು ಇಂತಹ ಮಕ್ಕಳನ್ನು ಗುರುತಿಸಿ ಅಧಿಕಾರಿಗಳ ಗಮನಕ್ಕೆ ತಂದರೆ ಅಂತವರನ್ನು ಪುನಃ ಶಾಲೆಗೆ ಸೇರಿಸಿ ವಿದ್ಯಾಭ್ಯಾಸ ಮುಂದುವರಿಸಲು ಕ್ರಮ ವಹಿಸುವರು ಎಂದು ಹೇಳಿದರು.

ಸಭೆಯಲ್ಲಿ ಜಿ.ಪಂ.ಉಪ ಕಾರ್ಯದರ್ಶಿ ಶಂಕರ ಕೊರವರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಬಿ.ಮಾಲತಿ, ಸರ್ಕಾರಿ ಅಭಿಯೋಜಕ ಲೋಹಿತಾಚಾರ್ಯ, ತಹಶೀಲ್ದಾರ್‌ಗಳು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಸಮಿತಿ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.