ADVERTISEMENT

ಚಿಕ್ಕಮಗಳೂರು: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2025, 14:32 IST
Last Updated 11 ಏಪ್ರಿಲ್ 2025, 14:32 IST
ಪ್ರೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ವಿರೋಧಿಸಿ ಕಾರಿಗೆ ಹಗ್ಗ ಕಟ್ಟಿ ಎಳೆಯುವ ಮೂಲಕ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು
ಪ್ರೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ವಿರೋಧಿಸಿ ಕಾರಿಗೆ ಹಗ್ಗ ಕಟ್ಟಿ ಎಳೆಯುವ ಮೂಲಕ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು   

ಚಿಕ್ಕಮಗಳೂರು: ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ದರವನ್ನು ಕೇಂದ್ರ ಸರ್ಕಾರ ಹೆಚ್ಚಳ ಮಾಡಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಮಾರುತಿ ಕಾರಿಗೆ ಹಗ್ಗ ಕಟ್ಟಿಕೊಂಡು ನಗರದ ಹನುಮಂತಪ್ಪ ವೃತ್ತದಿಂದ ಎಳೆದು ತಂದರು. ಅಡುಗೆ ಅನಿಲದ ಸಿಲೆಂಡರ್ ಹೊತ್ತು ಮೆರವಣಿಗೆ ನಡೆಸಿದರು. ಆಜಾದ್ ಪಾರ್ಕ್ ವೃತ್ತದಲ್ಲಿ ಬಹಿರಂಗ ಸಭೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಡಾ.ಕೆ.ಪಿ. ಅಂಶುಮಂತ್ ಮಾತನಾಡಿ, ‘ಕೇಂದ್ರ ಸರ್ಕಾರವು ಅದಾನಿ, ಅಂಬಾನಿ ರಕ್ಷಣೆ ಮಾಡಿಕೊಂಡು ಕಾಲ ಕಳೆಯುತ್ತಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಇಳಿಕೆಯಾಗಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ಮಾಡಿ ಜನರ ಮೇಲೆ ಬೆಲೆ ಏರಿಕೆ ಬರೆ ಎಳೆದಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

‘₹400 ಇದ್ದ ಅಡುಗೆ ಅನಿಲದ ಸಿಲಿಂಡರ್ ಬೆಲೆ ಸಾವಿರ ಗಡಿ ತಲುಪಿದೆ. ಯಾವ ನೈತಿಕತೆ ಆಧಾರದ ಮೇಲೆ ರಾಜ್ಯದಲ್ಲಿ ಬಿಜೆಪಿ ಮುಖಂಡರು ಬೆಲೆ ಏರಿಕೆ ವಿರೋಧಿಸಿ ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ’ ಎಂದು ಪ್ರಶ್ನಿಸಿದರು.

ಬಿಜೆಪಿ ತನ್ನ ಜವಾಬ್ದಾರಿ ಮರೆತಿದ್ದು, ರಚನಾತ್ಮಕ ವಿರೋಧ ಪಕ್ಷವಾಗಿ ಕೆಲಸ ಮಾಡುವಲ್ಲಿಯೂ ವಿಫಲವಾಗಿದೆ ಎಂದರು.

ಕೆಪಿಸಿಸಿ ವಕ್ತಾರ ಎಚ್.ಎಚ್. ದೇವರಾಜ್ ಮಾತನಾಡಿ, ‘ಹಲವು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷಕ್ಕೆ ಆಡಳಿತ ಅನುಭವ ಇದೆ. ಮನಮೋಹನ ಸಿಂಗ್ ಪ್ರಧಾನಿಯಾಗಿದ್ದ ಅವಧಿಯಲ್ಲಿ ವಿವಿಧ ಸವಲತ್ತು ನೀಡಿರುವ ಬಗ್ಗೆ ಬಿಜೆಪಿ ಮುಖಂಡರು ಆತ್ಮಾವಲೋಕನ ಮಾಡಿಕೊಳ್ಳುವುದು ಒಳ್ಳೆಯದು’ ಎಂದರು.

ದೇಶಕ್ಕೆ ಮಾದರಿ ಆಡಳಿತ ನೀಡುತ್ತಿರುವ ರಾಜ್ಯ ಸರ್ಕಾರದ ಗ್ಯಾರಂಟಿಗಳನ್ನು ಬಿಜೆಪಿ ಮುಖಂಡರು ನಕಲು ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಎಐಸಿಸಿ ಕಾರ್ಯದರ್ಶಿ ಬಿ.ಎಂ. ಸಂದೀಪ್ ಮಾತನಾಡಿ, ‘ಕೇಂದ್ರ ಸರ್ಕಾರವೇ ಅಡುಗೆ ಅನಿಲ ಮತ್ತು ಇಂಧನ ಬೆಲೆ ಹೆಚ್ಚಿಸಿದೆ. ರಾಜ್ಯದಲ್ಲಿ ಬೆಲೆ ಏರಿಕೆ ವಿರೋಧಿಸಿ ಜನಾಕ್ರೋಶ ಯಾತ್ರೆ ನಡೆಸುತ್ತಿರುವುದರಲ್ಲಿ ಅರ್ಥವಿಲ್ಲ. ಕೇಂದ್ರ ಸರ್ಕಾರ ನುಡಿದಂತೆ ನಡೆಯುತ್ತಿಲ್ಲ, ಹಾಗಾಗಿ ಲೋಕಸಭೆ ಚುನಾವಣೆಯಲ್ಲಿ ಬಹುಮತ ಬಾರದೆ ಪ್ರಾದೇಶಿಕ ಪಕ್ಷಗಳ ಬೆಂಬಲ ಪಡೆದುಕೊಂಡಿದೆ’ ಎಂದರು.

ಕಾಂಗ್ರೆಸ್ ಮುಖಂಡರಾದ ಗಾಯಿತ್ರಿ ಶಾಂತೇಗೌಡ, ಡಿ.ಎಲ್.ವಿಜಯಕುಮಾರ್, ಎಂ.ಸಿ. ಶಿವಾನಂದಸ್ವಾಮಿ, ಎಚ್.ಪಿ. ಮಂಜೇಗೌಡ, ಹಿರೇಮಗಳೂರು ರಾಮಚಂದ್ರ, ಮಲ್ಲೇಶ್, ಜಯರಾಜ ನಾಯ್ಡು, ರಮೇಶ್, ಉಪ್ಪಳ್ಳಿ ಕೆ. ಭರತ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.