ADVERTISEMENT

ಹೆದ್ದಾರಿ ಕಾಮಗಾರಿ: ಸಕಾಲದಲ್ಲಿ ಪೂರ್ಣಗೊಳಿಸಿ

ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 24 ಜನವರಿ 2026, 7:27 IST
Last Updated 24 ಜನವರಿ 2026, 7:27 IST
ರಾಷ್ಟ್ರೀಯ ಹೆದ್ದಾರಿ 173, 206 ಮತ್ತು 169ರ ಅಭಿವೃದ್ಧಿ ಸಂಬಂಧ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಭೆ ನಡೆಯಿತು
ರಾಷ್ಟ್ರೀಯ ಹೆದ್ದಾರಿ 173, 206 ಮತ್ತು 169ರ ಅಭಿವೃದ್ಧಿ ಸಂಬಂಧ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಭೆ ನಡೆಯಿತು   

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿ 173, 206 ಮತ್ತು 169ರ ಅಭಿವೃದ್ಧಿ ಸಂಬಂಧ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಹೆದ್ದಾರಿ 173ರ ಮೂಡಿಗೆರೆ-ಮೂಗ್ತೀಹಳ್ಳಿಯ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಶೀಘ್ರ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಅರ್ಹ ಗುತ್ತಿಗೆದಾರರಿಗೆ ಟೆಂಡರ್ ವಹಿಸಲು ಸಂಬಂಧಿಸಿದ ಆರ್.ಒ.ಗಳಿಗೆ ಸಲ್ಲಿಸಿ ಅನುಮೋದನೆ ಪಡೆಯಬೇಕು. ಕೂಡಲೇ ಕೆಲಸ ಆರಂಭಿಸಬೇಕು ಎಂದರು.

ADVERTISEMENT

ಈ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ವಶಪಡಿಸಿಕೊಳ್ಳಲಾದ ಭೂಸ್ವಾಧೀನ ಪ್ರಕ್ರಿಯೆಯನ್ನು ಚುರುಕುಗೊಳಿಸಿ 152 ಫಲಾನುಭವಿಗಳಲ್ಲಿ ಸೂಕ್ತ ದಾಖಲಾತಿ ಸಲ್ಲಿಸಿರುವ 55 ಮಂದಿಗೆ ನಿಗದಿಪಡಿಸಲಾದ ಪರಿಹಾರವನ್ನು ಕೋರ್ಟ್‌ನಲ್ಲಿ ಠೇವಣಿ ಇಟ್ಟು ಕಾಮಗಾರಿಯನ್ನು ಪ್ರಾರಂಭಿಸಲಾಗಿದೆ. ಉಳಿದ ಹೆಚ್ಚುವರಿ ಭೂಮಿಗೆ ಅನುಮೋದನೆಗಾಗಿ ಪ್ರಸ್ತಾವನೆ ಸಲ್ಲಿಸಿ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು.

ಜಿಲ್ಲೆಯ ಹೆದ್ದಾರಿ ಸಂಬಂಧ ಭೂಮಿಗೆ ಅರಣ್ಯ ತೀರುವಳಿ ಪ್ರಕ್ರಿಯೆ ಶೀಘ್ರವಾಗಿ ಬಗೆಹರಿಸಲು ಅಧಿಕಾರಿಗಳು ಮುಂದಾಗಬೇಕು. ಅರಣ್ಯ ತೀರುವಳಿ ಪ್ರಸ್ತಾವನೆಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ತೆರವುಗೊಳಿಸಲು ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಪ್ರಯತ್ನಿಸಬೇಕು. ಭೂಸ್ವಾಧೀನ ಪರಿಹಾರ ವಿತರಿಸುವ ಪ್ರಕ್ರಿಯೆಯನ್ನು ಮತ್ತಷ್ಟು ಚುರುಕುಗೊಳಿಸಿ ಅರ್ಹ ಫಲಾನುಭವಿಗಳಿಗೆ ನ್ಯಾಯಯುತ ಪರಿಹಾರ ನೀಡಿ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ನಿಗಾ ವಹಿಸಿ ಕೆಲಸ ಮಾಡಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಮಾತನಾಡಿ, ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಗಳಿಗೆ ಸಂಬಂಧಪಟ್ಟಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳು, ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ನಿವಾರಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಉಪವಿಭಾಗಾಧಿಕಾರಿ ಬಿ.ಕೆ.ಸುದರ್ಶನ್, ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್ ಮಂಜುನಾಥ್ ನಾಯಕ್, ವಿವಿಧ ಇಲಾಖೆಯ ಅಧಿಕಾರಿಗಳು, ಅರಣ್ಯ ಮತ್ತಿತರ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.