
ಚಿಕ್ಕಮಗಳೂರು: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆ ಈ ಬಾರಿ ಹೆಚ್ಚಿನ ಮಹತ್ವ ಪಡೆದುಕೊಂಡಿದ್ದು, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಮತ್ತು ಎಸ್.ಎಲ್.ಭೋಜೇಗೌಡ ಸೇರಿ ಪ್ರಮುಖರು ನಾಮಪತ್ರ ಸಲ್ಲಿಸಿದ್ದಾರೆ.
13 ನಿರ್ದೇಶಕ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಸಿ.ಟಿ.ರವಿ ಮತ್ತು ಎಸ್.ಎಲ್.ಭೋಜೇಗೌಡ ಒಟ್ಟಾಗಿಯೇ ತೆರಳಿ ನಾಮಪತ್ರ ಸಲ್ಲಿಕೆ ಮಾಡಿದರು.
ಇನ್ನು ವಿಧಾನ ಪರಿಷತ್ ಉಪಸಭಾಪತಿಯಾಗಿದ್ದ ಧರ್ಮೇಗೌಡ ಅವರ ಪುತ್ರ ಎಸ್.ಡಿ.ಸೋನಾಲ್, ಮುಗುಳುವಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಎಂ.ಎಸ್.ನಿರಂಜನ್, ಕೊಪ್ಪ ತಾಲ್ಲೂಕು ಲ್ಯಾಪ್ಸ್ ಸಹಕಾರ ಸಂಘದ ಪ್ರತಿನಿಧಿಯಾಗಿ ಎಂ.ಮಹೇಶ್, ಕೊಪ್ಪ ತಾಲ್ಲೂಕು ಹೇರೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರತಿನಿಧಿಯಾಗಿ ಕೆ.ಎಸ್. ರವೀಂದ್ರ, ತರೀಕೆರೆ ಪಟ್ಟಣ ಸಹಕಾರ ಸಂಘದಿಂದ ಟಿ.ಎಲ್.ರಮೇಶ್, ಚಿಕ್ಕಮಗಳೂರು ತಾಲ್ಲೂಕು ಕೆಳಗೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಎಚ್.ಬಿ. ಸತೀಶ್ ನಾಮಪತ್ರ ಸಲ್ಲಿಸಿದ್ದಾರೆ.
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್, ಡಿಸಿಸಿ ಬ್ಯಾಂಕ್ ನಿಕಟಪೂರ್ವ ಅಧ್ಯಕ್ಷ ಡಿ.ಎಸ್.ಸುರೇಶ್ ಕೂಡ ನಾಮಪತ್ರ ಸಲ್ಲಿಸಲು ಸಜ್ಜಾಗಿದ್ದಾರೆ. ನಾಮಪತ್ರ ಸಲ್ಲಿಕೆಗೆ ಜ.9ರಂದು ಕೊನೆಯ ದಿನ. ಬಿಜೆಪಿ ಮುಖಂಡರೇ ಹೆಚ್ಚಿನ ಸಂಖ್ಯೆಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಕೊನೆಯ ದಿನದ ತನಕ ಗುಟ್ಟು ಉಳಿಸಿಕೊಂಡಿದೆ. ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಶಾಸಕರಿದ್ದಾರೆ. ಸಹಕಾರ ಸಂಘಗಳಲ್ಲಿ ಇರುವ ತಮ್ಮ ಪಕ್ಷದ ಬೆಂಬಲಿತ ಚುನಾಯಿತರ ಬಲ, ಎದುರಾಳಿಗಳ ಶಕ್ತಿ ಎಲ್ಲವನ್ನೂ ಗಮನಿಸಿಕೊಂಡು ಎಚ್ಚರಿಕೆಯ ಹೆಜ್ಜೆ ಇಡಲು ತಂತ್ರಗಾರಿಕೆ ರೂಪಿಸುತ್ತಿದೆ. ನಾಮಪತ್ರ ಸಲ್ಲಿಕೆಗೆ ಒಂದು ದಿನ ಮಾತ್ರ ಬಾಕಿ ಇದ್ದು, ಶುಕ್ರವಾರ ಸಂಜೆಯ ವೇಳೆ ಅಭ್ಯರ್ಥಿಗಳು ಯಾರಾಗಲಿದ್ದಾರೆ ಎಂಬ ಕುತೂಹಲ ತಣಿಯಲಿದೆ.
ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಮುಂದುವರಿಯಲಿದೆ. ಅದೇ ರೀತಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿಯೂ ಕಾರ್ಯಕರ್ತರ ಅಭಿಪ್ರಾಯದಂತೆ ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸಲಾಗುತ್ತಿದೆ.ಎಸ್.ಎಲ್.ಭೋಜೇಗೌಡ ವಿಧಾನ ಪರಿಷತ್ ಸದಸ್ಯ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.